

ಹನೂರು: ಮುನ್ನೆಚ್ಚರಿಕೆ ಕ್ರಮದ ಬಗ್ಗೆ ಅರಿವು ಮೂಡಿಸುವ ಮೂಲಕ ಮಲೇರಿಯಾ ನಿರ್ಮೂಲನೆಗೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದು ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ರಾಜೇಶ್ ಕುಮಾರ್ ತಿಳಿಸಿದರು.
ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಮಂಗಳವಾರ ವಿಶ್ವ ಮಲೇರೀಯಾ ನಿಯಂತ್ರಣ ದಿನದ ಅಂಗವಾಗಿ ಆಯೋಜಿಸಿದ್ದ ಜಾಗೃತಿ ಜಾಥಾದಲ್ಲಿ ಮಾತನಾಡಿದರು.
ಮಲೇರಿಯಾ ಅನಾಫೀಲಿಸ್ ಜಾತಿಗೆ ಸೇರಿದ ಹೆಣ್ಣು ಸೊಳ್ಳೆಯಿಂದ ಹರಡುತ್ತದೆ. ದೇಹದಲ್ಲಿ ಚಳಿ ಆವರಿಸುವುದು, ಜ್ವರ ಏರಿಕೆಯಾಗುವುದು, ಬೆವರುವುದು, ತಲೆನೋವು ಮಲೇರಿಯಾ ಪ್ರಮುಖ ಲಕ್ಷಣಗಳು. ಆದ್ದರಿಂದ ಯಾವುದೇ ರೋಗಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಆಗಮಿಸಿದ ತಕ್ಷಣ ಕಡ್ಡಾಯವಾಗಿ ರಕ್ತ ಪರೀಕ್ಷೆ ನಡೆಸಬೇಕು. ರೋಗ ಕಂಡು ಬಂದಲ್ಲಿ ಅಗತ್ಯ ಚಿಕಿತ್ಸೆ ನೀಡಿ ಅನುಸರಿಸಬಹುದಾದ ಅಗತ್ಯ ಮುಂಜಾಗ್ರತಾ ಕ್ರಮಗಳ ಬಗ್ಗೆ ತಿಳಿಸಿ ಕೊಡಬೇಕು. ರೋಗ ನಿರ್ಮೂಲನೆಗೆ ಗ್ರಾಪಂ ಜನಪ್ರತಿನಿಧಿಗಳು ಹಾಗೂ ಸ್ಥಳೀಯ ಮುಖಂಡರ ಸಹಕಾರ ಪಡೆಯಬೇಕು. ಜನರಲ್ಲಿ ಅರಿವು ಮೂಡಿಸಬೇಕು ಎಂದು ತಿಳಿಸಿದರು.
ಬಳಿಕ ಆಶಾ ಕಾರ್ಯಕರ್ತೆಯರು, ನರ್ಸ್‌ಗಳು, ವೈದ್ಯರು ಹಾಗೂ ಆಸ್ಪತ್ರೆ ಸಿಬ್ಬಂದಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಘೋಷಣೆಗಳನ್ನು ಕೂಗುತ್ತಾ ಸಾರ್ವಜನಿಕರಲ್ಲಿ ಮಲೇರಿಯಾ ನಿರ್ಮೂಲನೆ ಕುರಿತು ಜಾಗೃತಿ ಮೂಡಿಸಿದರು.
ಈ ಸಂದರ್ಭದಲ್ಲಿ ತಹಸೀಲ್ದಾರ್ ವೈ.ಕೆ.ಗುರುಪ್ರಸಾದ್, ತಾಪಂ ಇಒ ಉಮೇಶ್, ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರಕಾಶ್, ವೈದ್ಯರಾದ ಡಾ.ಪುಷ್ಪರಾಣಿ, ಡಾ.ಜಾಹ್ನವಿ ಇತರರು ಇದ್ದರು.