

ನರಗುಂದ: ಗ್ರಾಮೀಣ ಪ್ರದೇಶದ ಕೂಲಿಕಾರರು ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ವೈಯಕ್ತಿಕ ಕಾಮಗಾರಿಗಳಿಗೆ ಆರ್ಥಿಕ ನೆರವು ಪಡೆದು ಜೀವನ ರೂಪಿಸಿಕೊಳ್ಳಬೇಕು ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಕೆ. ಇನಾಮದಾರ ಹೇಳಿದರು.
ತಾಲೂಕಿನ ಕೊಣ್ಣೂರ ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ನರೇಗಾ ಯೋಜನೆಯ ವೈಯಕ್ತಿಕ ಕಾಮಗಾರಿಗಳ ವಿತರಣಾ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಉದ್ಯೋಗ ಖಾತ್ರಿ ಯೋಜನೆಯಲ್ಲಿ ವರ್ಷಕ್ಕೆ 100 ದಿನಗಳವರೆಗೆ ಕೂಲಿಕಾರರಿಗೆ ಕೆಲಸ ನೀಡುತ್ತೇವೆ. ಉದ್ಯೋಗ ಚೀಟಿ ಪಡೆದ ಕುಟುಂಬ ವರ್ಗ ವರ್ಷಕ್ಕೆ 100 ದಿನ ಕೆಲಸ ಮಾಡಿದರೆ ವಾರ್ಷಿಕವಾಗಿ ಯೋಜನೆಯಡಿ 34,800 ರೂ,. ಪಡೆಯುತ್ತಾರೆ. ಯೋಜನೆಯಡಿ ಅರ್ಹ ಫಲಾನುಭವಿಗಳು ದನದ ಕೊಟ್ಟಿಗೆ, ಬಚ್ಚಲು ಗುಂಡಿ, ಕೋಳಿ ಶೆಡ್, ಕೃಷಿ ಹೊಂಡ ಕಾಮಗಾರಿ ಮಾಡಿಕೊಳ್ಳಲು ಸಾಧ್ಯವಿದೆ. ತೋಟಗಾರಿಕೆ ಇಲಾಖೆಯಡಿ ಬೆಳೆಗಳಾದ ತೆಂಗು, ಮಾವು, ದಾಳಿಂಬೆ, ಸೀಬೆ, ಗುಲಾಬಿ, ಮಲ್ಲಿಗೆ, ಬಾಳೆ ಮತ್ತು ಪಪ್ಪಾಯಿ ಸೇರಿ ವಿವಿಧ ಬೆಳೆಗಳನ್ನು ಆರ್ಥಿಕ ನೆರವು ಪಡೆದು ಬೆಳೆದುಕೊಳ್ಳಬಹುದು ಎಂದರು.
ಗಂಡು ಮತ್ತು ಹೆಣ್ಣು ಕೂಲಿಕಾರರಿಗೆ ಸಮಾನವಾಗಿ 349 ರೂ. ದಿನವೊಂದಕ್ಕೆ ಯೋಜನೆಯಡಿ ಕೂಲಿ ಮೊತ್ತ ನೀಡಲಾಗುತ್ತದೆ. ಕೂಲಿಕಾರರ ಕೇಂದ್ರಬಿಂದುವಾಗಿರುವ ನರೇಗಾ ಯೋಜನೆಯು ಗ್ರಾಮೀಣ ಕೂಲಿಕಾರರಿಗೆ ಕೈತುಂಬ ಉದ್ಯೋಗ ನೀಡುವ ಕಾರ್ಯವನ್ನು ಮಾಡುತ್ತಿದೆ ಎಂದರು.
ವೈಯಕ್ತಿಕ ಕಾಮಗಾರಿಗಳ ವಿತರಣಾ ಮೇಳಕ್ಕೆ ಕೊಣ್ಣೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸಿದ್ದವ್ವ ಕಳಸಣ್ಣವರ, ಉಪಾಧ್ಯಕ್ಷ ಶಂಕರಗೌಡ ಪಾಟೀಲ ಅವರು ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಮಮತಾಜ್ ಬೇಗಂ ಕುರ್ಲಗೇರಿ, ಹುಸೇನಬಿ ಬುರಡಿ, ಜ್ಯೋತಿ ವಾಸನ, ಹನಮಂತಪ್ಪ ಚಿನ್ನಾರ, ಕೆ.ಟಿ. ಚವ್ಹಾಣ, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಹಾಗೂ ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯರು, ಗ್ರಾಮ ಪಂಚಾಯಿತಿ ಸಿಬ್ಬಂದಿ ಇದ್ದರು.