

ಚನ್ನರಾಯಪಟ್ಟಣ: ಜನಸಂಖ್ಯೆಗೆ ಅನುಗುಣವಾಗಿ ವಿಶಾಲವಾಗಿ ಬೆಳೆಯುತ್ತಿರುವ ಪಟ್ಟಣದ ವಸತಿ ಬಡಾವಣೆಗಳಿಗೆ ಮೂಲಸೌಕರ್ಯ ಕಲ್ಪಿಸಲು ಸಹಕಾರ ನೀಡಬೇಕೆಂದು ಶಾಸಕ ಸಿ.ಎನ್.ಬಾಲಕೃಷ್ಣ ಮನವಿ ಮಾಡಿದರು.
ಪಟ್ಟಣದ ಮಖಾನ್ ಮುಖ್ಯ ರಸ್ತೆಯಿಂದ ಖಬರ್‌ಸ್ತಾನದ ಮೂಲಕ ಗದ್ದೆ ಬಿಂಡೇನಳ್ಳಿಗೆ ಸಂಪರ್ಕಿಸುವ ರಸ್ತೆ ಕಾಮಗಾರಿ ವಿರೋಧಿಸಿದ್ದ ಮುಸ್ಲಿಂ ಮುಖಂಡರು ಹಾಗೂ ರೈತರ ಮನವೊಲಿಸಿದ ನಂತರ ಅವರು ಮಾತನಾಡಿದರು.
ಹಾಸನ ಹೊರತುಪಡಿಸಿದರೆ ಅತಿ ವೇಗವಾಗಿ ಪಟ್ಟಣ ಬೆಳೆಯುತ್ತಿದೆ. ಹಾಗಾಗಿ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿ ಮಾಡಬಾರದು. ಸಮಗ್ರ ಅಭಿವೃದ್ಧಿಗೆ ಎಲ್ಲರೂ ಶ್ರಮಿಸುವ ಮೂಲಕ ಮಾದರಿ ಪಟ್ಟಣ ಮಾಡುವ ಸಂಕಲ್ಪ ಮಾಡಬೇಕು. ಚನ್ನರಾಯಪಟ್ಟಣ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ಮುಖ್ಯಮಂತ್ರಿಗಳು ಹಾಗೂ ಪೌರಾಡಳಿತ ಸಚಿವರಿಗೆ ಮುಂದಿನ ಬಜೆಟ್ ಅಧಿವೇಶನದಲ್ಲಿ ಘೋಷಿಸಲು ಮನವಿ ಮಾಡಿದ್ದೇವೆ ಎಂದರು.
15ನೇ ಹಣಕಾಸು ಯೋಜನೆ ಮತ್ತು ಪುರಸಭೆ ಅನುದಾನ ಒಟ್ಟು 50 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಹಾಗೂ ಚರಂಡಿ ನಿರ್ಮಿಸಲಾಗುವುದು. ಸಾರ್ವಜನಿಕರಿಗೆ ಮೂಲಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಪುರಸಭೆ ಶ್ರಮಿಸುತ್ತಿದೆ. ಪಟ್ಟಣದ ಅಭಿವೃದ್ಧಿಗಾಗಿ ಸರ್ಕಾರದ ವಿವಿಧ ಯೋಜನೆಗಳ ಮೂಲಕ ಶ್ರಮಿಸುತ್ತಿದ್ದೇನೆ. ಜನರ ಕಷ್ಟ, ಕಾರ್ಪಣ್ಯಗಳಿಗೆ ಸ್ಪಂದಿಸುವ ಪ್ರಯತ್ನ ಮಾಡಿದ್ದೇನೆ. ಸರ್ಕಾರ ಅಭಿವೃದ್ಧಿಗೆ ಅನುದಾನವನ್ನೇ ನೀಡುತ್ತಿಲ್ಲ. ಹೀಗಾಗಿ ಹೊಸ ಹೊಸ ಕಾಮಗಾರಿಗಳಿಗೆ ಅನುದಾನದ ಕೊರತೆ ಉಂಟಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈ ಭಾಗದ ಬಹುದಿನದ ಬೇಡಿಕೆಯಾಗಿದ್ದ ರಸ್ತೆ ಕಾಮಗಾರಿಯಿಂದ ಈ ಭಾಗದ ಸಾರ್ವಜನಿಕರಿಗೆ ಅನುಕೂಲವಾಗಲಿದೆ. ಪಟ್ಟಣ ಅಭಿವೃದ್ಧಿಪಡಿಸಲು ಹೆಚ್ಚಿನ ಮೂಲಸೌಕರ್ಯ ದೊರಕಿಸಲು ಪ್ರಯತ್ನಿಸಲಾಗುವುದು. ಸಂಬಂಧಪಟ್ಟ ಗುತ್ತಿಗೆದಾರರು ಗುಣಮಟ್ಟದ ರಸ್ತೆ, ಎರಡು ಬದಿ ಚರಂಡಿಯನ್ನು ನಿಗದಿತ ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಪುರಸಭಾ ಅಧ್ಯಕ್ಷ ಸಿ.ಎನ್.ಮೋಹನ್, ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಆರ್.ಸುರೇಶ್, ಮುಖ್ಯಾಧಿಕಾರಿ ಆರ್.ಯತೀಶ್ ಕುಮಾರ್, ಗಿರೀಶ್, ಮುಖಂಡರಾದ ರಘು, ರಾಜು, ಗೋಪಿ, ಚಂದ್ ಪಾಷಾ, ಉಫ್ರಾನ್ ಪಾಷಾ, ಜಯಪಾಲ್ ಜೋಗಿ, ಸಲೀಂ ಪಾಷಾ, ಮುದಬ್ಬಿ, ಅಮನ್ ಸೇರಿದಂತೆ ಜಾಮಿಯಾ ಮಸೀದಿಯ ಮುಖಂಡರು ಹಾಗೂ ಗ್ರಾಮಸ್ಥರು ಇದ್ದರು.