

ವಿಜಯವಾಣಿ ಸುದ್ದಿಜಾಲ ಧಾರವಾಡ
ಪ್ರತಿಯೊಬ್ಬರೂ ಮಕ್ಕಳ ಬಗ್ಗೆ ಕಾಳಜಿ ವಹಿಸಿ ಅವರ ಹಕ್ಕುಗಳ ರಕ್ಷಣೆಗೆ ಬದ್ಧರಾಗಿರಬೇಕು. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿವಿಧ ಯೋಜನೆಗಳ ಸೌಲಭ್ಯ ಪಡೆಯುವ ಪ್ರತಿ ಫಲಾನುಭವಿಯಿಂದ ಮಕ್ಕಳ ರಕ್ಷಣೆ ಮತ್ತು ಸುರಕ್ಷತೆ ಕುರಿತು ಬದ್ಧತಾ ಘೋಷಣೆಯ ಪ್ರಮಾಣಪತ್ರ ಪಡೆದು, ಅವರನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಳ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಮಕ್ಕಳ ರಕ್ಷಣಾ ವ್ಯವಸ್ಥೆ ಕುರಿತು ಭಾಗಿದಾರರೊಂದಿಗೆ ಸಮಾಲೋಚನೆ ಹಾಗೂ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಕುಟುಂಬ ಸದಸ್ಯರು, ಸಂಬ0ಧಿಕರು ಮತ್ತು ಪರಿಚಯಸ್ಥರಿಂದ ಮಕ್ಕಳ ಮೇಲೆ ದೌರ್ಜನ್ಯವಾಗಿರುವ ಪ್ರಕರಣಗಳಿವೆ. ಸರ್ಕಾರ, ಸಂಸ್ಥೆ, ಆಯೋಗ, ಪೊಲೀಸ್ ಸೇರಿ ಎಲ್ಲ ಇಲಾಖೆಗಳು ಕಾನೂನಾತ್ಮಕವಾಗಿ ಮಕ್ಕಳ ರಕ್ಷಣೆಗೆ ಶ್ರಮಿಸಬೇಕು.
ಕಲಘಟಗಿ ತಾಲೂಕಿನ ದಾಸ್ತಿಕೊಪ್ಪ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯೊಂದಿಗೆ ಶಿಕ್ಷಕ ಅಸಭ್ಯ ವರ್ತನೆ ತೋರಿ, ಬೆದರಿಕೆ ಹಾಕಿದ ಘಟನೆ ನಡೆದಿದೆ. ಶಿಕ್ಷಕನ ವಿರುದ್ಧ ಕ್ಷೇತ್ರ ಶಿಕ್ಷಣಾಧಿಕಾರಿ ಕೂಡಲೇ ಎಫ್‌ಐಆರ್ ದಾಖಲಿಸಬೇಕು ಎಂದು ಸೂಚಿಸಿದರು.
ಜಿಲ್ಲೆಯಲ್ಲಿ ಅನಽಕೃತ ಶಾಲೆ ಹಾಗೂ ಕೋಚಿಂಗ್ ಕೇಂದ್ರಗಳು ನಡೆಯುತ್ತಿವೆ. ಒಂದು ತಿಂಗಳಲ್ಲಿ ಅವುಗಳ ವಿರುದ್ಧ ಕ್ರಮ ಜರುಗಿಸಿ ವರದಿ ನೀಡಬೇಕು. ಶಾಲೆಗಳಲ್ಲಿ ಸಲಹಾ ಪೆಟ್ಟಿಗೆ, ಸಿಸಿ ಕ್ಯಾಮರಾ ಕಡ್ಡಾಯ ಮಾಡಬೇಕು ಎಂದರು.
ಜಿಲ್ಲಾ ಪಂಚಾಯಿತಿ ಸಿಇಒ ಸ್ವರೂಪ ಟಿ.ಕೆ., ಜಿಲ್ಲಾ ಕಾನೂನು ಸೇವೆಗಳ ಪ್ರಾಽಕಾರದ ಸದಸ್ಯ ಕಾರ್ಯದರ್ಶಿ, ಹಿರಿಯ ಸಿವಿಲ್ ನ್ಯಾಯಾಽÃಶ ಪಿ.ಎಫ್. ದೊಡ್ಡಮನಿ ಮಾತನಾಡಿದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನೀತಾ ವಾಡಕರ ಸ್ವಾಗತಿಸಿದರು. ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಶುಭಾ ಪಿ., ಜಿಲ್ಲಾ ಆರೋಗ್ಯಾಧಿಕಾರಿ ಡಾ. ಶಶಿ ಪಾಟೀಲ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಪದ್ಮಾವತಿ ಜಿ., ಇತರರಿದ್ದರು.