ಮಿಮ್ಸ್‌ಗೆ 25 ಕೋಟಿ ರೂ ಅನುದಾನ: ಶಾಸಕ ರವಿಕುಮಾರ್ ಗಣಿಗ ಮನವಿಗೆ ಸ್ಪಂದನೆ

Extensive discussion on MIMS development Mandya
Published on

ಮಂಡ್ಯ: ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಮಿಮ್ಸ್)ಯನ್ನು ಮೇಲ್ದರ್ಜೆಗೇರಿಸುವ ಜತೆಗೆ ನವೀಕರಣ ಕಾಮಗಾರಿಗಳಿಗೆ 25 ಕೋಟಿ ರೂ ಅನುದಾನ ಕೊಡಬೇಕೆಂದು ಶಾಸಕ ರವಿಕುಮಾರ್ ಗಣಿಗ ಮನವಿ ಮಾಡಿದ್ದಾರೆ.

ಬೆಂಗಳೂರಿನ ವಿಧಾನಸೌಧದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಆಯೋಜಿಸಿದ್ದ ಮಿಮ್ಸ್ ಅಭಿವೃದ್ದಿ ಕುರಿತು ವಿಸ್ತೃತ ಚರ್ಚೆಯ ಸಭೆಯಲ್ಲಿ ಮಾತನಾಡಿರುವ ರವಿಕುಮಾರ್ ಗಣಿಗ, ಮಿಮ್ಸ್ ಆವರಣದಲ್ಲಿರುವ ರಸ್ತೆಗಳು, ಚರಂಡಿಗಳ ಅಭಿವೃದ್ಧಿಗೆ 5 ಕೋಟಿ ರೂ, ಕಟ್ಟಡ ನವೀಕರಣ ಮಾಡಲು 10 ಕೋಟಿ ರೂ ಹಾಗೂ ಟ್ರಾಮಾ ಕೇರ್ ಸೆಂಟರ್‌ಗೆ 10 ಕೋಟಿ ರೂ ಅನುದಾನ ನೀಡಬೇಕೆಂದು ಮೌಖಿಕ ಪ್ರಸ್ತಾವನೆ ಸಲ್ಲಿಸಿದರು. ಇದಕ್ಕೆ ಸ್ಪಂದಿಸಿದ ಡಾ.ಶರಣಪ್ರಕಾಶ್ ಪಾಟೀಲ್, ಅನುದಾನ ಕೊಡುವುದಾಗಿ ತಿಳಿಸಿದ್ದಾರೆ.

ಇದಲ್ಲದೆ ಮಿಮ್ಸ್‌ಗೆ ಅಗತ್ಯ ವೈದ್ಯರು, ಸಿಬ್ಬಂದಿ ವರ್ಗದ ನೇಮಕಾತಿಯಾಗಬೇಕು. ಹಾಲಿ ಆಸ್ಪತ್ರೆಯಲ್ಲಿ 400 ಹಾಸಿಗೆಗೆ ಅನುಮೋದನೆ ಇದ್ದರೂ ಸಹ 800ಕ್ಕೂ ಅಧಿಕ ರೋಗಿಗಳನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡಲಾಗುತ್ತಿದೆ. ಹೀಗಾಗಿ ಇದನ್ನು 850 ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೆರಿಸುವ ಅಗತ್ಯ ಇದೆ ಎಂದು ಎನ್.ಚಲುವರಾಯಸ್ವಾಮಿ ಹಾಗೂ ರವಿಕುಮಾರ್ ಗಣಿಗ ಸಚಿವರ ಗಮನ ಸೆಳೆದಿದ್ದಾರೆ.

ಇದಕ್ಕೆ ಉತ್ತರಿಸಿದ ವೈದ್ಯಕೀಯ ಶಿಕ್ಷಣ ಸಚಿವರು, ಪರಿಸರ ಇಲಾಖೆ ಪರವಾನಗಿ ನವೀಕರಿಸಿ 500 ಹಾಸಿಗೆಗಳ ಮೇಲ್ದರ್ಜೆಗೇರಿಸಲು ಪ್ರಸ್ತಾವನೆ ಸಲ್ಲಿಸಿ. ಅಗತ್ಯವಿರುವ ಸಿಬ್ಬಂದಿ ಹಾಗೂ ವೈದ್ಯರನ್ನು ನಿಯಮಾನುಸರವಾಗಿ ನೇಮಕಾತಿ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಅದೇ ರೀತಿ ತುರ್ತು ಚಿಕಿತ್ಸಾ ಘಟಕ ಹಾಗೂ ಲಘು ಶಸ್ತ್ರ ಚಿಕಿತ್ಸಾ ಘಟಕಗಳ ಕೊಠಡಿ ನಿರ್ಮಾಣ/ನವೀಕರಣ, ಕ್ಯಾನ್ಸರ್ ಚಿಕಿತ್ಸಾ ಘಟಕ, ಲಾಂಡ್ರಿ ಸೌಲಭ್ಯ, ಹೆಚ್ಚುವರಿ ಕೊಠಡಿಗಳ ನಿರ್ಮಾಣ, ವಿದ್ಯುತ್ ಪೂರೈಕೆ ಸೇರಿದಂತೆ ಆಸ್ಪತ್ರೆಗೆ ಅಗತ್ಯವಿರುವ ಎಲ್ಲ ಕಾಮಗಾರಿಗಳನ್ನು ಪಟ್ಟಿ ಮಾಡಿ. ಈ ಕುರಿತ ವಿಸ್ತೃತ ಯೋಜನೆಯ ಪ್ರಸ್ತಾವನೆ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ. ದಿನೇಶ್ ಗುಂಡೂರಾವ್ ಮಾತನಾಡಿ, ಜಿಲ್ಲೆಯ ಏಳು ತಾಲೂಕು ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಉನ್ನತೀಕರಣಗೊಳಿಸುವ ಬಗ್ಗೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸಭೆಯಲ್ಲಿ ಭಾಗವಹಿಸಿದ್ದ ಶಾಸಕರು ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಮಿಮ್ಸ್) ಅಭಿವೃದ್ಧಿಗೆ ಸಂಬಂಧಿಸಿದಂತೆ ತಮ್ಮ ಸಲಹೆ, ಸೂಚನೆ ನೀಡಿದ್ದಾರೆ. ಈ ಬಗ್ಗೆ ಮೇಲ್ವಿಚಾರಣೆ ವಹಿಸುವಂತೆ ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗೆ ಸಚಿವರು ತಿಳಿಸಿದ್ದಾರೆ.

ಸಭೆಯಲ್ಲಿ ಶಾಸಕರಾದ ರಮೇಶ ಬಂಡಿಸಿದ್ದೇಗೌಡ, ದರ್ಶನ್ ಪುಟ್ಟಣ್ಣಯ್ಯ, ಕೆ.ಎಂ.ಉದಯ್, ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ, ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮಹಮದ್ ಮೊಹಿಸಿನ್, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ, ಮಿಮ್ಸ್ ನಿರ್ದೇಶಕ ಡಾ.ನರಸಿಂಹಸ್ವಾಮಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net