

ಮಂಡ್ಯ: ಭ್ರೂಣಹತ್ಯೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಮೂರು ಪ್ರಕರಣಗಳನ್ನು ದಾಖಲಿಸಲಾಗಿದ್ದು, ತನಿಖೆ ಮುಂದುವರಿಯುತ್ತಿದೆ. ಈಗಾಗಲೇ ಆರೋಗ್ಯ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದೇನೆ. ಯಾರೇ ತಪ್ಪು ಮಾಡಿದ್ದರೂ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುತ್ತದೆ. ಇದರಲ್ಲಿ ಯಾವುದೇ ಅನುಮಾನವೂ ಇಲ್ಲ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭ್ರೂಣಹತ್ಯೆ ತಡೆಗಟ್ಟುವ ನಿಟ್ಟಿನಲ್ಲಿ ತಾಲೂಕು ಮಟ್ಟದಲ್ಲಿ ಆರೋಗ್ಯಾಧಿಕಾರಿ, ತಹಸೀಲ್ದಾರ್, ಸಿಡಿಪಿಒ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳ ತಂಡ ರಚಿಸಲಾಗಿದೆ. ಈ ತಂಡ ಎಲ್ಲೆಲ್ಲಿ ಅನಧಿಕೃತ ಪ್ರಕರಣಗಳು ನಡೆಯುತ್ತವೆ ಎಂಬುದನ್ನು ಪತ್ತೆಹಚ್ಚುವ ಕೆಲಸ ಮಾಡುತ್ತದೆ. ಈ ನಿಟ್ಟಿನಲ್ಲಿ ಗ್ರಾಮಲೆಕ್ಕಾಧಿಕಾರಿ, ಪಿಡಿಒ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಹಾಗೂ ಶಿಕ್ಷಕರು ಜಾಗೃತರಾಗಿರುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಅನಧಿಕೃತ ಸ್ಕ್ಯಾನಿಂಗ್ ಸೆಂಟರ್‌ಗಳ ಮೇಲೆ ದಾಳಿ ನಡೆಸಿ ಅವುಗಳ ವಿರುದ್ಧ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಜಿಲ್ಲೆಯಲ್ಲಿ ಸುಮಾರು 55 ಅಧಿಕೃತ ಸ್ಕ್ಯಾನಿಂಗ್ ಸೆಂಟರ್‌ಗಳಿವೆ. ಮೂರು ತಿಂಗಳಿಗೊಮ್ಮೆ ಆರೋಗ್ಯ ಇಲಾಖೆ ಅಧಿಕಾರಿಗಳ ನೇತೃತ್ವದ ಜಾಗೃತ ತಂಡ ಭೇಟಿ ನೀಡಿ ಪರಿಶೀಲಿಸುವಂತೆ ತಿಳಿಸಲಾಗಿದೆ. ಹುಳ್ಳೇನಹಳ್ಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ವರದಿ ನೀಡಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ತಾಲೂಕು ಮಟ್ಟದ ತಂಡ ಕೇವಲ ಭ್ರೂಣಹತ್ಯೆ ತಡೆಗೆ ಸೀಮಿತವಾಗದೆ, ಜಿಲ್ಲೆಯಲ್ಲಿ ನಡೆಯುತ್ತಿರುವ ಬಾಲ್ಯವಿವಾಹ ಪ್ರಕರಣಗಳ ಬಗ್ಗೆಯೂ ಜಾಗೃತಿ ವಹಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಆರೋಗ್ಯ, ಪೊಲೀಸ್ ಇಲಾಖೆ ಸೇರಿ ಕೆಲಸ ಮಾಡುತ್ತವೆ. ಭ್ರೂಣಹತ್ಯೆ ಅಮಾನವೀಯ ಕೃತ್ಯ. ಇದನ್ನು ಒಟ್ಟಾಗಿ ತಡೆಗಟ್ಟುವ ಕೆಲಸ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.