ಹಾಲಿನ ಪ್ರೋತ್ಸಾಹ ಬಿಡುಗಡೆಗೆ ಆಗ್ರಹ: ಮಂಡ್ಯದಲ್ಲಿ ರೈತ ಸಂಘದಿಂದ ಪ್ರತಿಭಟನೆ

Raytha Protest Mandya
oppo_0
Published on

ಮಂಡ್ಯ: ಹಾಲು ಉತ್ಪಾದಕರಿಗೆ ನೀಡಬೇಕಿರುವ ಪ್ರೋತ್ಸಾಹ ಧನವನ್ನು ಕೂಡಲೇ ಬಿಡುಗಡೆಗೆ ಆಗ್ರಹಿಸಿ ರೈತ ಸಂಘದ ಜಿಲ್ಲಾ ಘಟಕದಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಾಯಿತು.

ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿವೆ. ಪರಿಣಾಮ ರೈತರು ತೊಂದರೆಗೆ ಒಳಗಾಗಿದ್ದಾರೆಂದು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ನಿಟ್ಟಿನಲ್ಲಿ ಎರಡು ಸರ್ಕಾರವೂ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕ್ರಮ ವಹಿಸಬೇಕೆಂದು ಆಗ್ರಹಿಸಿದರು.

ಕೇಂದ್ರ ಸರ್ಕಾರ ಕಬ್ಬಿಗೆ ಎಫ್‌ಆರ್‌ಪಿ ದರವನ್ನು ಶೇ.8.5 ಇಳುವರಿಗೆ ನಿಗದಿಪಡಿಸಿ ಟನ್‌ಗೆ 4,500 ರೂ ಘೋಷಣೆ ಮಾಡಬೇಕು. ಅದರಂತೆ ರಾಜ್ಯಸರ್ಕಾರ ಈಗಾಗಲೇ ಘೋಷಣೆ ಮಾಡಿರುವಂತೆ ಬಾಕಿ 150 ರೂಗಳನ್ನು ಪಾವತಿಸಲು ಕ್ರಮ ಕೈಗೊಳ್ಳಬೇಕು. ಕೃಷ್ಣರಾಜಸಾಗರ ಜಲಾಶಯ ಹಾಗೂ ಹೇಮಾವತಿ ಜಲಾಶಯದಿಂದ ಜನ, ಜಾನುವಾರು ಜತೆಗೆ ಹಾಲಿ ಬೆಳೆದಿರುವ ಬೆಳೆಗಳ ರಕ್ಷಣೆಗೆ ತತಕ್ಷಣ ನೀರು ಬಿಡುಗಡೆ ಮಾಡಬೇಕು. 2020ರ ಅಣೆಕಟ್ಟೆ ಸುರಕ್ಷತಾ ಕಾಯ್ದೆಯನ್ನು ಕೂಡಲೇ ಜಾರಿಗೊಳಿಸಬೇಕು. ಗಣಿಗಾರಿಕೆಯಿಂದ ಅಣೆಕಟ್ಟೆಗೆ ಅಪಾಯವಿದೆ ಎಂದು ರಾಷ್ಟ್ರೀಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಈಗಾಗಲೇ ವರದಿ ನೀಡಿದೆ. ಈ ಹಿನ್ನೆಲೆಯಲ್ಲಿ ಕೆಆರ್‌ಎಸ್ ಸುತ್ತ ಪರೀಕ್ಷಾರ್ಥ ಸ್ಫೋಟ ಮಾಡದಂತೆ ಸರ್ಕಾರ ಸುಗ್ರೀವಾಜ್ಞೆ ತರಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ, ಪ್ರಸನ್ನ ಅರಕೆರೆ, ಲಿಂಗಪ್ಪಾಜಿ, ರವಿಕುಮಾರ್, ಮರಿಚನ್ನೇಗೌಡ, ಚಂದ್ರಶೇಖರ್, ಲತಾ ಶಂಕರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net