

ಚಳ್ಳಕೆರೆ (ಚಿತ್ರದುರ್ಗ ಜಿಲ್ಲೆ ): ಬೆಳೆ ಪರಿಹಾರ ಸಮೀಕ್ಷೆ ಆಧಾರಿಸಿ ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತೆಗೆ ಪರಿಹಾರ ಹಣ ನೀಡಲಾಗುತ್ತಿದೆ ಎಂದು ತಹಸೀಲ್ದಾರ್ ಸುರೇಶ್‌ಕುಮಾರ್ ತಿಳಿಸಿದರು.
ತಾಲೂಕು ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಬೆಳೆ ಪರಿಹಾರ ಕುರಿತ ರೈತರ ಸಭೆಯಲ್ಲಿ ಮಾತನಾಡಿದರು.
ಕೃಷಿ, ತೋಟಗಾರಿಕೆ ಮತ್ತು ಕಂದಾಯ ಇಲಾಖೆ ಜಂಟಿಯಾಗಿ ಸಮೀಕ್ಷೆ ಮಾಡಿಕೊಂಡಿರುವ ಬೆಳೆ ನಷ್ಟದ ವರದಿಯನ್ನು ಸರ್ಕಾರಕ್ಕೆ ತಲುಪಿಸಲಾಗಿದೆ. ಕೆಲ ರೈತರ ಬ್ಯಾಂಕ್ ಖಾತೆ ಮತ್ತು ಆಧಾರ್ ಜೋಡಣೆ ಇಲ್ಲದ ಸಮಸ್ಯೆಯಿಂದ ವಿಳಂಬವಾಗುತ್ತಿದೆ. ಆತಂಕ ಬೇಡ. ಅರ್ಹರಿಗೆ ಪರಿಹಾರ ನೀಡಲಾಗುವುದು ಎಂದು ಹೇಳಿದರು.
ರಾಜ್ಯ ರೈತ ಸಂಘದ ಉಪಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ ಮಾತನಾಡಿ, ಅತಿವೃಷ್ಟಿಯಿಂದ ಶೇಂಗಾ, ತೊಗರಿ, ಕಡಲೆ ಬೆಳೆ ಸಂಪೂರ್ಣವಾಗಿ ನಷ್ಟವಾಗಿದೆ. ಪರಿಹಾರ ವಿತರಣೆಯಲ್ಲಿ ತಾರತಮ್ಯವಾಗಿದೆ. ಬೆಳೆ ನಷ್ಟವಾದ ರೈತರಿಗೆ ಪರಿಹಾರ ಸಿಗುತ್ತಿಲ್ಲ ಎಂದು ದೂರಿದರು.
ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಜಿ. ಅಶೋಕ್ ಮಾತನಾಡಿ, ಸಮೀಕ್ಷೆಯಂತೆ ತಾಲೂಕಿನ 43 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ. ಈಗಾಗಲೇ 51 ಸಾವಿರ ರೈತರಿಗೆ ಪರಿಹಾರ ನೀಡಲಾಗಿದೆ. ಉಳಿದಂತೆ 4 ಸಾವಿರ ರೈತರ ಮಾಹಿತಿಯನ್ನು ನಮೂದಿಸಿ ಪರಿಹಾರ ವಿತರಿಸಲಾಗುವುದು. ಒಂದು ಹೆಕ್ಟೇರ್‌ಗೆ 13,600 ರೂ ನಂತೆ ಬೆಳೆ ಪರಿಹಾರ ಸಿಗಲಿದೆ ಎಂದು ಹೇಳಿದರು.