ಬಾಲ್ಯವಿವಾಹ ನಡೆದರೆ ದೂರು ದಾಖಲಿಸಿ

web 1
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಜಿಲ್ಲೆಯಲ್ಲಿ ಬಾಲ್ಯ ವಿವಾಹ ನಡೆದರೆ ಎಫ್‌ಐಆರ್ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿವಿಧ ಯೋಜನೆಗಳ ಜಿಲ್ಲಾ ಮಟ್ಟದ ತ್ರೈ ಮಾಸಿಕ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೌಟುಂಬಿಕ ದೌರ್ಜನ್ಯ ತಡೆ ಕಾಯಿದೆ ಅಡಿ ನ್ಯಾಯಾಲಯಕ್ಕೆ ಹೋಗುವ ಪ್ರಕರಣಗಳನ್ನು ಶೀಘ್ರ ಇತ್ಯರ್ಥಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಸ್ವಾಧಾರ ಗೃಹ ಯೋಜನೆ, ಉಜ್ವಲ್ ಹಾಗೂ ರಾಜ್ಯ ಮಹಿಳಾ ನಿಲಯ ಯೋಜನೆಗಳ ಕುರಿತು ಮಾಹಿತಿ ಪಡೆದು ಅಧಿಕಾರಿಗಳೊಂದಿಗೆ ಚರ್ಚಿಸಿದ ಜಿಲ್ಲಾಧಿಕಾರಿ, ಕಲಘಟಗಿಯಲ್ಲಿನ ಬಾಲಕಿಯರ ವಸತಿ ನಿಲಯದಲ್ಲಿ ತೀರ ಕಡಿಮೆ ವಿದ್ಯಾರ್ಥಿಗಳಿರುವ ಕಾರಣ ಸ್ಥಗಿತಗೊಳಿಸಿ ವಿದ್ಯಾರ್ಥಿಗಳನ್ನು ಸರ್ಕಾರಿ ವಸತಿ ನಿಲಯಕ್ಕೆ ವರ್ಗಾಯಿಸಬೇಕು. ಜಿಲ್ಲೆಯಲ್ಲಿ ಬಾಲ್ಯ ವಿವಾಹಗಳು ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು. ಬಾಲ್ಯ ವಿವಾಹ ನಡೆದ ಬಾಲಕಿ ಮನೆಗೆ ವಾರದಲ್ಲಿ ಒಮ್ಮೆಯಾದರೂ ಭೇಟಿ ನೀಡಿ ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಡಾ. ಎಚ್.ಎಚ್. ಕುಕನೂರ ಮಾತನಾಡಿ, ಜಿಲ್ಲೆಯಲ್ಲಿ ನಡೆದ ಬಾಲ್ಯ ವಿವಾಹ ಕುರಿತು ಸಂಪೂರ್ಣ ವಿವರವನ್ನು ಸುರಕ್ಷಿಣಿ ವೆಬ್‌ಪೋರ್ಟ್‌ಲ್‌ನಲ್ಲಿ ಅಳವಡಿಸಿಲಾಗುತ್ತಿದೆ. ಸಖಿ ಒನ್ ಸ್ಟಾಪ್ ಕೇಂದ್ರದಲ್ಲಿ ಜನೆವರಿಯಿಂದ ಈವರೆಗೆ ಲೈಂಗಿಕ ಕಿರುಕುಳ, ಅತ್ಯಾಚಾರ, ಕೌಟುಂಬಿಕ ಕಲಹ ಸೇರಿ ಒಟ್ಟು 64 ಪ್ರಕರಣಗಳು ದಾಖಲಾಗಿವೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಬಸವಲಿಂಗ ಮೂಗನೂರಮಠ, ಪೊಲೀಸ್ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net