ರಾಜ್ಯ ಸರ್ಕಾರದ ವಿರುದ್ಧ ರೈತಸಂಘ ಪ್ರತಿಭಟನೆ

HUN-MAR-1-1(FARMERS STRIKE)
ಹುಣಸೂರು ನಗರದಲ್ಲಿ ರೈತಸಂಘದ ಸದಸ್ಯರು ರಾಗಿ ಬೆಂಬಲ ಬೆಳೆ ಖರೀದಿ ಕೇಂದ್ರ ಸ್ಥಾಪನೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಹೊಸೂರು ಕುಮಾರ್, ಬೆಂಕಿಪುರ ಚಿಕ್ಕಣ್ಣ, ಮಹದೇವನಾಯಕ, ಎಂ.ಜಿ.ಮಲ್ಲೇಶ್ ಇತರರಿದ್ದಾರೆ.
Published on

ಹುಣಸೂರು: ರಾಗಿ ಬೆಂಬಲ ಬೆಲೆ ಖರೀದಿ ಕೇಂದ್ರ ಸ್ಥಾಪಿಸುವಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ರೈತಸಂಘದ ಸದಸ್ಯರು ಪ್ರತಿಭಟನೆ ನಡೆಸಿದರು.

ನಗರದ ತಾಲೂಕು ಕಚೇರಿ ಮುಂಭಾಗ ಶನಿವಾರ ಪ್ರತಿಭಟನೆ ನಡೆಸಿದ ರೈತ ಮುಖಂಡರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ರೈತಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್ ಮಾತನಾಡಿ, ಹುಣಸೂರು ಉಪವಿಭಾಗ ವ್ಯಾಪ್ತಿಯಲ್ಲಿ ಪ್ರಮುಖ ಬೆಳೆ ತಂಬಾಕಿನ ನಂತರ ಅತಿ ಹೆಚ್ಚಿನ ಪ್ರಮಾಣದಲ್ಲಿ ಬೆಳೆಯುವ ಬೆಳೆಯೆಂದರೆ ಅದು ರಾಗಿಯಾಗಿದ್ದು, ಸರ್ಕಾರ ರಾಗಿಗೆ ಬೆಂಬಲ ಬೆಲ ಘೋಷಿಸಿರುವ ಹಿನ್ನೆಲೆಯಲ್ಲಿ ರೈತರು ಹೆಚ್ಚು ಆಸಕ್ತಿಯಿಂದ ರಾಗಿ ಕೃಷಿಯಲ್ಲಿ ತೊಡಗಿಸಿಕೊಳ್ಳುತ್ತಾರೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಬೆಂಬಲ ಬೆಲೆ ಖರೀದಿ ಕೇಂದ್ರಗಳ ಸ್ಥಾಪನೆಯಲ್ಲೇ ಸರ್ಕಾರಗಳು ನಿರ್ಲಕ್ಷ್ಯ ತೋರುತ್ತಿರುವುದು ಖಂಡನೀಯ. ಜಿಲ್ಲಾಡಳಿತಕ್ಕೆ ಈ ಕುರಿತು ಈಗಾಗಲೇ ಹಲವು ಬಾರಿ ಎಚ್ಚರಿಕೆ ನೀಡಿದ್ದರೂ ಪ್ರಯೋಜನಕ್ಕೆ ಬಂದಿಲ್ಲ. ರೈತರು ರಾಗಿ ಬೆಳೆದು ದಲ್ಲಾಳಿಗಳ ಹೊಟ್ಟೆ ತುಂಬಿಸುವಂತಾಗಿದೆ. ದಲ್ಲಾಳಿಗಳು ಪರಿಸ್ಥಿತಿಯ ಪ್ರಯೋಜನ ಪಡೆದುಕೊಂಡು ಕನಿಷ್ಠ ದರಕ್ಕೆ ಖರೀದಿಸುವ ಮೂಲಕ ರೈತರಿಗೆ ಅನ್ಯಾಯವೆಸಗುತ್ತಿದ್ದಾರೆ. ರೈತ ಬೆಳೆದ ಬೆಳೆಗೆ ವೈಜ್ಞಾನಿಕ ಬೆಲೆ ನಿಗದಿಪಡಿಸುವ ಜವಾಬ್ದಾರಿಯನ್ನು ಹೊತ್ತುಕೊಳ್ಳದ ಸರ್ಕಾರಗಳು ಬೆಂಬಲ ಬೆಲೆ ಎನ್ನುವ ಕನಸನ್ನು ರೈತರಲ್ಲಿ ಬಿತ್ತಿ ಅದರಲ್ಲೂ ಮೋಸ ಮಾಡುತ್ತಿರುವುದು ಖಂಡನೀಯ. ಈಗಲಾದರೂ ಜಿಲ್ಲಾಡಳಿತ ಎಚ್ಚೆತ್ತುಕೊಂಡು ಕೂಡಲೇ ಖರೀದಿ ಕೇಂದ್ರಗಳನ್ನು ಸ್ಥಾಪಿಸಿ ರಾಗಿ ಖರೀದಿಸುವ ಮೂಲಕ ರೈತರನ್ನು ರಕ್ಷಿಸಬೇಕೆಂದು ಒತ್ತಾಯಿಸಿದರು.

