

ಮೈಸೂರು: ದೇಶದಲ್ಲಿ ಬಿಜೆಪಿಗೆ ಒಳ್ಳೆಯ ವಾತಾವರಣವಿದ್ದು, ನನ್ನ ಕ್ಷೇತ್ರದಲ್ಲಿಯೂ ಗೆಲ್ಲುವ ವಿಶ್ವಾಸವಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿಶ್ವಾಸ ವ್ಯಕ್ತಪಡಿಸಿದರು.
ಸೋಮವಾರ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಏ.3ರಂದು ನಾಮಪತ್ರ ಸಲ್ಲಿಸಲಿದ್ದು, ಅದಕ್ಕೂ ಮುನ್ನ ತಾಯಿಯ ಆಶೀರ್ವಾದ ಪಡೆದಿದ್ದೇನೆ. ನಾಮಪತ್ರ ಸಲ್ಲಿಕೆ ವೇಳೆ ಪಾಲ್ಗೊಳ್ಳುವಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಆಹ್ವಾನಿಸಿದ್ದೇನೆ ಎಂದರು.
ಇದೇ ವೇಳೆ ಸಚಿವ ಶಾಮನೂರು ಶಿವಶಂಕರಪ್ಪ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಇದು ಕಾಂಗ್ರೆಸ್‌ನ ಮನಸ್ಥಿತಿಯಾಗಿದ್ದು, ಮಹಿಳೆಯರ ಮೇಲೆ ಅವರಿಗಿರುವ ಗೌರವ ಏನು ಎಂಬುದಕ್ಕೆ ಈ ಹೇಳಿಕೆಯೇ ಸಾಕ್ಷಿಯಾಗಿದೆ. ಮಹಿಳೆಗೆ ಗೌರವ ನೀಡುವ ಸಂಸ್ಕೃತಿಯೇ ಅವರಿಗಿಲ್ಲ ಎಂದು ಟೀಕಿಸಿದರು.
ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸಿರುವ ಶೋಭಾ ಕರಂದ್ಲಾಜೆ ಸೋಮವಾರ ನಗರದ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಾಡದೇವತೆ ತಾಯಿ ಚಾಮುಂಡೇಶ್ವರಿ ದೇವಿಯ ಮುಂದೆ ಬಿ ಫಾರಂ ಇಟ್ಟು, ಸೀರೆ ನೀಡಿ ಪ್ರಾರ್ಥಿಸಿದರು.