

ಗುಂಡ್ಲುಪೇಟೆ: ತಾಲೂಕಿನ ಆಸ್ಪತ್ರೆಗಳಲ್ಲಿ ಪಶು ವೈದ್ಯರ ಕೊರತೆಯಿದ್ದು, ಕೂಡಲೇ ಭರ್ತಿಗೆ ಸಂಬಂಧಪಟ್ಟವರು ಕ್ರಮ ಕೈಗೊಳ್ಳಬೇಕು, ವನ್ಯಜೀವಿಗಳ ಹಾವಳಿ ತಪ್ಪಿಸಲು ರೈಲ್ವೇ ಕಂಬಿಗಳನ್ನು ಅಳವಡಿಸಬೇಕು ಎಂದು ರೈತ ಸಂಘದ ಮುಖಂಡರು ಒತ್ತಾಯಿಸಿದರು.
ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಸೋಮವಾರ ತಹಸೀಲ್ದಾರ್ ಟಿ.ರಮೇಶ್ ಬಾಬು ಅಧ್ಯಕ್ಷತೆಯಲ್ಲಿ ನಡೆದ ರೈತರ ಕುಂದುಕೊರತೆ ಸಭೆಯಲ್ಲಿ ಮಾತನಾಡಿದರು. ತಾಲೂಕಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪಶು ಆಸ್ಪತ್ರೆಗಳು ಇದ್ದರೂ ಅವುಗಳಲ್ಲಿ ವೈದ್ಯರು ಮತ್ತು ಸಹಾಯಕರ ಹುದ್ದೆಗಳು ಖಾಲಿಯಾಗಿರುವುದರಿಂದ ರೈತರಿಗೆ ತೊಂದರೆಯಾಗಿದೆ. ಮುಂದಿನ ವಾರ ಮಲೆ ಮಹದೇಶ್ವರಬೆಟ್ಟದಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯೊಳಗೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು. ಇಲ್ಲದಿದ್ದರೆ ಸಚಿವ ಸಂಪುಟ ಸಭೆಯಂದು ಕಪ್ಪುಪಟ್ಟಿ ಪ್ರದರ್ಶಿಸಲಾಗುವುದು ಎಂದು ಎಚ್ಚರಿಸಿದರು.
ಪಶುಪಾಲನ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಮೋಹನ್ ಕುಮಾರ್ ಉತ್ತರಿಸಿ, ತಾಲೂಕಿನಲ್ಲಿರುವ ಪಶು ವೈದ್ಯ ಆಸ್ಪತ್ರೆಗಳಿಗೆ 98 ಹುದ್ದೆಗಳು ಮಂಜೂರಾಗಿದ್ದರೂ ಇವುಗಳ ಪೈಕಿ ಕೇವಲ 24 ಮಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದರಿಂದ ಕಾಲುಬಾಯಿ ಜ್ವರ ಲಸಿಕೆ ಮುಂತಾದ ಸಂದರ್ಭಗಳಲ್ಲಿ ಜಾನುವಾರುಗಳಿಗೆ ಸಮರ್ಪಕ ಚಿಕಿತ್ಸೆ ನೀಡುವುದು ಕಷ್ಟವಾಗುತ್ತಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ವರದಿ ನೀಡಲಾಗಿದ್ದು, ಖಾಲಿ ಹುದ್ದೆಗಳಿಗೆ ಸರ್ಕಾರ ನೇಮಕ ಮಾಡಬೇಕಾಗಿದೆ ಎಂದು ಮಾಹಿತಿ ನೀಡಿದರು.