ರಸ್ತೆ ತಡೆ: ಬೆಳಗ್ಗಿನಿಂದ ಪ್ರತಿಭಟನೆ ನಡೆಸುತ್ತಿದ್ದರೂ ಉಪವಿಭಾಗಾಧಿಕಾರಿ ಸೇರಿದಂತೆ ಯಾವೊಬ್ಬ ಅಧಿಕಾರಿಯೂ ಸ್ಥಳಕ್ಕೆ ಬಂದು ನಮ್ಮ ಅಹವಾಲು ಸ್ವೀಕರಿಸುತ್ತಿಲ್ಲವೆಂದು ಆರೋಪಿಸಿ ರೈತಮುಖಂಡರು ಮಧ್ಯಾಹ್ನದ ವೇಳೆಗೆ ಹೆದ್ದಾರಿ ತಡೆ ನಡೆಸಿದರು. ವಿಷಯ ತಿಳಿದ ಪೊಲೀಸರು ಸ್ಥಳಕ್ಕಾಗಮಿಸಿ ರೈತರ ಮನವೊಲಿಕೆಗೆ ಮುಂದಾದರೂ ಪ್ರಯೋಜನವಾಗಲಿಲ್ಲ. ಪೊಲೀಸರು ರೈತಮುಖಂಡರನ್ನು ವಾಹನದಲ್ಲಿ ಠಾಣೆಗೆ ಕರೆದೊಯ್ದರು. ಈ ವೇಳೆಗೆ ಸ್ಥಳಕ್ಕಾಗಮಿಸಿದ ಉಪವಿಭಾಗಾಧಿಕಾರಿ ಎಚ್.ಬಿ.ವಿಜಯ್‌ಕುಮಾರ್, ತುರ್ತು ಕಾರ್ಯವಿದ್ದುದರಿಂದ ಬರಲು ವಿಳಂಬವಾಯಿತು. ಖರೀದಿ ಕೇಂದ್ರ ಸ್ಥಾಪನೆಗೆ ಕ್ರಮವಹಿಸಲಾಗಿದ್ದು, ಇಂದಿನಿಂದಲೇ (ಶನಿವಾರ) ಕಾರ್ಯಾರಂಭ ಮಾಡಲಿದೆ ಎಂದು ಭರವಸೆ ನೀಡಿದರು. ನಂತರ ರೈತಮುಖಂಡರನ್ನು ಬಿಡುಗಡೆಗೊಳಿಸಲಾಯಿತು.

ಪ್ರತಿಭಟನೆಯಲ್ಲಿ ತಾಲೂಕು ಅಧ್ಯಕ್ಷ ಬೆಂಕಿಪುರ ಚಿಕ್ಕಣ್ಣ, ಪ್ರಧಾನ ಕಾರ್ಯದರ್ಶಿ ಅಗ್ರಹಾರ ರಾಮೇಗೌಡ, ಎಚ್.ಡಿ.ಕೋಟೆ ತಾಲೂಕು ಅಧ್ಯಕ್ಷ ಮಹದೇವ ನಾಯಕ, ಕೆ.ಆರ್.ನಗರ ತಾಲೂಕು ಅಧ್ಯಕ್ಷ ಎಂ.ಜಿ.ಮಲ್ಲೇಶ್, ಮಹಿಳಾ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ನೇತ್ರಾವತಿ, ಜಿಲ್ಲಾ ಉಪಾಧ್ಯಕ್ಷ ಅಲಿಜಾನ್, ಖಜಾಂಚಿ ಈಶ್ವರ್, ತಾಲೂಕು ಯುವಘಟಕದ ಪ್ರಧಾನ ಕಾರ್ಯದರ್ಶಿ ರವಿ ನಾರಾಯಣ್, ಗ್ರಾಮ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ರೈತರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net