ಭ್ರೂಣಹತ್ಯೆ ಕೊಲೆ ಮಾಡಿದ್ದಕ್ಕೆ ಸಮನಾದ ಅಪರಾಧ

mysore
Published on

ಮೈಸೂರು: ಭ್ರೂಣ ಹತ್ಯೆ ಮಾಡುವುದು ಕೊಲೆ ಮಾಡಿದ್ದಕ್ಕೆ ಸಮನಾದ ಅಪರಾಧವಾಗಿದ್ದು, ಭ್ರೂಣ ಹತ್ಯೆ ತಡೆಗಟ್ಟುವ ನಿಟ್ಟಿನಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಅವಶ್ಯವಾಗಿದೆ ಎಂದು ಬೆಂಗಳೂರಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಉಪನಿರ್ದೇಶಕ ಡಾ.ವಿವೇಕ್ ದೊರೈ ಹೇಳಿದರು.


ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ ಸಹಯೋಗದಲ್ಲಿ ನಗರದ ಖಾಸಗಿ ಹೋಟೆಲ್‌ನಲ್ಲಿ ಶನಿವಾರ ಆಯೋಜಿಸಿದ್ದ ಗರ್ಭಧಾರಣಾ ಪೂರ್ವ ಮತ್ತು ಪ್ರಸವ ಪೂರ್ವ ಪತ್ತೆ ತಂತ್ರವಿಧಾನಗಳ(ಲಿಂಗ ಆಯ್ಕೆಯ ನಿಷೇಧ) ಕುರಿತು ಮೈಸೂರು ವಿಭಾಗೀಯ ಮಟ್ಟದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.


ದೇಶದಲ್ಲಿ ಮೊದಲ ಬಾರಿಗೆ ಮಹಾರಾಷ್ಟ್ರದಲ್ಲಿ 1988ರಲ್ಲಿ ಪಿಎನ್‌ಡಿಟಿ ಕಾಯ್ದೆ ಜಾರಿಗೆ ಬಂದಿತು. ನಂತರ 1994ರಲ್ಲಿ ಕೇಂದ್ರ ಸರ್ಕಾರ ದೇಶಾದ್ಯಂತ ಈ ಕಾಯ್ದೆಯನ್ನು ಅನುಷ್ಠಾನಕ್ಕೆ ತರಲಾಗಿದೆ. ಆದರೆ, ಈ ಕಾಯ್ದೆ ಪರಿಣಾಮಕಾರಿಯಾಗಿ ಜಾರಿ ಆಗಿರಲಿಲ್ಲ. ಇದರ ಬಗ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾದ ಬಳಿಕ 2001ರಲ್ಲಿ ಸುಪ್ರೀಂಕೋರ್ಟ್ ಈ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನ ಮಾಡುವಂತೆ ಆದೇಶ ನೀಡಿದ್ದು, ನಂತರದಲ್ಲಿ ಕಾಯ್ದೆಯ ಅನುಷ್ಠಾನಕ್ಕೆ ಕ್ರಮವಹಿಸಲಾಯಿತು ಎಂದರು.


ಕಾಯ್ದೆ ಜಾರಿಯಾದರೂ ದೇಶದಲ್ಲಿ ಇಂದಿಗೂ ಹೆಣ್ಣುಭ್ರೂಣ ಹತ್ಯೆ ಪ್ರಮಾಣ ಕಡಿಮೆಯಾಗಿಲ್ಲ. ಅಂಕಿ ಅಂಶಗಳ ಪ್ರಕಾರ 2001ರಿಂದ 4.6 ಲಕ್ಷ ಹೆಣ್ಣು ಭ್ರೂಣಹತ್ಯೆ ಮಾಡಲಾಗುತ್ತಿದ್ದು, ಇದು ದೇಶದ ಜನಸಂಖ್ಯೆಯ ಶೇ 5ಕ್ಕಿಂತಲೂ ಹೆಚ್ಚಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.


ಇದೇ ರೀತಿಯಾಗಿ ಹೆಣ್ಣುಭ್ರೂಣ ಹತ್ಯೆಗಳು ನಡೆಯುತ್ತಾ ಹೋದರೆ ಮುಂದಿನ ದಿನಗಳಲ್ಲಿ ಗಂಡು ಮಕ್ಕಳ ಸಂತತಿಯೇ ಹೆಚ್ಚಾಗಿ, ಹೆಣ್ಣು ಮಕ್ಕಳೇ ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಲಿಂಗಾನುಪಾತ ಹಾಗೂ ಅದರಿಂದ ಉಂಟಾಗುವ ಸಮಸ್ಯೆಗಳ ಕುರಿತು ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಿದರು.


ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಪಿ.ಸಿ.ಕುಮಾರಸ್ವಾಮಿ, ಮೈಸೂರು, ಹಾಸನ, ಕೊಡಗು, ಮಂಡ್ಯ, ಚಾಮರಾಜನಗರ, ಚಿಕ್ಕಮಗಳೂರು, ಉಡುಪಿ, ಮಂಗಳೂರು ಜಿಲ್ಲೆಯ ಕುಟುಂಬ ಕಲ್ಯಾಣಾಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು ಸೇರಿದಂತೆ ಇನ್ನಿತರ ಅಧಿಕಾರಿಗಳು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net