

ಹುಬ್ಬಳ್ಳಿ: ಕರಸೇವಕ ಶ್ರೀಕಾಂತ ಪೂಜಾರ ಬಂಧನ ವಿರೋಧಿಸಿ ಜ. 3ರಂದು ಇಲ್ಲಿಯ ಶಹರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ, ಉಪ ನಾಯಕ ಅರವಿಂದ ಬೆಲ್ಲದ, ಶಾಸಕರಾದ ಪ್ರದೀಪ ಶೆಟ್ಟರ, ಮಹೇಶ ಟೆಂಗಿನಕಾಯಿ, ಎಂ.ಆರ್. ಪಾಟೀಲ, ಮಾಜಿ ಶಾಸಕ ಅಶೋಕ ಕಾಟವೆ ಸೇರಿದಂತೆ ಬಿಜೆಪಿಯ 43 ಜನರ ವಿರುದ್ಧ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬಿಜೆಪಿ ಕಾರ್ಯಕರ್ತರು ಠಾಣೆ ಎದುರು ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಠಾಣೆಗೆ ಮುತ್ತಿಗೆ ಹಾಕಲು ಪ್ರಯತ್ನಿಸಿ, ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ. ಸಾರ್ವಜನಿಕರಿಗೆ ಹಾಗೂ ವ್ಯಾಪಾರಸ್ಥರಿಗೆ ಅಡ್ಡಿಪಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಾಚ್ಯವಾಗಿ ನಿಂದಿಸಿ, ಜಾತಿ ನಿಂದನೆ ಮಾಡಿ ಘೋಷಣೆ ಕೂಗಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಅಪಮಾನ ಮಾಡಿ ನಾಗರಿಕ ವಿರೋಧಿ ಚಟುವಟಿಕೆ ನಡೆಸಿದ್ದಾರೆ. ಇವರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಹು-ಧಾ ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ ಹಳ್ಳೂರ ಸೇರಿ ಹಲವು ಕಾಂಗ್ರೆಸ್ ನಾಯಕರು ದೂರು ದಾಖಲಿಸಿದ್ದಾರೆ. ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.