ಗೋಣಿಕೊಪ್ಪದಲ್ಲಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ

29 gkp 01
Published on

ಗೋಣಿಕೊಪ್ಪ: ವಿವಿಧ ಕನ್ನಡಪರ ಸಂಘಟನೆಗಳು ಶುಕ್ರವಾರ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಗೋಣಿಕೊಪ್ಪದಲ್ಲಿ ಕೊಡಗು ಜಿಲ್ಲಾ ರೈತ ಸಂಘದ ವತಿಯಿಂದ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಾಯಿತು.

ರೈತ ಸಂಘ ಕೊಡಗು ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಚೆಟ್ರುಮಾಡ ಸುಜಯ್ ಬೋಪಯ್ಯ ಮಾತನಾಡಿ, ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ಪ್ರಸ್ತುತ ಇರುವ ನೀರು ರಾಜ್ಯದ ಜನರಿಗೆ ಕುಡಿಯಲು ಮಾತ್ರ ಲಭ್ಯವಿದೆ. ಆದರೂ ತಮಿಳುನಾಡು ಸರ್ಕಾರ ನೀರು ಬಿಡುವಂತೆ ಕ್ಯಾತೆ ತೆಗೆಯುತ್ತಿರುವುದು ಸರಿಯಲ್ಲ. ನ್ಯಾಯಾಲಯ ಕೂಡ ಈ ಬಗ್ಗೆ ಪರಾಮರ್ಶಿಸಬೇಕು. ಸರ್ಕಾರ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬಾರದು ಎಂದು ಆಗ್ರಹಿಸಿದರು.

ರೈತ ಸಂಘದ ಜಿಲ್ಲಾ ಸಂಚಾಲಕ ಪುಚ್ಚಿಮಾಡ ಸುಭಾಶ್ ಸುಬ್ಬಯ್ಯ ಮಾತನಾಡಿ, ಕೊಡಗಿನ ಜನರು ಇಂತಹ ಹೋರಾಟಕ್ಕೆ ಸ್ವಯಂ ಪ್ರೇರಿತವಾಗಿ ಕೈ ಜೋಡಿಸಬೇಕು. ಈ ನಾಡಿನ ಜಲವನ್ನು ಉಳಿಸುವ ಕೆಲಸ ಎಲ್ಲರಿಂದಲೂ ಆಗಬೇಕಾಗಿದೆ ಎಂದರು.

ಪ್ರತಿಭಟನೆಯಲ್ಲಿ ಶ್ರೀಮಂಗಲ ಹೋಬಳಿ ಅಧ್ಯಕ್ಷ ಚಟ್ಟಂಗಡ ಕಂಬ ಕಾರ್ಯಪ್ಪ, ತಿತಿಮತಿ ಮುಖಂಡರಾದ ಚೆಪ್ಪುಡೀರ ಕಾರ್ಯಪ್ಪ, ಮಾಯಮುಡಿ ಸಂಚಾಲಕ ಪುಚ್ಚಿಮಾಡ ರಾಯ್ ಮಾದಪ್ಪ, ಜಿಲ್ಲಾ ಖಜಾಂಚಿ ಇಟ್ಟಿರ ಸಭಿತ ಭೀಮಯ್ಯ, ಪೊನ್ನಂಪೇಟೆ ಸಂಚಾಲಕ ಚೊಟ್ಟೆಕಾಳಪಂಡ ಮನು, ನಲ್ಲೂರಿನ ತೀತರಮಾಡ ರಾಜ, ಬಾಳೆಲೆಯ ತಾಣಚ್ಚಿರ ಲೆಹರ್ ಬಿದ್ದಪ್ಪ ಪಾಲ್ಗೊಂಡಿದ್ದರು. ಪ್ರತಿಭಟನೆ ಹಿನ್ನೆಲೆಯಲ್ಲಿ ಗೋಣಿಕೊಪ್ಪ ಠಾಣಾಧಿಕಾರಿ ರೂಪಾದೇವಿ ಬೀರಾದಾರ್ ಸೂಕ್ತ ಬಂದ್ ಬಸ್ತ್ ಕೈಗೊಂಡಿದ್ದರು. ಕೆಲ ಕಾಲ ವಾಹನ ಸಂಚಾರಕ್ಕೆ ಹಿನ್ನಡೆಯಾಗಿತ್ತು. ಬದಲಿ ಮಾರ್ಗವಾಗಿ ವಾಹನಗಳನ್ನು ಬಿಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net