ಕುಲಸಚಿವ ಡಾ.ಸೀನಪ್ಪಗೆ ಬೀಳ್ಕೊಡುಗೆ

ಕುಲಸಚಿವ ಡಾ.ಸೀನಪ್ಪಗೆ ಬೀಳ್ಕೊಡುಗೆ
Published on

ಕುಶಾಲನಗರ: ಕೊಡಗು ವಿಶ್ವವಿದ್ಯಾಲಯವನ್ನು ಮಾದರಿ ವಿಶ್ವವಿದ್ಯಾಲಯವನ್ನಾಗಿ ಮಾಡುವ ನಿಟ್ಟಿನಲ್ಲಿ ಹಲವಾರು ಇತಿಮಿತಿಗಳ ನಡುವೆ ಹತ್ತು ಹಲವು ಯೋಜನೆಗಳನ್ನು ಹಾಕಿಕೊಂಡು ಪಾರದರ್ಶಕತೆ ಮತ್ತು ನಿಷ್ಠೆಯಿಂದ ಸಂಸ್ಥೆಯನ್ನು ಕಟ್ಟುವ ಬಹುದೊಡ್ಡ ಜವಾಬ್ದಾರಿ ನಿರ್ವಹಿಸಲಾಗುತ್ತಿದೆ ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ ಹೇಳಿದರು.

ಕೊಡಗು ವಿಶ್ವವಿದ್ಯಾಲಯದ ಕುಲಸಚಿವ ಡಾ.ಸೀನಪ್ಪ ಅವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಅಭಿನಂದನೆ ಮತ್ತು ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜ್ಞಾನ, ವ್ಯಕ್ತಿತ್ವ, ಕೌಶಲ ಮತ್ತು ವಿವೇಕ ಇವುಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡರೆ ಸಮಾಜದಲ್ಲಿ ವ್ಯಕ್ತಿ ಗೌರವಿಸಲ್ಪಡುತ್ತಾನೆ. ಅವಿರತ ಪರಿಶ್ರಮ, ನಿಷ್ಠೆ, ಪಾರದರ್ಶಕ ಆಡಳಿತವನ್ನು ಸಮರ್ಥವಾಗಿ ನಿರ್ವಹಿಸಿದರೆ ಸಂಸ್ಥೆಯ ಸರ್ವತೋಮುಖ ಪ್ರಗತಿ ಸಾಧ್ಯ. ಯಾವುದೇ ಒಬ್ಬ ವ್ಯಕ್ತಿ ತನಗೆ ಸಿಕ್ಕ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡಾಗ ಮಾತ್ರ ಯಶಸ್ಸು ಕಾಣಲು ಸಾಧ್ಯವಿದೆ. ಪ್ರತಿಯೊಬ್ಬ ವ್ಯಕ್ತಿಯಲ್ಲೂ ವಿಚಾರ ಮಾಡುವ ಮನೋಭಾವ ಮತ್ತು ಕಾರ್ಯ ತತ್ಪರತೆಯ ಗುಣವನ್ನು ಹೊಂದಿರುವುದು ಬಹು ಮುಖ್ಯವಾದದ್ದು. ಈ ನಿಟ್ಟಿನಲ್ಲಿ ಡಾ. ಸೀನಪ್ಪ ಅವರು ಒಂದೂವರೆ ವರ್ಷದ ಅವಧಿಯಲ್ಲಿ ಬಹಳಷ್ಟು ಉತ್ತಮ ಕೆಲಸಗಳನ್ನು ಸಮರ್ಥವಾಗಿ ನಿರ್ವಹಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಡಾ.ಸೀನಪ್ಪ, ಕೊಡಗು ವಿಶ್ವವಿದ್ಯಾಲಯದ ಕುಲಸಚಿವನಾಗಿ ಸಿಕ್ಕ ಅವಧಿಯಲ್ಲಿ ಹಲವಾರು ಉತ್ತಮ ಕೆಲಸಗಳನ್ನು ಮಾಡಿದ್ದೇನೆ. ಸ್ನಾತಕ ಪದವಿ ಪರೀಕ್ಷೆಗಳು ಮುಗಿದ ಕೇವಲ 24 ಗಂಟೆಯಲ್ಲಿ ಫಲಿತಾಂಶವನ್ನು ಪ್ರಕಟಿಸಿದ ಹೆಗ್ಗಳಿಕೆಗೆ ವಿಶ್ವವಿದ್ಯಾಲಯವು ಪಾತ್ರವಾಗಲು ಸಾಧ್ಯವಾಯಿತು. ಕೊಡಗು ವಿಶ್ವವಿದ್ಯಾಲಯದ ಬೋಧಕ ಮತ್ತು ಬೋಧಕೇತರ ವರ್ಗದವರ ಸಹಕಾರ ಮತ್ತು ಕೊಡಗು ವಿಶ್ವವಿದ್ಯಾಲಯದ ಅಧೀನಕ್ಕೆ ಒಳಪಡುವ ಸಂಯೋಜಿತ ಮತ್ತು ಘಟಕ ಕಾಲೇಜುಗಳ ಪ್ರಾಂಶುಪಾಲರು ಮತ್ತು ಬೋಧಕ ಸಿಬ್ಬಂದಿಗಳು ನೀಡಿದ ಪ್ರೋತ್ಸಾಹ ಮತ್ತು ಸಹಕಾರದಿಂದ ಉತ್ತಮ ಕೆಲಸವನ್ನು ಮಾಡುವುದಕ್ಕೆ ಸಾಧ್ಯವಾಗಿದೆ ಎಂದರು.

ನೂತನ ಕುಲಸಚಿವ ಪ್ರೊ. ಎಂ.ಸುರೇಶ್ ಮಾತನಾಡಿ, ಕೊಡಗು ವಿಶ್ವವಿದ್ಯಾಲಯದ ಶ್ರೇಯೋಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು. ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವ ಮತ್ತು ಕೌಶಲಾಧಾರಿತ ಶಿಕ್ಷಣವನ್ನು ದೊರಕಿಸಿ ಕೊಡುವ ನಿಟ್ಟಿನಲ್ಲಿ ಅವಿರತವಾಗಿ ಶ್ರಮಿಸಲಾಗುವುದು ಎಂದರು.

ಕೊಡಗು ವಿಶ್ವವಿದ್ಯಾಲಯದ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳ ಸಂಯೋಜಕ ಪ್ರೊ.ಎಂ.ಎನ್. ರವಿಶಂಕರ್, ಸೂಕ್ಷ್ಮಾಣು ಜೀವವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಗುಣಶ್ರೀ, ವಿವಿಧ ವಿಭಾಗದ ಉಪನ್ಯಾಸಕರು, ಬೋಧಕ ಸಿಬ್ಬಂದಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಉಪಸ್ಥಿತರಿದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net