ರಾಜ್ಯದ ಎಲ್ಲ ಜಿಲ್ಲೆಗಳಿಗೂ ‘ಡೇ ಕೇರ್ ಕೀಮೋಥೆರಪಿ ಕೇಂದ್ರ’ ವಿಸ್ತರಣೆ : ಮುಖ್ಯಮಂತ್ರಿ ಸಿದ್ದರಾಮಯ್ಯ

SiddaramaiahPCOX_vb_03
Published on

ಮೈಸೂರು: ಕ್ಯಾನ್ಸರ್ ರೋಗಿಗಳ ಅನುಕೂಲಕೋಸ್ಕರ ರಾಜ್ಯದ 16 ಜಿಲ್ಲಾ ಆಸ್ಪತ್ರೆಗಳಲ್ಲಿ ‘ಡೇ ಕೇರ್ ಕೀಮೋಥೆರಪಿ ಕೇಂದ್ರ’ ಇಂದಿನಿಂದ ಪ್ರಾರಂ ಭಗೊಂಡಿದ್ದು, ಈ ಕೇಂದ್ರಗಳನ್ನು ರಾಜ್ಯದ ಉಳಿದ ಜಿಲ್ಲೆಗಳಿಗೂ ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಡೇ ಕೇರ್ ಕೀಮೋಥೆರಪಿ ಕೇಂದ್ರ ಉದ್ಘಾಟಿಸಿ ಮಾತನಾಡಿ, ಮೈಸೂರು ಕೇಂದ್ರದಲ್ಲಿ 20 ಹಾಸಿಗೆಗಳು ಇದ್ದು, ವಿಜಯಪುರ, ಉಡುಪಿ, ಬಳ್ಳಾರಿ, ಧಾರವಾಡ, ಚಿತ್ರದುರ್ಗ, ವಿಜಯನಗರ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಬೆಂಗಳೂರು ನಗರ (ಸಿವಿ ರಾಮನ್ ಆಸ್ಪತ್ರೆ), ದಕ್ಷಿಣ ಕನ್ನಡ, ದಾವಣಗೆರೆ, ತುಮಕೂರು, ಕೋಲಾರ ಮತ್ತು ಬಾಗಲಕೋಟೆ ಜಿಲ್ಲಾ ಆಸ್ಪತ್ರೆಯಲ್ಲಿ 10 ಹಾಸಿಗೆಗಳ ಕೇಂದ್ರ ತೆರೆಯಲಾಗಿದೆ ಎಂದರು.

ಬಹಳಷ್ಟು ಕ್ಯಾನ್ಸರ್ ಪೀಡಿತರು ಕೀಮೋಥೆರಪಿಗೆ ಬೆಂಗಳೂರಿನ ಕಿದ್ವಾಯಿಗೆ ಹೋಗಬೇಕಾಗಿತ್ತು. ಎಲ್ಲ ರೋಗಿಗಳಿಗೆ ಬೆಂಗಳೂರಿಗೆ ಹೋಗಿ ಚಿಕಿತ್ಸೆ ಪಡೆಯಲು ಸಾಧ್ಯವಿಲ್ಲ. ರಾಜ್ಯದಲ್ಲಿ ಪ್ರತಿ ವರ್ಷ 70 ಸಾವಿರ ಹೊಸ ಕ್ಯಾನ್ಸರ್ ಪ್ರಕರಣಗಳು ಪತ್ತೆ ಆಗುತ್ತಿದೆ. ಬಹಳಷ್ಟು ಬಡ ರೋಗಿಗಳು ಚಿಕಿತ್ಸೆ ಪಡೆದುಕೊಳ್ಳದೆ ಅಕಾಲಿಕ ಮರಣಕ್ಕೆ ಒಳಗಾಗುತ್ತಿದ್ದಾರೆ. ತಮಿಳುನಾಡು ಹೊರತು ಪಡಿಸಿದರೆ ಹೆಚ್ಚಿನ ಸಂಖ್ಯೆಯಲ್ಲಿ ಕ್ಯಾನ್ಸರ್ ರೋಗಿಗಳನ್ನು ಹೊಂದಿರುವ ರಾಜ್ಯ ನಮ್ಮದಾಗಿದೆ. ಹಾಗಾಗಿ ಆರಂಭದಲ್ಲೇ ಕ್ಯಾನ್ಸರ್ ರೋಗ ಪತ್ತೆ ಹಚ್ಚಿ ಚಿಕಿತ್ಸೆ ಪಡೆಯಬೇಕು ಎಂದು ಸಲಹೆ ನೀಡಿದರು.

