ಸಮಸ್ಯೆ ನಿವಾರಣೆಗೆ ರೈತರು ಸಂಘಟಿತರಾಗಿ

ಸಮಸ್ಯೆ ನಿವಾರಣೆಗೆ ರೈತರು ಸಂಘಟಿತರಾಗಿ
Published on

ಹನೂರು: ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಸಮರ್ಪಕವಾಗಿ ಪಡೆಯಲು ಹಾಗೂ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕಾದರೆ ಪ್ರತಿಯೊಬ್ಬರೂ ಸಂಘಟಿತರಾಗಬೇಕು ಎಂದು ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ತಿಳಿಸಿದರು.

ತಾಲೂಕಿನ ಮಹಾಲಿಂಗನಕಟ್ಟೆ ಗ್ರಾಮದಲ್ಲಿ ಶನಿವಾರ ರೈತ ಸಂಘ ಹಾಗೂ ಹಸಿರು ಸೇನೆಯ ಗ್ರಾಮ ಘಟಕವನ್ನು ಉದ್ಘಾಟಿಸಿ ಮಾತನಾಡಿದರು.

ಹನೂರು ಭಾಗದಲ್ಲಿ ಹೆಚ್ಚಿನ ರೈತರು ಕೃಷಿ ಮಾಡುತ್ತಿದ್ದಾರೆ. ಆದರೆ, ಸರ್ಕಾರದಿಂದ ಸಿಗುವ ಸವಲತ್ತುಗಳು ಸಮರ್ಪಕವಾಗಿ ಸಿಗುತ್ತಿಲ್ಲ. ಜತೆಗೆ ರೈತರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇದರಿಂದ ಕೃಷಿಯಲ್ಲಿ ಹಿನ್ನಡೆಯಾಗಿದೆ. ಇತ್ತ ಕಾಡು ಪ್ರಾಣಿಗಳು ಜಮೀನಿಗೆ ಲಗ್ಗೆ ಇಟ್ಟು ಫಸಲನ್ನು ನಾಶಪಡಿಸುತ್ತಿದ್ದು, ನಷ್ಟವನ್ನು ಅನುಭವಿಸುವಂತಾಗಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮಕೈಗೊಳ್ಳುವಲ್ಲಿ ನಿರ್ಲಕ್ಷೃವಹಿಸುತ್ತಿದ್ದಾರೆ. ರೈತರು ಸಂಘಟನೆಯ ಕೊರತೆಯಿಂದ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಈ ಬಗ್ಗೆ ಪ್ರತಿಯೊಬ್ಬರೂ ಮನದಟ್ಟು ಮಾಡಿಕೊಂಡು ಸಂಘಟಿತರಾಗಬೇಕು. ಜತೆಗೆ ಪ್ರಶ್ನಿಸುವ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು. ಈ ದಿಸೆಯಲ್ಲಿ ಗ್ರಾಮ ಘಟಕಗಳನ್ನು ಉದ್ಘಾಟಿಸಿರುವುದು ಅನುಕೂಲವಾಗಲಿದೆ ಎಂದು ಹೇಳಿದರು.

ಸಂತೆ ಆರಂಭಕ್ಕೆ ನಿರ್ಧಾರ: ಇದೇ ವೇಳೆ ರೈತರು ಮಾತನಾಡಿ, ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಬೆಂಬಲ ಬೆಲೆ ಸಿಗುತ್ತಿಲ್ಲ. ಬೇರೆ ಕಡೆಗಳಲ್ಲಿ ಸಂತೆ ಇದ್ದು, ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಲಾಗುತ್ತಿದೆ. ಇದರಿಂದ ರೈತರಿಗೆ ಅನುಕೂಲವಾಗುತ್ತಿದೆ. ಆದರೆ, ಹನೂರಿನಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಇದ್ದರೂ ಸಂತೆ ಆರಂಭಿಸಿಲ್ಲ. ಆದ್ದರಿಂದ ಇಲ್ಲಿ ವಾರದಲ್ಲಿ ಒಂದು ದಿನ ಸಂತೆ ಆರಂಭಿಸಿದರೆ ಅನುಕೂಲವಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಈ ಸಂಬಂಧ ಅಧಿಕಾರಿಗಳ ಜತೆ ಚರ್ಚಿಸಿ ಸಂತೆ ಆರಂಭಕ್ಕೆ ಮುತುರ್ವಜಿ ವಹಿಸಲಾಗುವುದು ಎಂದು ಹೊನ್ನೂರು ಪ್ರಕಾಶ್ ತಿಳಿಸಿದರು.

ರೈತ ಮುಖಂಡ ಜಡೇಸ್ವಾಮಿ, ರುದ್ರಸ್ವಾಮಿ, ದೀಪಕ್, ರಾಜು, ರವಿ, ಬಸವಣ್ಣ, ವಿಶ್ವೇಶ್ವರಪ್ರಸಾದ್, ಶ್ರೀನಿವಾಸ್, ಮಹದೇವಸ್ವಾಮಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net