

ಸೋಮವಾರಪೇಟೆ: ತಾಕೇರಿಯಲ್ಲಿ ಸೋಮವಾರ ಸಾಲಬಾಧೆಯಿಂದ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತಾಕೇರಿ ನಿವಾಸಿ ರೈತ ಚಂದ್ರಶೇಖರ್(52) ಆತ್ಮಹತ್ಯೆ ಮಾಡಿಕೊಂಡವರು. ಭಾನುವಾರ ಸಂಜೆ ಮನೆ ಸಮೀಪ ಕಳೆನಾಶಕ ಸೇವಿಸಿ ಅಸ್ವಸ್ಥಗೊಂಡಿದ್ದ ಅವರನ್ನು ಸ್ಥಳೀಯರು ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ, ಚಿಕಿತ್ಸೆ ಕೊಡಿಸಿದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಸೋಮವಾರ ಬೆಳಗ್ಗೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಚಂದ್ರಶೇಖರ್ ಅವರು ಐಗೂರು ವಿಎಸ್‌ಎಸ್‌ಎನ್ ಬ್ಯಾಂಕಿನಲ್ಲಿ ಸಾಲ ಮಾಡಿದ್ದು, ಬ್ಯಾಂಕ್ ಸಾಲವನ್ನು ಸಂಪೂರ್ಣವಾಗಿ ಮರುಪಾವತಿ ಮಾಡಲು ಸಾಧ್ಯವಾಗಿರಲಿಲ್ಲ. ಈ ಬಗ್ಗೆ ತನ್ನೊಂದಿಗೆ ಅಸಹಾಯಕತೆ ವ್ಯಕ್ತಪಡಿಸಿದ್ದರು. ಇದೇ ವಿಚಾರಕ್ಕೆ ಭಾನುವಾರ ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪತ್ನಿ ನಳಿನಿ ಸೋಮವಾರಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.