

ಕಲಬುರಗಿ: ಲೋಕಸಭೆ ಚುನಾವಣೆ ಹೊತ್ತಿನಲ್ಲಿ ಜಿಲ್ಲೆಯಲ್ಲಿ ರಾಜಕೀಯ ಪಲ್ಲಟಗಳು ಆರಂಭವಾಗಿದ್ದು, ರಾಜ್ಯ ರಾಜಕಾರಣದಲ್ಲಿ ಗಮನ ಸೆಳೆದಿದ್ದ ಅಫಜಲಪುರ ವಿಧಾನಸಭೆ ಕ್ಷೇತ್ರದ ಗುತ್ತೇದಾರ್ ಸಹೋದರರ ಸವಾಲು ಇದೀಗ, ಮತ್ತೊಂದು ಸುತ್ತಿನ ರಾಜಕೀಯ ಬದಲಾವಣೆಗೆ ಮುನ್ನುಡಿ ಬರೆದಿದ್ದು, ಬಿಜೆಪಿಯಲ್ಲಿದ್ದು ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಘರ್ಜಿಸುತ್ತಿದ್ದ ಮಾಲಿಕಯ್ಯ ಗುತ್ತೇದಾರ್ ಇದೀಗ ಕಾಂಗ್ರೆಸ್ ಬಾಗಿಲು ಬಡಿದಿದ್ದು, ಅಚ್ಚರಿ ಮೂಡಿಸಿದೆ.
ಗುರುವಾರ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ನಿತೀನ್ ಗುತ್ತೆದಾರ್ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ಪಕ್ಷ ಸೇರ್ಪಡೆಗೊಂಡ ಬೆನ್ನಲೇ, ಅವರ ಸಹೋದರ ಮಾಲೀಕಯ್ಯ ಗುತ್ತೇದಾರ್ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಅಚ್ಚರಿ ಮೂಡಿಸಿದ್ದಾರೆ.
ಬೆಂಗಳೂರಿನ ಡಿಕೆ ಶಿವಕುಮಾರ್ ನಿವಾಸದಲ್ಲಿ ಪುತ್ರ ರಿತೇಶ್ ಗುತ್ತೇದಾರ್ ಜತೆ ತೆರಳಿ ಭೇಟಿಯಾಗಿರುವ ಮಾಲೀಕಯ್ಯ ಗುತ್ತೇದಾರ್ ಅವರು ಸಹೋದರ ನಿತೀನ್ ಬಿಜೆಪಿ ಸೇರ್ಪಡೆ ಬೆನ್ನಲ್ಲೆ ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ ಎನ್ನಲಾಗುತ್ತಿದೆ. ಶುಕ್ರವಾರ ಕಲಬುರಗಿಯಲ್ಲಿ ನಡೆಯುವ ಕಾಂಗ್ರೆಸ್ ಸಮಾವೇಶದಲ್ಲಿ ಮಾಲೀಕಯ್ಯ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎನ್ನುತ್ತವೆ ಮೂಲಗಳು.
ಕಲಬುರಗಿ ನಗರದಲ್ಲಿ ನೂತನ ವಿದ್ಯಾಲಯ ಮೈದಾನದಲ್ಲಿ ನಡೆಯಲಿರುವ ಕಾಂಗ್ರೆಸ್ ಬೃಹತ್ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಅನೇಕರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.