ಅರ್ಹರೆಲ್ಲರೂ ಮತ ಹಕ್ಕು ಚಲಾಯಿಸಬೇಕು

30adarshkdga8
Published on

ಮಡಿಕೇರಿ: ಮೇ೧೦ ರಂದು ನಡೆಯುವ ವಿಧಾನಸಭಾ ಚುನಾವಣೆಯ ಮತದಾನದಂದು ಅರ್ಹರೆಲ್ಲರೂ ಮತ ಹಕ್ಕು ಚಲಾಯಿಸಬೇಕು ಎಂದು ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ಹೇಳಿದರು.


ಅರ್ಹರೆಲ್ಲರೂ ಮತದಾನ ಮಾಡುವಂತಾಗಲು ನಮ್ಮ ನಡೆ ಮತಗಟ್ಟೆಯ ಕಡೆಗೆ ಕಾರ್ಯಕ್ರಮ ಪ್ರಯುಕ್ತ ಜಿಲ್ಲಾಡಳಿತ, ಜಿಲ್ಲಾ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ(ಸ್ವೀಪ್) ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಹಮ್ಮಿಕೊಂಡಿದ್ದ ಜಾಥ ಕಾರ್ಯಕ್ರಮಕ್ಕೆ ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಜಾಥಾಗೆ ಚಾಲನೆ ನೀಡಿ ಮಾತನಾಡಿದರು.


ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರಲ್ಲಿ ಮತದಾನದ ಮಹತ್ವ ಕುರಿತು ಸ್ವೀಪ್ ಸಮಿತಿ ವತಿಯಿಂದ ಹಲವು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆ ನಿಟ್ಟಿನಲ್ಲಿ ಅರ್ಹರು ತಪ್ಪದೆ ಮತ ಚಲಾಯಿಸಬೇಕು ಎಂದು ಹೇಳಿದರು.


ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯು ಮಾತನಾಡಿ, ಮತದಾನಕ್ಕೆ ಅರ್ಹರಾಗಿರುವ ಎಲ್ಲರೂ ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಪ್ರಜಾಪ್ರಭುತ್ವ ಬಲಪಡಿಸಲು ಮುಂದಾಗಬೇಕು. ಜಿಲ್ಲಾಡಳಿತ, ಸ್ವೀಪ್ ಸಮಿತಿ ಜತೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಮತದಾನದ ಮಹತ್ವ ಕುರಿತು ಸಂದೇಶ ಸಾರುವಲ್ಲಿ ಜಾಥ ಏರ್ಪಡಿಸಲಾಗಿದೆ. ಆ ನಿಟ್ಟಿನಲ್ಲಿ ಯುವ ಮತದಾರರು ತಪ್ಪದೆ ಮತ ಹಕ್ಕು ಚಲಾಯಿಸಬೇಕು. ಇದರಿಂದ ಇಡೀ ವಿಶ್ವದಲ್ಲಿ ಮಾದರಿಯಾದ ಸಂವಿಧಾನ ಒಳಗೊಂಡಿರುವ ಪ್ರಜೆಗಳ ಪ್ರಭುತ್ವವನ್ನು ನಿರ್ಮಾಣ ಮಾಡಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.


ಕೊಡಗು ಜಿಲ್ಲೆಯ ಎಲ್ಲೆಡೆ ಮತದಾನದ ಜಾಗೃತಿಯನ್ನು ವಿವಿಧ ರೀತಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಆ ನಿಟ್ಟಿನಲ್ಲಿ ಸ್ವೀಪ್ ಸಮಿತಿ ಅಧ್ಯಕ್ಷರ ಸಲಹೆಯಂತೆ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ಮೇ೫ ರಂದು ನಗರದಲ್ಲಿ ಮತದಾರರ ಜಾಗೃತಿ ಜಾಥವನ್ನು ಆಯೋಜಿಸಲಾಗುತ್ತಿದೆ ಎಂದರು.


ಜಾಥವು ಮಂಗೇರಿರ ಮುತ್ತಣ್ಣ ವೃತ್ತ, ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ.ದೇವಯ್ಯ ವೃತ್ತದ ಮೂಲಕ ಹಿಲ್ ರಸ್ತೆಯಲ್ಲಿ ಇರುವ ಸರ್ಕಾರಿ ಪ್ರಾಥಮಿಕ ಶಾಲೆಗೆ ತಲುಪಿತು.


ಕಾರ್ಯಕ್ರಮದಲ್ಲಿ ವಿಧಾನಸಭಾ ಚುನಾವಣೆಯ ಜಿಲ್ಲಾ ರಾಯಭಾರಿ ಕೆ.ರವಿಮುತ್ತಪ್ಪ, ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿ ರಾಜಗೋಪಾಲ್, ನವೀನ್, ಮಡಿಕೇರಿ ತಾಲ್ಲೂಕು ಜಾನಪದ ಪರಿಷತ್ ಅಧ್ಯಕ್ಷ ಎಚ್.ಟಿ.ಅನಿಲ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿ.ಟಿ.ವಿಸ್ಮಯಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಎಂ.ವಸಂತಿ, ಸಹ ಕಾರ್ಯದರ್ಶಿ ಬೊಳ್ಳಜಿರ ಅಯ್ಯಪ್ಪ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net