

ಬೆಂಗಳೂರು: ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದಲ್ಲಿ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮ (ಕೆಆರ್‌ಐಡಿಎಲ್) ನಿಂದ ಹಮ್ಮಿಕೊಂಡಿದ್ದ ಭೂಮಿಪೂಜೆ ಕಾರ್ಯಕ್ರಮದಲ್ಲಿ ಕ್ಷೇತ್ರದ ಶಾಸಕರು ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ವಿಷಯದಲ್ಲಿ ಶಿಷ್ಟಾಚಾರ ಲೋಪ ಎಸಗಿದ ಅಧಿಕಾರಿ ವಿರುದ್ಧ ಸರ್ಕಾರ ಶಿಸ್ತು ಕ್ರಮ ಕೈಗೊಂಡಿದೆ.
ಮಾಜಿ ಮುಖ್ಯಮಂತ್ರಿಗಳ ವಿಷಯದಲ್ಲಿ ಶಿಷ್ಟಾಚಾರ ಉಲ್ಲಂಘನೆ ಮಾಡಿದ ಕಾರಣಕ್ಕೆ ರಾಮನಗರ ವಿಭಾಗದ ಪ್ರಭಾರ ಕಾರ್ಯಪಾಲಕ ಎಂಜಿನಿಯರ್ ವಿ.ಶ್ರೀಧರ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
ಈ ಬಗ್ಗೆ ಇಂದು ಆದೇಶ ಹೊರಡಿಸಿರುವ ನಿಗಮದ ವ್ಯವಸ್ಥಾಪಕ ನಿರ್ದೇಶಕ ಎಂ.ಜೆ.ಹಿರೇಮಠ್, ಇಲಾಖೆ ವಿಚಾರಣೆಯನ್ನು ಕಾಯ್ದಿರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಿದ್ದಾರೆ.
2022 ಅಕ್ಟೋಬರ್ 1ರಂದು ಕುಮಾರಸ್ವಾಮಿ ಅವರಿಗೆ ಮಾಹಿತಿ ನೀಡದೆ ಹಾಗೂ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನ ನೀಡದೆ ಕೆಆರ್‌ಐಡಿಎಲ್‌ನಿಂದ ಕೈಗೆತ್ತಿಕೊಳ್ಳಲಾಗಿದ್ದ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ಪೂಜೆ ಮಾಡಲಾಗಿತ್ತು.
ಅಲ್ಲದೆ, ಕ್ಷೇತ್ರದ ವಿಧಾನ ಪರಿಷತ್ ಸದಸ್ಯರು ತಮ್ಮ ಹಿಂಬಾಲಕರನ್ನು ಇಟ್ಟುಕೊಂಡು ಅಧಿಕಾರಿಗಳ ಬೆಂಬಲದೊಂದಿಗೆ ಕಾಮಗಾರಿಗಳಿಗೆ ಸಾವಿರಾರು ಪೊಲೀಸರ ರಕ್ಷಣೆಯೊಂದಿಗೆ ಪೂಜೆ ಮಾಡಲು ಹೊರಟಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು.
ಈ ಬಗ್ಗೆ ಕುಮಾರಸ್ವಾಮಿ ತಮ್ಮ ಹಕ್ಕು ಚ್ಯುತಿ ಆಗಿದೆ ಎಂದು ಸ್ಪೀಕರ್‌ಗೆ ದೂರು ನೀಡಿದ್ದರು. ಅಲ್ಲದೆ ಜೆಡಿಎಸ್ ಈ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿತು