ಪ್ರವಾಸೋದ್ಯಮ ಕ್ಷೇತ್ರದಲ್ಲಿ 500 ಕೋಟಿ ರೂ. ಹೂಡಿಕೆ ಪ್ರಸ್ತಾವನೆ

udp-29-pravasa
Published on

ಉಡುಪಿ: ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕೆ ಮಹಾಸಂಸ್ಥೆ (ಎಫ್​ಕೆಸಿಸಿಐ) ಆಶ್ರಯದಲ್ಲಿ ರಾಜ್ಯ ಪ್ರವಾಸೋದ್ಯಮ ಇಲಾಖೆ ಸಹಯೋಗದೊಂದಿಗೆ ಜೂ. 15 ಮತ್ತು 16ರಂದು ಬೆಂಗಳೂರಿನಲ್ಲಿ ದಕ್ಷಿಣ ಭಾರತ ಉತ್ಸವ ಆಯೋಜಿಸಲಾಗುತ್ತಿದ್ದು, ಪ್ರವಾಸೋದ್ಯಮ ಕ್ಷೇತ್ರದಲ್ಲಿ 500 ಕೋಟಿ ರೂ. ಹೂಡಿಕೆ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಎಫ್​ಕೆಸಿಸಿಐ ಹಿರಿಯ ಉಪಾಧ್ಯಕ್ಷ ಎಂ.ಜಿ. ಬಾಲಕೃಷ್ಣ ತಿಳಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಾವಳಿ ಪ್ರವಾಸೋದ್ಯಮ, ದೇವಳ ಪ್ರವಾಸೋದ್ಯಮ, ಆರೋಗ್ಯ ಪ್ರವಾಸೋದ್ಯಮ ಇತ್ಯಾದಿ ವಿಭಾಗಗಳ ಅಭಿವೃದ್ಧಿಗೆ ಕಾರ್ಯಯೋಜನೆ ರೂಪಿಸಲಾಗುವುದು. ಈಗಾಗಲೇ ಕಾರವಾರದಲ್ಲಿ ಪ್ರವಾಸೋದ್ಯಮ ಕ್ಷೇತ್ರದಲ್ಲಿ 30 ಕೋಟಿ ರೂ. ಹೂಡಿಕೆಯಾಗಿದೆ ಎಂದು ತಿಳಿಸಿದರು.

ಕ್ರಿಯಾತ್ಮಕ ಪ್ರವಾಸೋದ್ಯಮ ಉದ್ಯಮದಲ್ಲಿ ಪಾಲುದಾರರನ್ನು ತೊಡಗಿಸಿಕೊಳ್ಳುವುದು, ಸರ್ಕಾರದೊಂದಿಗೆ ಸಂವಹನ, ವಿಚಾರಸಂಕಿರಣ ಇತ್ಯಾದಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದರು. ಉಡುಪಿ ಜಿಲ್ಲಾ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಒಕ್ಕೂಟ ಅಧ್ಯಕ್ಷ ಮನೋಹರ ಶೆಟ್ಟಿ ಮಾತನಾಡಿ, ಅವಿಭಜಿತ ದ.ಕ. ಜಿಲ್ಲೆಯಲ್ಲಿ ಪ್ರವಾಸೋದ್ಯಮ ವೃದ್ಧಿಗೆ ವಿಫುಲ ಅವಕಾಶಗಳಿದ್ದರೂ ಅನೇಕ ಕಾನೂನು ತೊಡಕುಗಳಿಂದ ಹೂಡಿಕೆದಾರರು ಬರುತ್ತಿಲ್ಲ. ಮೂಲಭೂತ ಸೌಕರ್ಯ ಕಲ್ಪಿಸುವಲ್ಲಿ ಸರ್ಕಾರ ಹೆಚ್ಚಿನ ಗಮನಹರಿಸಬೇಕು ಎಂದರು. ಎಫ್​ಕೆಸಿಸಿಐ ನಿರ್ದೇಶಕ ಅಂಡಾರು ದೇವಿಪ್ರಸಾದ ಶೆಟ್ಟಿ ಮತ್ತು ಪಿ. ಸಿ. ರಾವ್​, ಉದ್ಯಮಿ ನಾಗರಾಜ ಹೆಬ್ಬಾರ್​ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net