

ಬೇಲೂರು: ಮನುಷ್ಯನ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಕ್ರೀಡೆ ಮಹತ್ತರವಾದ ಪಾತ್ರ ವಹಿಸುವುದರಿಂದ ಪ್ರತಿಯೊಬ್ಬರು ಒಂದಿಲ್ಲೊಂದು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಶಾಸಕ ಎಚ್.ಕೆ.ಸುರೇಶ್ ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಶಾಲಾ ಶಿಕ್ಷಣಾ ಇಲಾಖೆ ಹಾಗೂ ಹೊಯ್ಸಳ ಪ್ರೌಢಶಾಲೆ ಸಹಯೋಗದೊಂದಿಗೆ ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಮಂಗಳವಾರ ಆಯೋಜಿಸಿದ್ದ 2024-25ನೇ ಸಾಲಿನ ತಾಲೂಕು ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಕ್ರೀಡಾಜ್ಯೋತಿ ಸ್ವಾಗತಿಸಿ ಮಾತನಾಡಿದರು.
ಹಿಂದೆ ರಕ್ತದೊತ್ತಡ, ಮಧುಮೇಹ ಎಂಬುದು ಗೊತ್ತಿರಲಿಲ್ಲ. ಆದರೆ, ಇಂದು ಅದು ಸಾಮಾನ್ಯವಾಗಿದೆ. ಶ್ರಮವಹಿಸಿ ಕೆಲಸ ಮಾಡದಿರುವುದೇ ಇದಕ್ಕೆಲ್ಲ ಕಾರಣವಾಗಿದೆ. ಯುವ ಜನತೆ ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು.
ಪಟ್ಟಣ ಸಮೀಪದ ಎಸ್.ಸೂರಾಪುರ ಗ್ರಾಮದಲ್ಲಿ ತಾಲೂಕು ಕ್ರೀಡಾಂಗಣದ ಕಾಮಗಾರಿ ನಡೆಯುತ್ತಿದ್ದು, ಮಳೆಯ ಕಾರಣದಿಂದ ತಡವಾಗಿದೆ. ಅಲ್ಲಿ ಕ್ರೀಡಾಪಟುಗಳಿಗೆ ಹಾಗೂ ಕ್ರೀಡೆಗೆ ಬೇಕಾದ ಎಲ್ಲ ಅಗತ್ಯ ಸೌಲಭ್ಯ ಕಲ್ಪಿಸಿ, ಒಳಾಂಗಣ ಕ್ರೀಡಾಂಗಣ ನಿರ್ಮಾಣಕ್ಕೂ ಕ್ರಮ ಕೈಗೊಳ್ಳಲಾಗುವುದು ಎಂದರು.
ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಧನಂಜಯ ಮಾತನಾಡಿ, ವಿದ್ಯಾರ್ಥಿಗಳು ಪಠ್ಯದೊಂದಿಗೆ ಕ್ರೀಡೆಗಳಲ್ಲೂ ಭಾಗವಹಿಸುವುದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡಿ ಕೊಳ್ಳಬಹುದು ಎಂದರು.
ತಾಪಂ ಮಾಜಿ ಅಧ್ಯಕ್ಷ ಪರ್ವತಯ್ಯ, ಪುರಸಭೆ ಮಾಜಿ ಸದಸ್ಯ ಮಂಜುನಾಥ್, ಪತ್ರಕರ್ತರ ಸಂಘದ ಅಧ್ಯಕ್ಷೆ ಭಾರತೀಗೌಡ, ದೈಹಿಕ ಶಿಕ್ಷಣ ಪರಿವೀಕ್ಷಕ ಜಗದೀಶ್, ಹೊಯ್ಸಳ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಪ್ರಕಾಶ್, ಪ್ರೌಢಶಾಲಾ ವಿಭಾಗದ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಹೇಮಂತ್ ಕುಮಾರ್, ಕಾರ್ಯದರ್ಶಿ ನವೀನ್, ಸರ್ಕಾರಿ ನೌಕರರ ಸಂಘದ ನಿದೇಶಕ ಭದ್ರೇಗೌಡ, ದೈಹಿಕ ಶಿಕ್ಷಣ ಶಿಕ್ಷಕ ನಂದೀಶ್ ಇತರರಿದ್ದರು.