

ವಿರಾಜಪೇಟೆ: ವಿರಾಜಪೇಟೆ ಪಟ್ಟಣದ ದೇವಾಂಗ ಬೀದಿಯಲ್ಲಿ ಗೋದಳಿ ಜನಾಂಗದವರಿಂದ 5ನೇ ವರ್ಷದ ಚಾಮುಂಡಿ ಉತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ಸೋಮವಾರ ಬೆಳಗ್ಗೆ ಚಾಮುಂಡಿ ದೇವಿಯ ವಿಗ್ರಹ ಪ್ರತಿಷ್ಠಾಪನೆ ಹಾಗೂ ಮಹಾಪೂಜೆ ನಡೆಯಿತು. ನಂತರ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ಮಾಡಲಾಯಿತು. ರಾತ್ರಿ ಮಹಾ ಪೂಜೆ ಹಾಗೂ ಅನ್ನ ಸಂತರ್ಪಣೆ ನಡೆಸಲಾಯಿತು. ಬುಧವಾರ ಬೆಳಗ್ಗೆ ಮಹಾ ಪೂಜೆಯ ಬಳಿಕ ಚಾಮುಂಡಿ ದೇವಿಯ ವಿಗ್ರಹವನ್ನು ನಗರದ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಇತಿಹಾಸ ಪ್ರಸಿದ್ಧ ಗೌರಿ ಕೆರೆಯಲ್ಲಿ ವಿಸರ್ಜನೆ ಮಾಡಲಾಯಿತು. ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಚಾಮುಂಡಿ ಉತ್ಸವ ಸಮಿತಿ ಅಧ್ಯಕ್ಷ ರಾಮಚಂದ್ರ, ಪ್ರಧಾನ ಆರ್ಚಕ ಗಣೇಶ್, ಸದಸ್ಯ ಕುಮಾರ, ರಜಿನಿ,ನಾಗೇಶ್, ಜೀವನ್ ಸೇರಿದಂತೆ ಇತರರು ಇದ್ದರು.