

ಮಂಡ್ಯ: ದಲ್ಲೆವಾಲ್ 48 ದಿನದ ಉಪವಾಸ ಸತ್ಯಾಗ್ರಹದ ಬಗ್ಗೆ ಕೇಂದ್ರ ಸರ್ಕಾರ ನಿರ್ಲಕ್ಷೃ ತೋರಿದೆ ಎಂದು ಆರೋಪಿಸಿ ರೈತ ಸಂಘ(ಮೂಲ ಸಂಘಟನೆ) ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು. ದೆಹಲಿ ಗಡಿ ಕನೂರಿನಲ್ಲಿ ಪಂಜಾಬ್‌ನ ಸಂಯುಕ್ತ ಕಿಸಾನ್ ಹೋರಾಟ ಸಂಘಟನೆಯ ರಾಷ್ಟ್ರೀಯ ಸಂಚಾಲಕ ಜಗಜಿತ್‌ಸಿಂಗ್ ದಲ್ಲೆವಾಲ್ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಆದರೆ ಇವರ ಬಗ್ಗೆ ಕೇಂದ್ರ ಸರ್ಕಾರ ನಿರ್ಲಕ್ಷೃತನ ತೋರುತ್ತಿದೆ. ಆದ್ದರಿಂದ ರಾಜ್ಯಾದ್ಯಂತ ರೈತ ಸಂಘಟನೆಗಳು ಜಿಲ್ಲೆ ಮತ್ತು ತಾಲೂಕು ಕೇಂದ್ರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೃಷಿ ಸಚಿವರ ಪ್ರತಿಕೃತಿ ದಹಿಸಿ ಚಳವಳಿ ನಡೆಸಲಾಗುವುದು. ಜ.14ರಿಂದ 16ರವರೆಗೆ ಪ್ರತಿ ಹಳ್ಳಿಯಲ್ಲಿಯೂ ಪಂಜಿನ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಕೇಂದ್ರ ಸರ್ಕಾರ ಕೂಡಲೇ ಮಾತುಕತೆ ನಡೆಸಿ ಜಗಜಿತ್‌ಸಿಂಗ್ ದಲ್ಲೆವಾಲ್ ಅವರ ಪ್ರಾಣ ಉಳಿಸಬೇಕು. ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ಗ್ಯಾರಂಟಿ ಕಾನೂನು ಜಾರಿಗೆ ತರಬೇಕು. ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ಎಂ.ಎಸ್.ಸ್ವಾಮಿನಾಥನ್ ವರದಿ ಜಾರಿಯಾಗಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಪಚ್ಚೆ ನಂಜುಂಡಸ್ವಾಮಿ, ಇಂಡುವಾಳು ಚಂದ್ರಶೇಖರ್, ಮಂಜೇಶ್‌ಗೌಡ, ಸೊ.ಶಿ.ಪ್ರಕಾಶ್, ಕೀಳಘಟ್ಟ ನಂಜುಂಡಯ್ಯ, ವೆಂಕಟೇಶ್, ಶಿವಲಿಂಗಯ್ಯ, ಶಂಭೂನಹಳ್ಳಿ ಸುರೇಶ್ ಇತರರಿದ್ದರು.