ತಾಲೂಕಿನ ಕಾಡಂಚಿನ ಗ್ರಾಮಗಳಲ್ಲಿ ವನ್ಯಜೀವಿಗಳ ದಾಳಿಯಿಂದ ಸಾವಿಗೀಡಾದ ಚಾನುವಾರು ಹಾಗೂ ಬೆಳೆ ನಷ್ಟಕ್ಕೆ ಅರಣ್ಯ ಇಲಾಖೆ ನಿಗದಿತ ವೇಳೆಗೆ ಸಮರ್ಪಕವಾಗಿ ಪರಿಹಾರ ನೀಡುತ್ತಿಲ್ಲ. ಓಂಕಾರ ಅರಣ್ಯ ಪ್ರದೇಶದ ವಲಯ ಸುಮಾರು 24 ಕಿ.ಮೀ. ರೈಲ್ವೆ ಬ್ಯಾರಿಕೇಡ್, ಆನೆ ಕಂದಕ ಮತ್ತು ಸೋಲಾರ್ ಸರಿಪಡಿಸಿ ರೈತರು ಬೆಳೆದಿರುವ ಬೆಳೆಗಳಿಗೆ ರಕ್ಷಣೆ ನೀಡುವಂತೆ ಒತ್ತಾಯಿಸಿದರು. ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು ರೈತರ ಸಭೆಗೆ ಹಾಜರಾದರೆ ಮಾತ್ರ ಸಮಸ್ಯೆಗಳಿಗೆ ಪರಿಹಾರ ದೊರಕುತ್ತದೆ. ಆದರೆ ಸ್ಥಳೀಯ ಅಧಿಕಾರಿಗಳು ಕಾಟಾಚಾರಕ್ಕೆ ಸಭೆಗೆ ಅಪೂರ್ಣ ಮಾಹಿತಿಯೊಂದಿಗೆ ಬರುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅಬಕಾರಿ ಅಧಿಕಾರಿಗಳೂ ಸರಿಯಾಗಿ ಕರ್ತವ್ಯ ನಿರ್ವಹಿಸದಿರುವುದರಿಂದ ಗ್ರಾಮಾಂತರ ಪ್ರದೇಶಗಳ ಚಿಲ್ಲರೆ ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ ವ್ಯಾಪಕವಾಗಿ ನಡೆಯುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.
ತಹಸೀಲ್ದಾರ್ ಟಿ.ರಮೇಶ್ ಬಾಬು ಮಾತನಾಡಿ, ಜಿಲ್ಲಾ ಮಟ್ಟದ ಅಧಿಕಾರಿಗಳು ತಾಲೂಕು ಮಟ್ಟದಲ್ಲಿ ನಡೆಯುವ ಸಭೆಗೆ ಹಾಜರಾಗುವುದಿಲ್ಲ ಎಂದು ಹೇಳಿದ್ದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಮುಖಂಡರು, ಜಿಲ್ಲಾ ಮಟ್ಟದ ಅಧಿಕಾರಿಗಳು ತಾಲೂಕು ಸಭೆಗೆ ಬರಬಾರದು ಎಂಬ ನಿಯಮ ಇದ್ದರೆ ತೋರಿಸಿ ಎಂದು ತಿರುಗೇಟು ನೀಡಿದರು.
ಸಭೆಯಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿ ಷಣ್ಮುಗಂ, ತಾಲೂಕು ಆರೋಗ್ಯಾಧಿಕಾರಿ ಡಾ.ಅಲೀಂ ಪಾಷಾ, ಸಹಾಯಕ ಕೃಷಿ ನಿರ್ದೇಶಕ ಶಶಿಧರ್, ಸೆಸ್ಕ್ ಎಇಇ ಕೆ.ಎಂ.ಸಿದ್ದಲಿಂಗಪ್ಪ, ಅಬಕಾರಿ ಇನ್ಸ್‌ಪೆಕ್ಟರ್ ದೀಪು, ಸಮಾಜಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮೋಹನ್‌ಕುಮಾರ್, ಬಫರ್ ವಲಯದ ಪ್ರಭಾರ ವಲಯಾರಣ್ಯಾಧಿಕಾರಿ ಶಿವಕುಮಾರ್, ಎಒಇಎಂಸಿ ಕಾರ್ಯದರ್ಶಿ ಶ್ರೀಧರ್ ಸೇರಿದಂತೆ ಹಲವರು ಇದ್ದರು.