

ಹಿರೇಕೆರೂರ: ರೈತರ ಸಾಲ ಮನ್ನಾ, ನದಿಗಳಿಂದ ಕೆರೆಗಳನ್ನು ತುಂಬಿಸುವ ಯೋಜನೆ ಚುರಕುಗೊಳಿಸುವುದು, ಬೆಳೆ ಹಾನಿಗೆ ಹೆಚ್ಚು ಪರಿಹಾರ ವಿತರಣೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ತಾಲೂಕು ರೈತ ಸಂಘದಿಂದ (ಕೆ.ಎಸ್. ಪುಟ್ಟಣ್ಣಯ್ಯ ಬಣ) ಪಟ್ಟಣದ ಪ್ರವಾಸಿ ಮಂದಿರದಿಂದ ತಹಸೀಲ್ದಾರ್ ಕಚೇರಿಯವರೆಗೆ ಸೋಮವಾರ ಪ್ರತಿಭಟನಾ ರ‍್ಯಾಲಿ ನಡೆಸಲಾಯಿತು.
ರೈತ ಸಂಘದ ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚಳ್ಳೇರ ಮಾತನಾಡಿ, ರಾಜ್ಯದಲ್ಲಿ ಸತತ ಸುರಿದ ಮಳೆಯಿಂದಾಗಿ ಬೆಳೆ ಹಾಳಾಗಿವೆ. ಸಾರ್ವಜನಿಕರ ಆಸ್ತಿ-ಪಾಸ್ತಿ ಹಾನಿಯಾಗಿ ನಲುಗುತ್ತಿರುವ ಇಂತಹ ಸಂದರ್ಭದಲ್ಲಿ ತಮ್ಮ ಸ್ವಾರ್ಥ ರಾಜಕಾರಣಕ್ಕಾಗಿ ಪಾದಯಾತ್ರೆ, ಹಗರಣಗಳಲ್ಲಿ ಕಾಲ ಕಳೆಯುತ್ತಿರುವ ಭ್ರಷ್ಟ ರಾಜಕಾರಣಿಗಳ ನಡೆ ಖಂಡನೀಯ ಎಂದರು.
ರೈತರು ಸತತ ಬರಗಾಲ, ಅತಿವೃಷ್ಟಿ, ಬಿತ್ತನೆ ಬೀಜ, ರಸಗೊಬ್ಬರ ಬೆಲೆ ಏರಿಕೆ, ಬೆಳೆದ ಬೆಳೆಗಳಿಗೆ ಮಾರುಕಟ್ಟೆಯಲ್ಲಿ ಸೂಕ್ತ ಬೆಂಬಲ ಬೆಲೆ ಸಿಗದೆ ಇರುವುದರಿಂದ ವ್ಯವಸಾಯದಿಂದ ದೂರ ಉಳಿಯುವ ಕಾಲ ಸನ್ನಿಹಿತವಾಗುತ್ತಿದೆ. ಇಂತಹ ಸಮಯದಲ್ಲಿ ಅವರ ನೆರವಿಗೆ ಧಾವಿಸುವುದನ್ನು ಬಿಟ್ಟು ಪರಸ್ಪರ ಭ್ರಷ್ಟಾಚಾರ ಆರೋಪ, ಪ್ರತ್ಯಾರೋಪ ಮಾಡುತ್ತ ಕಾಲಹರಣ ಮಾಡುತ್ತಿರುವ ರಾಜಕಾರಣಿಗಳಿಂದ ಜನತೆಗೆ ಭಾರಿ ಅನ್ಯಾಯವಾಗುತ್ತಿದೆ ಎಂದರು.
ತಹಸೀಲ್ದಾರ್ ಕಚೇರಿಯಲ್ಲಿ ಪರಿಹಾರಕ್ಕೆ ಅರ್ಜಿ ಹಾಕಲು ಹೋದರೆ ನಾವು ತೆಗೆದುಕೊಳ್ಳುವುದಿಲ್ಲ ಎನ್ನುತ್ತಿದ್ದಾರೆ. ಅತ್ತ ಕೃಷಿ ಇಲಾಖೆಯಲ್ಲಿ ಸರ್ಕಾರದಿಂದ ಇಲ್ಲಿಯವರೆಗೆ ಆದೇಶ ಬಂದಿಲ್ಲ ಎನ್ನುತ್ತಾರೆ. ಪರಿಸ್ಥಿತಿ ಹೀಗಾದರೆ ರೈತರ ಗತಿ ಏನು? ಹಾಗಾದರೆ ಬೆಳೆ ವಿಮೆ ಏಕೆ ತುಂಬಿಸಿಕೊಳ್ಳುತ್ತೀರಿ ಎಂದು ಪ್ರಶ್ನಿಸಿದರು.
ನಂತರ ತಹಸೀಲ್ದಾರ್ ಎಚ್. ಪ್ರಭಾಕರಗೌಡ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ, ಮಾಲತೇಶ ಪೂಜಾರ, ಎಚ್.ಎಚ್.ಮುಲ್ಲಾ, ಮಹ್ಮದಗೌಸ್ ಪಾಟೀಲ, ಪ್ರಭುಗೌಡ ಪ್ಯಾಟಿ, ಶಂಕ್ರಪ್ಪ ಶಿರಗಂಬಿ, ಗಂಗನಗೌಡ ಮುದಿಗೌಡ್ರ ಹಾಗೂ ರೈತರು ಇದ್ದರು.
ಕೇಂದ್ರ ಸರ್ಕಾರ ಕಿಸಾನ್ ಸಮ್ಮಾನ್ ಯೋಜನೆ, ಸಣ್ಣ ರೈತರಿಗೆ ಬೆಳೆ ನಷ್ಟ ಪರಿಹಾರದಲ್ಲಿ ಸಾಕಷ್ಟು ಅನ್ಯಾಯವಾಗಿದೆ. ಕೂಡಲೇ ಬಾಕಿ ಇರುವ ರೈತರಿಗೆ ಪರಿಹಾರ ಹಣ ಜಮಾ ಮಾಡಬೇಕು. ರಾಜ್ಯ ಸರ್ಕಾರ ಹೆಸ್ಕಾಂಗೆ ರೈತರ ಕೊಳವೆ ಬಾವಿಗಳ ಆಧಾರ್ ಲಿಂಕ್ ಮಾಡಿಸುವುದನ್ನು ಬಿಡಬೇಕು. ಅಡಕೆ, ಶುಂಠಿ ಬೆಳೆ ವಿಮಾ ಕಂತು ಪಾವತಿ ಅವಧಿ ವಿಸ್ತರಿಸಬೇಕು ಎಂದು ರಾಮಣ್ಣ ಕೆಂಚಳ್ಳೇರ ಆಗ್ರಹಿಸಿದರು.