ವೈದ್ಯಕೀಯ ಸೇವೆಗಳು ಕೇವಲ ಬೆಂಗಳೂರು ಕೇಂದೀಕೃತ ಆಗಬಾರದು ಎಂಬ ಉದ್ದೇಶದಿಂದ ಡೇ ಕೇರ್ ಕೀಮೋಥೆರಪಿ ಕೇಂದ್ರ ಸೇರಿದಂತೆ ವಿವಿಧ ವೈದ್ಯಕೀಯ ಸೌಲಭ್ಯಗಳನ್ನು ರಾಜ್ಯದ ಎಲ್ಲ ಜಿಲ್ಲೆಗಳಿಗೂ ವಿಸ್ತರಿಸುತ್ತಿದ್ದೇವೆ. ಎಂಆರ್‌ಐ ಸ್ಕಾೃನ್ ಸೇವೆಯನ್ನು ಮೈಸೂರಿಗೆ ನೀಡಲು ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದೆ. ಎಲ್ಲ ಜಿಲ್ಲೆಗಳಿಗೂ ಎಂಆರ್‌ಐ ನೀಡುವ ಗುರಿ ಇದೆ. ಮೈಸೂರಿಗೆ ನಿಮಾನ್ಸ್ ಕೇಂದ್ರವನ್ನು ಬಜೆಟ್‌ನಲ್ಲಿ ಘೋಷಣೆ ಮಾಡಿದ್ದೇನೆ. ಇದೀಗ ರಾಜ್ಯದ ಎಲ್ಲ ತಾಲೂಕು ಕೇಂದ್ರದಲ್ಲಿ ಡಯಾಲಿಸಿಸ್ ಕೇಂದ್ರ ತೆರೆದಿದ್ದೇವೆ ಎಂದು ಹೇಳಿದರು.

ಖಾಸಗಿ ಆಸ್ಪತ್ರೆಗೆ ಹೋದರೆ ಕಾಯಿಲೆ ಗುಣಮುಖವಾಗುತ್ತದೆ ಎಂಬ ಭಾವನೆ ಸಾಕಷ್ಟು ಜನರಲ್ಲಿ ಇದೆ. ಆದರೆ ಹೆಚ್ಚಿನ ಸಂಖ್ಯೆಯಲ್ಲಿ ತಜ್ಞ ವೈದ್ಯರು ಇರುವುದು ಸರ್ಕಾರಿ ಆಸ್ಪತ್ರೆಯಲ್ಲಿ. ಜಯದೇವ ಆಸ್ಪತ್ರೆ ಯಾವ ಖಾಸಗಿ ಆಸ್ಪತ್ರೆಗಿಂತ ಕಡಿಮೆ ಇದೆ? ಸರ್ಕಾರಿ ಆಸ್ಪತ್ರೆಯಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲು ಅಧಿಕಾರಿಗಳು ಗಮನ ಹರಿಸಬೇಕು ಎಂದರು.

ಜನರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಇಲ್ಲವಾದಲ್ಲಿ ಗುಣಮಟ್ಟದ ಜೀವ ನಡೆಸಲು ಸಾಧ್ಯವಾಗುವುದಿಲ್ಲ. ಗುಣಮಟ್ಟದ ಜೀವನ ಇಲ್ಲದೆ ಹೋದರೆ ದೇಶದ ಅಭಿವೃದ್ಧಿಯಲ್ಲಿ ನಿಮ್ಮ ಪಾತ್ರ ಕಡಿಮೆ ಆಗುತ್ತದೆ. ದೇಶದ ಅಭಿವೃದ್ಧಿ ಹೆಚ್ಚಾಗಬೇಕಾದರೆ ಜನರ ಆರೋಗ್ಯ ಉತ್ತಮವಾಗಿರಬೇಕು. ಜನರು ಉತ್ತಮ ಜೀವನಶೈಲಿಯನ್ನು ರೂಢಿಸಿಕೊಂಡು ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ದಿನೇಶ್ ಗುಂಡೂರಾವ್ ಮಾತನಾಡಿ, ‘ಡೇ ಕೇರ್ ಕೀಮೋಥೆರಪಿ ಕೇಂದ್ರ’ ಜನರಿಗೆ ಬಹಳ ಅನುಕೂಲ ಆಗುವ ಸೇವೆ ಇದು. ಬಹಳಷ್ಟು ಬಡ ಜನರಿಗೆ ವೈದ್ಯಕೀಯ ಸೇವೆ ಪಡೆಯಲು ಸಾಧ್ಯವಿಲ್ಲದ ಪರಿಸ್ಥಿತಿ ಇದೆ. ಈ ಕಾರಣಕೋಸ್ಕರ ಕೇಂದ್ರ ಪ್ರಾರಂಭಿಸಿದ್ದೇವೆ. ಕಿದ್ವಾಯಿ ಆಸ್ಪತ್ರೆಯನ್ನು ಮೈಸೂರಿನಲ್ಲಿ ಶೀಘ್ರದಲ್ಲೇ ನಿರ್ಮಾಣ ಮಾಡಲಾಗುವುದು ಎಂದರು.

