

ಬೆಂಗಳೂರು: ಬ್ಯಾಡರಹಳ್ಳಿಯಲ್ಲಿ ಒಂದೇ ಕುಟುಂಬದ ಐವರು ಸದಸ್ಯರ ಸಾವು ಪ್ರಕರಣಕ್ಕೆ ಸಂಬಂಸಿದಂತೆ ಮನೆ ಮಾಲೀಕ ಹಲ್ಲೆಗೆರೆ ಶಂಕರ್ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ.
ಪ್ರಕರಣದಲ್ಲಿ ಶಂಕರ್ ಪೊಲೀಸರಿಂದ ಬಂಧನಕ್ಕೊಳಗಾದ ಬೆನ್ನಲ್ಲೇ ಜಾಮೀನಿಗಾಗಿ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಮಂಗಳವಾರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿದೆ. ಮುಂದೆ ಜಾಮೀನಿಗಾಗಿ ಹೈ ಕೋರ್ಟ್ ಮೊರೆ ಹೋಗುವ ಸಾಧ್ಯತೆಗಳಿವೆ. ಸೆ.17ರಂದು ಬ್ಯಾಡರಹಳ್ಳಿಯಲ್ಲಿರುವ ಶಂಕರ್ ಮನೆಯಲ್ಲಿ ಪತ್ನಿ, ಮೂವರು ಮಕ್ಕಳು ಆತ್ಮಹತ್ಯೆಗೆ ಶರಣಾಗಿದ್ದರು. ಇವರು ಆತ್ಮಹತ್ಯೆ ಮಾಡಿಕೊಂಡ ಮರುದಿನ ಶಂಕರ್ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದ. ಆದರೆ, ಆ ಅರ್ಜಿಯೂ ತಿರಸ್ಕೃತಗೊಂಡಿತ್ತು ಎಂದು ತಿಳಿದು ಬಂದಿದೆ.
ಮತ್ತೊಂದೆಡೆ ಬ್ಯಾಡರಹಳ್ಳಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಆತ್ಮಹತ್ಯೆ ಮಾಡಿಕೊಂಡವರ ಮೊಬೈಲ್, ಲ್ಯಾಪ್‌ಟಾಪ್‌ನಲ್ಲಿದ್ದ ಅಂಶಗಳ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ. ಶಂಕರ್ ವಿರುದ್ಧ ಪತ್ತೆಯಾದ ಸಾಕ್ಷ್ಯ ಪರಿಗಣಿಸಿ ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ.