ವಿದ್ಯಾರ್ಥಿಗಳಿಗೆ ಪಾಲಕರ ಕಷ್ಟದ ಅರಿವಿರಲಿ: ಸಹಾಯಕ ಪ್ರಾಧ್ಯಾಪಕ ಡಾ.ಪರಶಿವಮೂರ್ತಿ ಕಿವಿಮಾತು

Farewell ceremony of second PUC students mandya
Published on

ಮದ್ದೂರು: ವಿದ್ಯಾರ್ಥಿಗಳ ನಿರ್ದಿಷ್ಟವಾದ ಗುರಿ ಹೊಂದಿ ಅದರ ಸಾಧನೆಗೆ ನಿರಂತರವಾಗಿ ಪರಿಶ್ರಮ ವಹಿಸಿದರೆ ಉನ್ನತ ಸ್ಧಾನ ಪಡೆಯಬಹುದು ಎಂದು ಸಹಾಯಕ ಪ್ರಾಧ್ಯಾಪಕ ಹಾಗೂ ಮೈಸೂರು ಆಡಳಿತ ತರಬೇತಿ ಸಂಸ್ಧೆಯ ಸಂಪನ್ಮೂಲ ವ್ಯಕ್ತಿ ಡಾ.ಪರಶಿವಮೂರ್ತಿ ಹೇಳಿದರು.

ಪಟ್ಟಣದ ಎಚ್.ಕೆ.ವೀರಣ್ಣಗೌಡ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ಸಂಘದ ೨೦೨೩-೨೪ನೇ ಸಾಲಿನ ಕ್ರೀಡೆ, ಸಾಂಸ್ಕೃತಿಕ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಗಳ ಸಮಾರೋಪ ಸಮಾರಂಭ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ಅವರು, ಪಾಲಕರು ಹಲವಾರು ಕಷ್ಟದ ನಡುವೆಯೂ ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳುತ್ತಾರೆ. ಆದರೆ ವಿದ್ಯಾರ್ಥಿಗಳು ಮೊಬೈಲ್ ಚಾಳಿಗೆ ಬಿದ್ದು ತಮ್ಮ ಶೈಕ್ಷಣಿಕ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ವಿಷಾದಿಸಿದರು.

ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣದಿಂದ ವಿದ್ಯಾರ್ಥಿಗಳು ಮಾನಸಿಕ ಹಾಗೂ ದೈಹಿಕವಾಗಿ ಕಳೆಹೀನರಾಗುತ್ತಿದ್ದು, ಅವರ ಭವಿಷ್ಯವನ್ನ ಚಿಕ್ಕ ವಯಸ್ಸಿನಲ್ಲಿ ಹಾಳು ಮಾಡಿಕೊಂಡು ದುಶ್ಚಟಗಳಿಗೆ ದಾಸರಾಗುತ್ತಿದ್ದಾರೆ. ಈ ಮೂಲಕ ತಮ್ಮ ಜೀವನವನ್ನ ಅಂತ್ಯ ಮಾಡಿಕೊಳ್ಳುತ್ತಿರುವ ಪ್ರಕರಣಗಳು ಸಮಾಜದಲ್ಲಿ ಹೆಚ್ಚಾಗುತ್ತಿರುವುದನ್ನು ಕಾಣುತ್ತಿದ್ದೇವೆ. ಆದ್ದರಿಂದ ಪಾಲಕರು ಹಾಗೂ ಗುರುಗಳ ಮಾರ್ಗದರ್ಶನ ಪಡೆದು ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕೆಂದು ಕಿವಿಮಾತು ಹೇಳಿದರು.

ಎಂ.ಎಚ್.ಚನ್ನೇಗೌಡ ವಿದ್ಯಾಸಂಸ್ಧೆಯ ಅಧ್ಯಕ್ಷ ಎಂ.ಸ್ವರೂಪ್ ಚಂದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಅಂಕ ಗಳಿಕೆಗೆ ಸೀಮಿತವಾಗದೇ ಉತ್ತಮವಾದ ನಡವಳಿಕೆ ಹಾಗೂ ಅಭ್ಯಾಸಗಳನ್ನ ಬೆಳೆಸಿಕೊಂಡು ಸುಸಂಸ್ಕೃತರಾಗಿ ರೂಪುಗೊಳ್ಳಬೇಕು. ಪ್ರತಿ ವಿದ್ಯಾರ್ಥಿಗೂ ಪದವಿ ಪೂರ್ವ ಹಂತ ಬಹುಮುಖ್ಯವಾಗಿದ್ದು, ಪರೀಕ್ಷಾ ಸಮಯ ಸಮೀಪಿಸುತ್ತಿರುವುದರಿಂದ ಪೌಷ್ಟಿಕ ಆಹಾರ ಸೇವಿಸಿ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನ ಕಾಪಾಡಿಕೊಳ್ಳಬೇಕು. ಈ ಮೂಲಕ ಶಿಕ್ಷಕರ ಮಾರ್ಗದರ್ಶನದಲ್ಲಿ ಪರೀಕ್ಷೆಯನ್ನ ಎದುರಿಸಿ ಉತ್ತಮ ಫಲಿತಾಂಶವನ್ನು ಪಡೆದುಕೊಳ್ಳುವುದರ ಮೂಲಕ ಪಾಲಕರು, ಗುರುಗಳು ಹಾಗೂ ಸಂಸ್ಧೆಗೆ ಕೀರ್ತಿ ತರಬೇಕೆಂದು ಹೇಳಿದರು.

ಸಂಸ್ಧೆಯ ಕಾರ್ಯದರ್ಶಿ ಸಿ.ಅಪೂರ್ವಚಂದ್ರ, ಪ್ರಾಂಶುಪಾಲರಾದ ಜಿ.ಎಸ್.ಶಂಕರೇಗೌಡ ಯು.ಎಸ್. ಶಿವಕುಮಾರ್, ಉಪ ಪ್ರಾಂಶುಪಾಲರಾದ ಜಿ.ಎಸ್.ನಂದಿನಿ, ರಾ.ಸೇ.ಯೋ ಅಧಿಕಾರಿ ಎಚ್.ಎಸ್. ಪಂಚಲಿಂಗೇಗೌಡ, ಕ್ರೀಡಾ ಕಾರ್ಯದರ್ಶಿ ಜಿ.ಸುರೇಂದ್ರ, ಅಧ್ಯಾಪಕ ಕಾರ್ಯದರ್ಶಿ ಎನ್. ರೇವಣ್ಣ, ಕನ್ನಡ ಸಂಘದ ಕಾರ್ಯದರ್ಶಿ ಎಸ್.ಪ್ರೇಮಕುಮಾರಿ, ಕೆ.ಎಸ್.ಸುನೀಲ್ ಕುಮಾರ್, ವಿ.ಹರ್ಷ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net