ರಾಜ್ಯದಲ್ಲಿ 70 ಸಾವಿರ ಕ್ಯಾನ್ಸರ್ ಪ್ರಕರಣಗಳು ಕಂಡು ಬರುತ್ತಿದೆ. ಜೀವನ ಶೈಲಿ, ಆಹಾರ ಪದ್ದತಿಯಿಂದ ಕಾಯಿಲೆಗಳು ಕಾಣಿಸಿಕೊಳ್ಳುತ್ತಿದೆ. ಬಡವರಿಗೆ ಬೆಂಗಳೂರಿನ ಕಿದ್ವಾಯಿಗೆ ಹೋಗಿ ಬರಲು ಸಾಧ್ಯವಿಲ್ಲ. ಹೀಗಾಗಿ ಒಂದು ಬಾರಿ ಚಿಕಿತ್ಸೆಗೆ ಪಡೆದವರು ಮತ್ತೆ ಕಿಮೋ ಥೆರಪಿಗೆ ಬೆಂಗಳೂರಿಗೆ ಆಗಮಿಸುತ್ತಿರಲಿಲ್ಲ. ಈ ಸಮಸ್ಯೆ ಇದೀಗ ಪರಿಹಾರ ಆಗಿದೆ. ಇದೀಗ 16 ಜಿಲ್ಲಾ ಆಸ್ಪತ್ರೆಗಳಲ್ಲಿ 10 ಹಾಸಿಗೆಯ ಡೇ ಕೇರ್ ಕೀಮೋಥೆರಪಿ ಕೇಂದ್ರ ತೆರೆದಿದ್ದೇವೆ ಎಂದು ಹೇಳಿದರು.

ಬಡ ಜನರ ಕಣ್ಣೀರು ಒರೆಸಬೇಕು ಎಂಬುದು ಗಾಂಧೀಜಿ ಅವರ ಕನಸು. ಗಾಂಧೀಜಿ ಕನಸು ಸಾಕಾರಗೊಳಿಸುವ ರೀತಿಯಲ್ಲಿ ಸಿದ್ದರಾಮಯ್ಯ ಆಡಳಿತ ನಡೆಸುತ್ತಿದ್ದಾರೆ. ಬಡವರಿಗೆ ಸಹಾಯ ಮಾಡಲು 56 ಇಂಚು ಎದೆ ಇದ್ದರೆ ಸಾಲದು, 100 ಕ್ಕೂ ಹೆಚ್ಚು ಇಂಚು ಎದೆ ಬೇಕು. ಅಷ್ಟೊಂದು ಹೃದಯ ವೈಶಾಲ್ಯತೆ ಸಿದ್ದರಾಮಯ್ಯ ಅವರಿಗೆ ಇದೆ ಎಂದರು.

ಶಾಸಕರಾದ ಕೆ.ಹರೀಶ್ ಗೌಡ ಮಾತನಾಡಿ, ಮೈಸೂರಿನಲ್ಲಿ ಎಲ್ಲ ರೀತಿಯ ಆರೋಗ್ಯ ಸೇವೆಗಳು ದೊರೆಯುವಂತೆ ಮಾಡಿದ ಕೀರ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಬೇಕು. ನಿಮಾನ್ಸ್ ಆಸ್ಪತ್ರೆ ಮೈಸೂರಿಗೆ ಬಂದರೆ ಎಲ್ಲ ರೀತಿಯ ಆರೋಗ್ಯ ಸೇವೆ ದೊರೆತಂತೆ ಆಗುತ್ತದೆ. ಸಿದ್ದರಾಮಯ್ಯ ಶಾಶ್ವತ ಮುಖ್ಯಮಂತ್ರಿಯಾಗಲಿ ಎಂದು ಹಾರೈಸಿದರು.

ವೇದಿಕೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ, ವಿಧಾನ ಪರಿಷತ್ ಸದಸ್ಯರಾದ ಡಾ. ಯತೀಂದ್ರ ಸಿದ್ದರಾಮಯ್ಯ, ಡಿ. ತಿಮ್ಮಯ್ಯ, ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರ ಅಧ್ಯಕ್ಷ ಅಯೂಬ್ ಖಾನ್, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ದೇಶಕ ಡಾ.ಎಂ.ಜಿ. ತ್ರಿವೇಣಿ, ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕ ಡಾ. ನವೀನ್ ಭಟ್, ಬೆಂಗಳೂರಿನ ಕಿದ್ವಾಯಿ ಮೆಮೋರಿಯಲ್ ಇನ್ ಸ್ಟಿಟ್ಯೂಟ್ ಆಫ್ ಆಂಕೊಲಾಜಿ ನಿರ್ದೇಶಕ ಡಾ.ಟಿ. ನವೀನ್ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net