

ತಿ.ನರಸೀಪುರ: ಕೆಆರ್‌ಎಸ್ ಅಣೆಕಟ್ಟೆಯಿಂದ ತಮಿಳುನಾಡಿಗೆ ನೀರು ಬಿಟ್ಟಿರುವುದನ್ನು ಖಂಡಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಪಟ್ಟಣದ ಕಾವೇರಿ ನೀರಾವರಿ ನಿಗಮದ ಕಚೇರಿ ಮುಂಭಾಗ ಸೋಮವಾರ ರೈತರು ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ನೇತೃತ್ವ ವಹಿಸಿದ್ದ ಕಬು ಬೆಳೆಗಾರರ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್ ಮಾತನಾಡಿ, ರಾಜ್ಯದಲ್ಲಿ ಬರದಿಂದ ಜನ-ಜಾನುವಾರುಗಳಿಗೆ ನೀರಿಲ್ಲದೆ ಸಂಕಷ್ಟದಲ್ಲಿರುವ ಈ ಸಂದರ್ಭದಲ್ಲಿ ನದಿಯ ಮೂಲಕ ತಮಿಳುನಾಡಿಗೆ ನೀರು ಬಿಟ್ಟಿರುವುದು ಸರಿಯಲ್ಲ. ಅಲ್ಲದೆ ಕಬಿನಿ ಕಾವೇರಿ ಜಲಾಶಯದಿಂದ ತಮಿಳುನಾಡಿಗೆ ನೀರು ಬಿಟ್ಟಿರುವುದು ತಕ್ಷಣವೇ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
ರಾಜ್ಯ ಜನತೆಗೆ ದ್ರೋಹ ಮಾಡಿ ಸರ್ಕಾರ ಪಕ್ಕದ ರಾಜ್ಯದ ತಮಿಳುನಾಡಿಗೆ ನೀರು ಬಿಟ್ಟಿರುವುದು ಎಷ್ಟರಮಟ್ಟಿಗೆ ಸರಿ? ಈಗಾಗಲೇ ರೈತರು ಜಮೀನಿನಲ್ಲಿ ಬೆಳೆದು ನಿಂತಿರುವ ಬೆಳೆಗಳಿಗೆ ನೀರಿಲ್ಲದೆ ಒಣಗುತ್ತಿರುವ ಈ ಸಂದರ್ಭದಲ್ಲಿ, ನದಿಯ ಮೂಲಕ ತಮಿಳುನಾಡಿಗೆ ನೀರು ಬಿಟ್ಟು ರಾಜ್ಯದ ರೈತರಿಗೆ ಮರಣ ಶಾಸನ ಬರೆಯುತ್ತಿದೆ. ಕೂಡಲೇ ನೀರು ನಿಲ್ಲಿಸದಿದ್ದರೆ ರಸ್ತೆಗಿಳಿದು ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಕೆಲ ಕಾಲ ರೈತರು ಸರ್ಕಾರ ಹಾಗೂ ಜನಪ್ರತಿನಿಧಿಗಳ ವಿರುದ್ಧ ಧಿಕ್ಕಾರ ಕೂಗಿದರು.
ಸ್ಥಳಕ್ಕೆ ಆಗಮಿಸಿದ ಕಾವೇರಿ ನೀರಾವರಿ ನಿಗಮದ ಇಇ ಸುಬ್ರಹ್ಮಣ್ಯ ಮಾತನಾಡಿ, ಈ ಬಗ್ಗೆ ಸಂಬಂಧಪಟ್ಟ ನಮ್ಮ ಮೇಲಧಿಕಾರಿಗಳ ಗಮನಕ್ಕೆ ತಂದು ಕ್ರಮ ವಹಿಸಲಾಗುವುದು ಎಂದು ಪ್ರತಿಭಟನಾನಿರತ ರೈತರ ಮನವೊಲಿಸಿದರು. ನಂತರ ಪ್ರತಿಭಟನೆ ಹಿಂಪಡೆಯಲಾಯಿತು. ಸಂಘದ ತಾಲೂಕು ಅಧ್ಯಕ್ಷ ಕುರುಬೂರು ಸಿದ್ದೇಶ್, ತಾಲೂಕು ಪ್ರಧಾನ ಕಾರ್ಯದರ್ಶಿ ಕಿರಗಸೂರು ಪ್ರಸಾದ್, ನಾಯಕ ಟೌನ್ ಅಧ್ಯಕ್ಷ ಅಪ್ಪಣ್ಣ, ಸಂಘಟನಾ ಕಾರ್ಯದರ್ಶಿ ಕುರುಬೂರು ಪ್ರದೀಪ್, ಗೌರಿಶಂಕರ್, ಬನ್ನೂರು ಸೂರಿ, ಕರುವಟ್ಟಿ ಉಮೇಶ್, ಕುಮಾರ್ , ಲಿಂಗರಾಜ್, ನಾಗರಾಜು, ಹಂಬಲೆ ಮಂಜುನಾಥ್, ದೇವನೂರು ವಿಜಯೇಂದ್ರ ಇತರರು ಇದ್ದರು.