

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಅಪಾರ್ಟ್ಮೆಂಟ್ ಒಂದರಲ್ಲಿ ನಕಲಿ ಮತದಾರರ ಗುರುತಿನ ಚೀಟಿ ಪತ್ತೆಯಾದ ಪ್ರಕರಣ ಸಂಬಂಧ ಪೊಲೀಸರು ನಡೆಸಿರುವ ತನಿಖೆಯನ್ನು ಪರಿಶೀಲಿಸಿ ವರದಿ ಸಲ್ಲಿಸಲು ಹಿರಿಯ ಐಪಿಎಸ್ ಅಧಿಕಾರಿಯೊಬ್ಬರನ್ನು ನೇಮಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಬೆಂಗಳೂರಿನ ಆನಂದ್ ಕುಮಾರ್ ಹಾಗೂ ಸಂತೋಷ್ ಕುಮಾರ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಿಜೆ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠ ಬುಧವಾರ ವಿಚಾರಣೆ ನಡೆಸಿತು.
ಅರ್ಜಿದಾರರ ಪರ ಹಿರಿಯ ವಕೀಲ ಎ.ಎಸ್. ಪೊನ್ನಣ್ಣ ವಾದ ಮಂಡಿಸಿ, ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಫ್ಲ್ಯಾಟ್ ಒಂದರಲ್ಲಿ ನಕಲಿ ಮತದಾರರ ಗುರುತಿನ ಚೀಟಿಗಳು ಪತ್ತೆಯಾಗಿದ್ದವು. ಈ ಸಂಬಂಧ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ 2 ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಆದರೆ, ಪೊಲೀಸರು ಪ್ರಾಮಾಣಿಕವಾಗಿ ತನಿಖೆ ನಡೆಸಿಲ್ಲ. ಪ್ರತ್ಯಕ್ಷ್ಯ ಸಾಕ್ಷಿಗಳ ಹೇಳಿಕೆ ದಾಖಲಿಸಿಲ್ಲ. ಸಿಸಿಟಿವಿ ದೃಶ್ಯಾವಳಿಗಳನ್ನು ತನಿಖೆ ಸೂಕ್ತ ರೀತಿಯಲ್ಲಿ ನಡೆದಿದೆಯೇ, ಇಲ್ಲವೇ ಎಂಬುದನ್ನು ನಾವೇ ನಿರ್ಧರಿಸುವುದು ಕಷ್ಟ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಪೀಠ, ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಲಹಳ್ಳಿ ಠಾಣೆ ಪೊಲೀಸರು ನಡೆಸಿರುವ ತನಿಖೆಯನ್ನು ಪರಿಶೀಲಿಸಲು ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಿರಿಯ ಐಪಿಎಸ್ ಅಧಿಕಾರಿಯೊಬ್ಬರನ್ನು ನೇಮಿಸಬೇಕು. ಅವರು ತನಿಖೆ ಸರಿಯಾಗಿ ನಡೆದಿದೆಯೇ ಇಲ್ಲವೇ ಎಂಬುದನ್ನು ಎಲ್ಲ ಆಯಾಮಗಳಿಂದ ಪರಿಶೀಲಿಸಬೇಕು. ಜತೆಗೆ, ತನಿಖೆ ನಡೆಸಬಹುದಾದ ಅಂಶಗಳೇನಾದರೂ ಇದ್ದರೆ ಅವುಗಳನ್ನೂ ಗುರುತಿಸಬೇಕು. ಪರಿಶೀಲನಾ ವರದಿಯನ್ನು ಡಿ.15ರೊಳಗೆ ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ನಿರ್ದೇಶಿಸಿತು.
ಇದೇ ವೇಳೆ, ದೂರುದಾರರು, ಸಾಕ್ಷಿದಾರರು ಪ್ರಕರಣಕ್ಕೆ ಸಂಬಂಧಿಸಿದ ತಮ್ಮ ಅಹವಾಲುಗಳನ್ನು ವಹಾಗೂ ದಾಖಲೆಗಳನ್ನು ಅಧಿಕಾರಿಗೆ ಸಲ್ಲಿಸಬಹುದು ಎಂದು ತಿಳಿಸಿದ ಪೀಠ ವಿಚಾರಣೆಯನ್ನು ಡಿ. 18ಕ್ಕೆ ಮುಂದೂಡಿತು.
ಅರ್ಜಿದಾರರ ಮನವಿ ಏನು?: 2018ರ ವಿಧಾನಸಭೆ ಚುನಾವಣೆಯಲ್ಲಿ ಮುನಿರತ್ನ ಸ್ಪರ್ಧಿಸಿದ್ದ ಆರ್.ಆರ್.ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜಾಲಹಳ್ಳಿಯ ಅಪಾರ್ಟ್‌ಮೆಂಟ್ ಒಂದರಲ್ಲಿ ಸಾವಿರಾರು ಮತದಾರರ ಗುರುತಿನ ಚೀಟಿಗಳು ಹಾಗೂ ಮುನಿರತ್ನ ಸ್ಪರ್ಧಿಸಿದ್ದ ಪಕ್ಷದ ಕರಪತ್ರಗಳು ಪತ್ತೆಯಾಗಿದ್ದವು. ಅವುಗಳಲ್ಲಿ ನಕಲಿ ವೋಟರ್ ಐಡಿಗಳೂ ಸೇರಿದ್ದವು. ಮತದಾರರ ಗುರುತಿನ ಚೀಟಿ ಸಂಗ್ರಹಿಸುವ ಮೂಲಕ ಮುನಿರತ್ನ ಚುನಾವಣಾ ಅಕ್ರಮವೆಸಗಿದ್ದಾರೆ. ಪ್ರಕರಣದ ಸಂಬಂಧ ರಾಜ್ಯ ಚುನಾವಣಾ ಆಯೋಗ ಹಾಗೂ ಸ್ಥಳೀಯ ನಿವಾಸಿ ರಾಕೇಶ್ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ 2 ಪ್ರತ್ಯೇಕ ದೂರುಗಳನ್ನು ದಾಖಲಿಸಿದ್ದಾರೆ. ಆದರೆ, ಪೊಲೀಸರು ಪ್ರಕರಣದ ತನಿಖೆಯನ್ನು ಸೂಕ್ತ ರೀತಿಯಲ್ಲಿ ನಡೆಸುತ್ತಿಲ್ಲ. ಆದ್ದರಿಂದ, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕೆಂದು ಅರ್ಜಿದಾರರು ಕೋರಿದ್ದಾರೆ.