ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡಲು ಎಲ್ಲರೂ ಕಾರ್ಯಪ್ರವೃತರಾಗಿ; ಎಂ.ಭೃಂಗೇಶ್

MDK03
Published on

ಮಡಿಕೇರಿ: ಬಾಲಕಾರ್ಮಿಕ ಪದ್ಧತಿಯನ್ನು ಹೋಗಲಾಡಿಸುವಲ್ಲಿ ಅಧಿಕಾರಿಗಳ ಪಾತ್ರ ಅತಿ ಮುಖ್ಯವಾದದ್ದು, ಮಕ್ಕಳನ್ನು ಬಾಲಕಾರ್ಮಿಕ ಪದ್ಧತಿಯಿಂದ ನಿರ್ಮೂಲನೆ ಮಾಡುವಲ್ಲಿ ಎಲ್ಲರೂ ಕಾರ್ಯಪ್ರವೃತ್ತರಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಎಂ.ಭೃಂಗೇಶ್ ಹೇಳಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಇವರ ಸಂಯುಕ್ತಾಶ್ರಯದಲ್ಲಿ ಬಾಲ್ಯಾವಸ್ಥೆಯ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ(ನಿಷೇಧ ಮತ್ತು ನಿಯಂತ್ರಣ) ಕಾಯ್ದೆ ೧೯೮೬ ತಿದ್ದುಪಡಿ ಕಾಯ್ದೆ ೨೦೧೬ ರ ಕಲಂ ೧೭ರ ಅಡಿಯಲ್ಲಿ ನೇಮಕವಾದ ವಿವಿಧ ಇಲಾಖೆಗಳ ನಿರೀಕ್ಷಕರುಗಳಿಗೆ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಮಕ್ಕಳು ಫ್ಯಾಕ್ಟರಿಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರನ್ನು ಶೋಷಣೆಗೆ ಒಳಗಾಗದಂತೆ ನೋಡಿಕೊಳ್ಳುವುದು ಅಧಿಕಾರಿಗಳ ಕರ್ತವ್ಯ. ಈ ನಿಟ್ಟಿನಲ್ಲಿ ಅಧಿಕಾರಿಗಳು ಬಾಲ ಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡುವಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದರು.


೧೪ ವರ್ಷದ ಕೆಳಗಿನ ಮಕ್ಕಳನ್ನು ದುಡಿಸುವುದು ಅಪರಾಧ. ಚಿಕ್ಕ ಮಕ್ಕಳನ್ನು ಯಾವುದೇ ಕೆಲಸಕ್ಕೆ ಮೀಸಲಿಡಬಾರದು. ಎಲ್ಲಾ ಅಧಿಕಾರಿ ವರ್ಗದವರು ತಮ್ಮ ಕರ್ತವ್ಯ ಪಾಲನೆಯಲ್ಲಿ ತೊಡಗಿಕೊಳ್ಳಬೇಕು. ಇಂತಹ ಕಾರ್ಯಗಾರದಿಂದ ತಮ್ಮಲ್ಲಿರುವ ಕೊರತೆಗಳನ್ನು ನೀಗಿಸುವಲ್ಲಿ ಸಹಕಾರಿಯಾಗುತ್ತದೆ ಎಂದರು.


ಅಧಿಕಾರಿಗಳಿಗೆ ತಿದ್ದುಪಡಿ ಕಾಯ್ದೆಗಳ ಬಗ್ಗೆ ಅರಿವು ಇರಬೇಕು. ಅರಿವು ಇಲ್ಲದಿದ್ದರೆ ಕೆಲಸ ನಿರ್ವಹಿಸಲು ಕಷ್ಟ ಸಾಧ್ಯ. ಈ ನಿಟ್ಟಿನಲ್ಲಿ ಇಂತಹ ತರಬೇತಿ ಕಾರ್ಯಕ್ರಮಗಳು ಸಹಕಾರಿಯಾಗಲಿವೆ ಎಂದರು.


ವಕೀಲರ ಸಂಘದ ಅಧ್ಯಕ್ಷ ಕೆ.ಡಿ.ದಯಾನಂದ ಮಾತನಾಡಿ, ದೇಶದ ಮುಖ್ಯ ಆಸ್ತಿ ಯುವ ಪೀಳಿಗೆ. ಶಿಕ್ಷಣದಿಂದ ಯಾರು ವಂಚಿತರಾಗಬಾರದು, ಪ್ರತಿಯೊಬ್ಬರು ಶಿಕ್ಷಣ ಪಡೆಯಬೇಕು. ಮಕ್ಕಳಿಗೆ ಶಿಕ್ಷಣವನ್ನು ನೀಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಮಕ್ಕಳನ್ನು ಶೋಷಣೆಗೆ ಬಳಸಿಕೊಳ್ಳುವುದನ್ನು ನಿಷೀಧ ಮಾಡಬೇಕು ಎಂದರು.


ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ಮಾತನಾಡಿ, ಬಾಲಕಾರ್ಮಿಕ ಪದ್ಧತಿಗಳ ವಿರುದ್ಧ ಸರ್ಕಾರಿ ನೌಕರರೆಲ್ಲರೂ ಜಾಗರೂಕರಾಗಿರಬೇಕು. ತಮ್ಮಲ್ಲಿ ಆಗುವಂತಹ ಸಹಾಯವನ್ನು ಮಕ್ಕಳಿಗೆ ನೀಡಿ ಯಾರಾದರೂ ಶೋಷಿತರಾಗಿದ್ದಲ್ಲಿ ಅವರನ್ನು ಬೆಳಕಿಗೆ ತರುವಂತ ಕೆಲಸವಾಗಬೇಕು. ಬಾಲ ಕಾರ್ಮಿಕ ಪದ್ಧತಿಯಿಂದ ಬಾಲ ಕಾರ್ಮಿಕರನ್ನು ಮುಕ್ತರನ್ನಾಗಿ ಮಾಡುವುದಕ್ಕಾಗಿ ಎಲ್ಲರೂ ಶ್ರಮಿಸೋಣ ಎಂದರು.


ಕಾರ್ಯಗಾರದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್, ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಳ್ಳಾಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಎನ್.ಮಂಜುನಾಥ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಶೇಖರ್, ಕೊಪ್ಪಳ ಯುನಿಸೆಫ್ ಮಕ್ಕಳ ಸಂರಕ್ಷಣಾ ಯೋಜನೆಯ ಪ್ರಾದೇಶಿಕ ಸಂಯೋಜಕ ಕೆ.ರಾಘವೇಂದ್ರ ಭಟ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net