ಹಿರಿಯೂರನ್ನು ಬರಪೀಡಿತವೆಂದು ಘೋಷಿಸಿ

dj hyr raitha sangha
Published on

ಹಿರಿಯೂರು: ತಾಲೂಕನ್ನು ಬರ ಪೀಡಿತ ಪ್ರದೇಶ ಎಂದು ಘೋಷಣೆ ಮಾಡುವಂತೆ ಆಗ್ರಹಿಸಿ ರೈತ ಸಂಘ ಸೋಮವಾರ ಕಂದಾಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದರು.

ಮುಂಗಾರು ಹಂಗಾಮಿನಲ್ಲಿ ಮಳೆಯಾಶ್ರಿತ ಪ್ರದೇಶದಲ್ಲಿ ಬಿತ್ತನೆ ಮಾಡಿದ್ದ ಶೇಂಗಾ, ತೊಗರಿ, ಮೆಕ್ಕೆ ಜೋಳ, ಸಜ್ಜೆ, ಹುರುಳಿ, ಸೂರ್ಯಕಾಂತಿ ಇತರೆ ಬೆಳೆ ತೇವಾಂಶ ಕೊರತೆಯಿಂದ ಒಣಗುತ್ತಿದ್ದು, ಕೃಷಿ-ಕಂದಾಯ ಇಲಾಖೆ ಅಧಿಕಾರಿಗಳ ತಾಲೂಕಿನ ಬರ ಪರಿಸ್ಥಿತಿ, ರೈತರ ಸಂಕಷ್ಟದ ಕುರಿತು ಸರ್ಕಾರಕ್ಕೆ ವಾಸ್ತವ ವರದಿ ಸಲ್ಲಿಸಬೇಕು ಎಂದರು.

ಚಿತ್ರದುರ್ಗ ಜಿಲ್ಲೆಯ ಆರು ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಿ, ಬೆಳೆ ನಷ್ಟ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು. ಜಿಲ್ಲಾ ಉಸ್ತುವಾರಿ ಸಚಿವರು ರೈತರ ಜಮೀನಿಗೆ ಭೇಟಿ ನೀಡಿ, ವಾಸ್ತವ ಪರಿಸ್ಥಿತಿ ಪರಿಶೀಲಿಸಬೇಕು.

ಸರ್ಕಾರದ ಮಟ್ಟದಲ್ಲಿ ಹೋರಾಟ ನಡೆಸಿ ವಿಶೇಷ ಪ್ಯಾಕೇಜ್ ಘೋಷಿಸಿ, ಸಂಕಷ್ಟದಲ್ಲಿರುವ ಅನ್ನದಾತರ ನೆರವಿಗೆ ಧಾವಿಸಬೇಕು ಎಂದು ರೈತರು ಒತ್ತಾಯಿಸಿದರು.

ವಿದ್ಯುತ್ ಕಣ್ಣಾಮುಚ್ಚಾಲೆ: ತಾಲೂಕಿನ ಬಹುತೇಕ ರೈತರು ಕೊಳವಿ ಬಾವಿ ಅವಲಂಬಿಸಿ ಕೃಷಿ ಮಾಡುತ್ತಿದ್ದಾರೆ. ಕೃಷಿ ಪಂಪ್ ಸೆಟ್‌ಗಳಿಗೆ ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡಬೇಕು.

ರಾತ್ರಿ ಸಮಯದಲ್ಲಿ ಸಿಂಗಲ್ ಪೇಸ್ ವಿದ್ಯುತ್ ಕಡಿತ ಮಾಡಿರುವುದು ಜಮೀನಿನಲ್ಲಿ ಮನೆ ಕಟ್ಟಿಕೊಂಡು ವಾಸಿಸುತ್ತಿರುವ ರೈತರು, ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ.

ಅಕ್ರಮ ಸಕ್ರಮ ಯೋಜನೆಯಡಿ ವಿದ್ಯುತ್ ಸಂಪರ್ಕಕ್ಕೆ 3 ಸಾವಿರ ರೈತರು ಬೆಸ್ಕಾಂಗೆ ಹಣ ಪಾವತಿಸಿ, 3 ವರ್ಷ ಕಳೆದಿದೆ.

ಕೃಷಿ ಪಂಪ್‌ಸೆಟ್‌ಗಳ ಆರ್‌ಆರ್ ನಂಬರ್‌ಗೆ ಆಧಾರ್ ಜೋಡಣೆ ಕಾರ್ಯ ತಕ್ಷಣ ನಿಲ್ಲಿಸಬೇಕು ಎಂದು ಬೆಸ್ಕಾಂ ಅಧಿಕಾರಿಗಳಿಗೆ ಮನವಿ ಮಾಡಿದರು.

ಸರ್ಕಾರ ರೈತರ ಬೇಡಿಕೆಗೆ ಸ್ಪಂದಿಸದಿದ್ದರೆ, ಹಿರಿಯೂರು-ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟಿಸಲಾಗುವುದು ಎಂದು ರೈತರು ಎಚ್ಚರಿಸಿದರು.

ರೈತ ಸಂಘದ ತಾಲೂಕಾಧ್ಯಕ್ಷ ಕೆ.ಟಿ.ತಿಪ್ಪೇಸ್ವಾಮಿ, ಸಿದ್ದರಾಮಣ್ಣ, ರಂಗಸ್ವಾಮಿ, ನಾಗರಾಜ್, ಶಿವಣ್ಣ, ಈರಣ್ಣ, ವಿರೂಪಾಕ್ಷ, ಬಾಲಣ್ಣ, ಮಹಾಂತೇಶ್, ಜಗನ್ನಾಥ್, ದೇವೇಗೌಡ, ಸುರೇಶ್, ನಿಂಗಪ್ಪ, ಕೆಂಚಪ್ಪ, ರಾಜಣ್ಣ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net