

ಹನೂರು: ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಸಮರ್ಪಕವಾಗಿ ಪಡೆಯಲು ಹಾಗೂ ಸಮಸ್ಯೆ ಬಗೆಹರಿಸಿಕೊಳ್ಳಬೇಕಾದರೆ ಪ್ರತಿಯೊಬ್ಬರೂ ಸಂಘಟಿತರಾಗಬೇಕು ಎಂದು ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ತಿಳಿಸಿದರು.
ತಾಲೂಕಿನ ನಂಜೇಒಡೆಯರ ದೊಡ್ಡಿ ಗ್ರಾಮದಲ್ಲಿ ಸೋಮವಾರ ರೈತ ಸಂಘ ಹಾಗೂ ಹಸಿರು ಸೇನೆ ಗ್ರಾಮ ಘಟಕ ಉದ್ಘಾಟಿಸಿ ಮಾತನಾಡಿದರು.
ಹನೂರು ಭಾಗದಲ್ಲಿ ಹೆಚ್ಚಿನ ರೈತರು ಕೃಷಿ ಮಾಡುತ್ತಿದ್ದಾರೆ. ಸರ್ಕಾರದಿಂದ ಸಿಗುವ ಸವಲತ್ತುಗಳು ಸಮರ್ಪಕವಾಗಿ ಸಿಗುತ್ತಿಲ್ಲ. ರೈತರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇದರಿಂದ ಕೃಷಿಯಲ್ಲಿ ಹಿನ್ನಡೆ ಸಾಧಿಸುವಂತಾಗಿದೆ. ಇತ್ತ ಕಾಡು ಪ್ರಾಣಿಗಳು ಜಮೀನಿಗೆ ಲಗ್ಗೆ ಇಟ್ಟು ಫಸಲನ್ನು ನಾಶಪಡಿಸುತ್ತಿದ್ದು ನಷ್ಟ ಅನುಭವಿಸುವಂತಾಗಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಲ್ಲಿ ನಿರ್ಲಕ್ಷ್ಯ ವಹಿಸುತ್ತಿದ್ದಾರೆ.
ಆದರೂ ರೈತರು ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವ ಪ್ರಯತ್ನ ಮಾಡುತ್ತಿಲ್ಲ. ಆದ್ದರಿಂದ ಈ ಬಗ್ಗೆ ಪ್ರತಿಯೊಬ್ಬರೂ ಮನದಟ್ಟು ಮಾಡಿಕೊಂಡು ಒಗ್ಗಟ್ಟಿನಿಂದ ಸಂಘಟಿತರಾಗಬೇಕು. ಈ ದಿಸೆಯಲ್ಲಿ ಗ್ರಾಮ ಘಟಕಗಳನ್ನು ಉದ್ಘಾಟಿಸುತ್ತಿರುವುದು ಅನುಕೂಲವಾಗಲಿದೆ ಎಂದು ತಿಳಿಸಿದರು.
ಸಂಘದ ತಾಲೂಕು ಅಧ್ಯಕ್ಷ ಚಂಗಡಿ ಕರಿಯಪ್ಪ, ರೈತ ಮುಖಂಡರಾದ ಭೈರನತ್ತ ರಾಜು, ರಾಚಪ್ಪ, ನಂದೀಶ್, ನಂಜುಂಡ, ಮೈಕಲ್, ಮಾದಪ್ಪ, ಮಹದೇವಸ್ವಾಮಿ, ಶಿವಮಲ್ಲಪ್ಪ ಇನ್ನಿತರರು ಇದ್ದರು.