

ಮುಂಡರಗಿ: ವಿದ್ಯಾರ್ಥಿಗಳು ತಮ್ಮ ಮನೆಗಳ ಸುತ್ತ ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಪ್ರತಿಯೊಬ್ಬರೂ ಸ್ವಚ್ಛತೆಯ ಬಗ್ಗೆ ಹೆಚ್ಚು ಜಾಗೃತಿ ವಹಿಸುವ ಮೂಲಕ ಉತ್ತಮ ಆರೋಗ್ಯದತ್ತಹೆಚ್ಚಿನ ಕಾಳಜಿ ವಹಿಸಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಲಕ್ಷ್ಮಣ ಪೂಜಾರ ಹೇಳಿದರು.
ಪಟ್ಟಣದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗದಗ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಾರ್ಯಾಲಯ, ತಾಲೂಕಾಡಳಿತ, ತಾಪಂ, ಸಾರ್ವಜನಿಕ ಶಿಕ್ಷಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿ ಆಶ್ರಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ವಿಶ್ವ ಮಲೇರಿಯಾ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ತರಬೇತಿ ಅಧಿಕಾರಿ ಚನ್ನಸಂಗಪ್ಪ ಗಡೆದ ಮಾತನಾಡಿ, ರೋಗವಾಹಕ ಸೊಳ್ಳೆಗಳಿಂದ ಹರಡುವ ರೋಗಗಳಾದ ಮಲೇರಿಯಾ, ಡೆಂಘೆ, ಚಿಕೂನ್ಗುನ್ಯಾ, ಆನೆ ಕಾಲು ರೋಗ, ಮಿದುಳು ಜ್ವರ ರೋಗಗಳು ಬರುತ್ತವೆ. ಅದಕ್ಕಾಗಿ ಸೊಳ್ಳೆಗಳ ನಿಯಂತ್ರಣ ಅತಿ ಅವಶ್ಯ. ಈ ಎಲ್ಲ ರೋಗಗಳು ಬರದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಎಲ್ಲರೂ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು.
ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಕೆ.ವಿ. ಬಡಿಗೇರ ಮಾತನಾಡಿದರು. ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಮಂಜುಳಾ ಸಜ್ಜನರ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೆ.ಎಸ್. ಚೌಟಗಿ ಪ್ರಾರ್ಥಿನಿಸಿದರು. ಅರುಣಕುಮಾರ ಕಮ್ಮಾರ, ಸಿದ್ದಲಿಂಗೇಶ ಕಬ್ಬೂರಮಠ ಹಾಗೂ ಎಸ್.ಎಲ್. ಕೋರಿ ಕಾರ್ಯಕ್ರಮ ನಿರ್ವಹಿಸಿದರು.