ನಾಲೆಗಳಿಗೆ ನೀರು ಹರಿಸಲು ರೈತರ ಆಗ್ರಹ

oppo_2
ಉಡುತೊರೆ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸುವಂತೆ ರೈತ ಸಂಘದ ಪದಾಧಿಕಾರಿ ಶಾಸಕ ಎಂ.ಆರ್ ಮಂಜುನಾಥ್ ಅವರಿಗೆ ಮನವಿ ಸಲ್ಲಿಸಿದರು. ಲಕ್ಷ್ಮೀ, ಅಮ್ಜಾದ್ ಖಾನ್, ರಾಜಣ್ಣ, ಈರೇಗೌಡ ಇತರರು ಇದ್ದರು.
Published on

ಹನೂರು : ಕೆ.ಗುಂಡಾಪುರ ಸಮೀಪದ ಉಡುತೊರೆ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸುವುದರ ಮೂಲಕ ರೈತರಿಗೆ ಅನುಕೂಲ ಕಲ್ಪಿಸುವಂತೆ ಬುಧವಾರ ತಾಲೂಕು ರೈತ ಸಂಘದ ಪದಾಧಿಕಾರಿಗಳು ಶಾಸಕ ಎಂ.ಆರ್.ಮಂಜುನಾಥ್ ಅವರಿಗೆ ಮನವಿ ಸಲ್ಲಿಸಿದರು.
ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದಲ್ಲಿ ಗುರುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಾಸಕರನ್ನು ಭೇಟಿಯಾದ ಸಂಘದ ಅಧ್ಯಕ್ಷ ಅಮ್ಜಾದ್ ಖಾನ್ ಮಾತನಾಡಿ, ಉಡುತೊರೆ ಜಲಾಶಯದ ಅಚ್ಚುಕಟ್ಟು ಪ್ರದೇಶದಲ್ಲಿ ನೂರಾರು ರೈತರು ಕೃಷಿ ಮಾಡುತ್ತಿದ್ದಾರೆ. ಆದರೆ ಸಮರ್ಪಕ ನೀರಾವರಿ ಸೌಕರ್ಯವಾಗುತ್ತಿಲ್ಲ. ಇದರಿಂದ ರೈತರು ತುಂಬ ತೊಂದರೆ ಅನುಭವಿಸುವಂತಾಗಿದೆ. ಹಾಗಾಗಿ, ಇದೀಗ ಈ ಭಾಗದಲ್ಲಿ ಉತ್ತಮ ಮಳೆಯಾಗಿರುವುದರಿಂದ ಜಲಾಶಯ ಭರ್ತಿಯಾಗಿದೆ. ಆದ್ದರಿಂದ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸಿದರೆ ರೈತರಿಗೆ ಅನುಕೂಲವಾಗಿದೆ. ಹಾಗೆಯೇ ರಾಮಾಪುರ, ಪಂಚಾಪುರ, ಪಳನಿಮೇಡು, ಪುದು ರಾಮಾಪುರ, ಕೆಂಪಯ್ಯನಹಟ್ಟಿ ಹಾಗೂ ಮಾಮರ ದೊಡ್ಡಿ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಆದ್ದರಿಂದ ಕೀರೆಪಾತಿ ಜಲಾಶಯದಿಂದ ಬಲದಂಡೆ ನಾಲೆಗೆ ನೀರು ಹರಿಸಿದರೆ ರೈತರಿಗೆ ಅನುಕೂಲವಾಗುವುದರ ಜತೆಗೆ ಅಂತರ್ಜಲ ಮಟ್ಟದ ಸುಧಾರಣೆಗೊಂಡು ನೀರಿನ ಸಮಸ್ಯೆ ನೀಗಲಿದೆ. ಆದ್ದರಿಂದ ಈ ಬಗ್ಗೆ ಗಮನಹರಿಸುವಂತೆ ಮನವಿ ಮಾಡಿದರು.
ಅಗತ್ಯ ಮುತುವರ್ಜಿ: ಇದಕ್ಕೆ ಶಾಸಕರು ಪ್ರತಿಕ್ರಿಯಿಸಿ, ಕಳೆದ ಹಲವು ವರ್ಷಗಳಿಂದ ಉಡುತೊರೆ ಜಲಾಶಯದ ನಾಲೆಗಳಲ್ಲಿ ಹೂಳು ತುಂಬಿದ್ದು, ಗಿಡಗಂಟಿಗಳು ಬೆಳೆದು ನಿಂತಿದ್ದ ಕಾರಣ ನಾಲೆಗಳಿಗೆ ನೀರು ಹರಿಸಲು ಸಾಧ್ಯವಾಗಿರಲಿಲ್ಲ. ಇದರಿಂದ ರೈತರು ತೊಂದರೆ ಅನುಭವಿಸುತ್ತಿದ್ದರು. ಈ ಬಗ್ಗೆ ಮನಗಂಡು ಖುದ್ಧಾಗಿ ನಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಹೂಳು ಹಾಗೂ ಗಿಡಗಂಟಿಗಳನ್ನು ತೆರವುಗೊಳಿಸುವುದರ ಮೂಲಕ ನಾಲೆಗಳಿಗೆ ನೀರು ಹರಿಸಿ ರೈತರಿಗೆ ಅನುಕೂಲ ಕಲ್ಪಿಸುವಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಆದ್ದರಿಂದ ಈ ಕೆಲಸ ಮುಂದಿನ ದಿನಗಳಲ್ಲಿ ಕಾರ್ಯಗತಗೊಳ್ಳಲಿದೆ. ಈ ಬಗ್ಗೆ ಅಗತ್ಯ ಮುತುವರ್ಜಿ ವಹಿಸಲಾಗಿದೆ ಎಂದು ತಿಳಿಸಿದರು.

ಜಿಪಂ ಉಪ ಕಾರ್ಯದರ್ಶಿ ಲಕ್ಷ್ಮೀ, ಸಂಘದ ಗೌರವಾಧ್ಯಕ್ಷ ರಾಜಣ್ಣ, ಮುಖಂಡರಾದ ಈರೇಗೌಡ, ಅಜ್ಗಾರ್ ಇನ್ನಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net