‘ಸೋಮಾರಿ ಸಿದ್ದ’ ಎಂದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್

Siddaramaiah Pratap simha
Published on

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ‘ಸೋಮಾರಿ ಸಿದ್ದ’ ಎಂದು ಟೀಕಿಸಿದ ಸಂಸದ ಪ್ರತಾಪ್ ಸಿಂಹ ವಿರುದ್ಧ ಪ್ರಕರಣ ದಾಖಲಾಗಿದೆ.

ಹುಣಸೂರಿನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಹನುಮಜಯಂತಿ ಕಾರ್ಯದ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ ಮುಖ್ಯಮಂತ್ರಿ ವಿರುದ್ಧ ಟೀಕಾಪ್ರಹಾರ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ರಾತ್ರಿ ಸಂಸದರ ಕಚೇರಿ ಎದುರು ಪ್ರತಿಭಟನೆ ನಡೆಸಿ ಪ್ರತಾಪ್ ಸಿಂಹ ವಿರುದ್ಧ ಪ್ರಕರಣ ದಾಖಲಿಸಲು ಪಟ್ಟುಹಿಡಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ. ವಿಜಯಕುಮಾರ್ ನೀಡಿದ ದೂರಿನ ಮೇರೆಗೆ ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಂಗ್ರೆಸ್ ಪ್ರತಿಭಟನೆ:

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಸಂಸದ ಪ್ರತಾಪ್ ಸಿಂಹ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ರಾತ್ರಿ ಜಲದರ್ಶಿನಿ ಅತಿಥಿಗೃಹ ಮುಂದೆ ರಸ್ತೆ ತಡೆ ಪ್ರತಿಭಟನೆ ನಡೆಸಿದರು.

ಸಂಸದರ ಕಚೇರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆಗೆ ಯತ್ನಿಸಿದ ಸಂದರ್ಭ ಅತಿಥಿಗೃಹ ಬಳಿ ಪೊಲೀಸರು ತಡೆಯೊಡ್ಡಿದರು. ಈ ಹಿನ್ನೆಲೆಯಲ್ಲಿ ಅತಿಥಿ ಗೃಹಕ್ಕೆ ತೆರಳುವ ದ್ವಾರದ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಪ್ರತಾಪ್ ಸಿಂಹ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಪಟ್ಟುಹಿಡಿದರು. ಆದರೆ, ಸಂಸದರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲು ಸಾಧ್ಯವಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ ನಂತರ ಕಾಂಗ್ರೆಸ್ ಕಾರ್ಯಕರ್ತರು ರಸ್ತೆ ತಡೆ ಪ್ರತಿಭಟನೆ ನಡೆಸಿದರು.

ಈ ಸಂದರ್ಭ ಮಾತನಾಡಿದ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್, ಪದೇ ಪದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರಿತು ಪ್ರತಾಪ್ ಸಿಂಹ ಅವಹೇಳನಕಾರಿ ಹೇಳಿಕೆ ನೀಡುತ್ತಿದ್ದಾರೆ. ಜಿಲ್ಲೆ ಹಾಗೂ ರಾಜ್ಯದ ಅಭಿವೃದ್ಧಿಗೆ ಸಿದ್ದರಾಮಯ್ಯ ಅವರ ಕೊಡುಗೆ ಅಪಾರವಾದದ್ದು. ಜಿಲ್ಲೆಯ ಅಭಿವೃದ್ಧಿಗೆ ಪ್ರತಾಪ್ ಸಿಂಹ ಅವರ ಕೊಡುಗೆ ಏನು ಎಂಬುದನ್ನು ಬಹಿರಂಗ ಪಡಿಸಲಿ. ಈ ಕುರಿತು ಬಹಿರಂಗ ಚರ್ಚೆಗೆ ನಾವು ಸಿದ್ಧ. ಆದರೆ, ಪ್ರತಾಪ್ ಸಿಂಹ ಚರ್ಚೆಗೆ ಮುಂದಾಗದೆ ಪಾಲಾಯನವಾದ ಮಾಡುತ್ತಿದ್ದಾರೆ. ಪ್ರಚೋದನಕಾರಿ ಹೇಳಿಕೆ ನೀಡುತ್ತಿರುವ ಪೊಲೀಸರು ಸ್ವಯಂ ಪ್ರೇರಿತರಾಗಿ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸಬೇಕು. ಇಲ್ಲವಾದಲ್ಲಿ ತೀವ್ರತರದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದೆ. ಆದರೆ, ಇದನ್ನು ಬಿಜೆಪಿಗರಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಬಿಜೆಪಿ ಅಧಿಕಾರಾವಧಿಯಲ್ಲಿ 40 ಸಾವಿರ ಕೋಟಿ ರೂ. ಅವ್ಯವಹಾರ ನಡೆದಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ. ಇದು ಬಿಜೆಪಿಯ ಭ್ರಷ್ಟಾಚಾರಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ. ವಿಜಯಕುಮಾರ್ ಮಾತನಾಡಿ, ಸಿದ್ದರಾಮಯ್ಯ ಅವರು ಯಾವುದೇ ಕಪ್ಪುಚುಕ್ಕೆ ಇಲ್ಲದ ರೀತಿಯಲ್ಲಿ ಆಡಳಿತ ನಡೆಸುತ್ತಿದ್ದಾರೆ. ಅವರ ಆಡಳಿತವನ್ನು ಪ್ರತಿಯೊಬ್ಬರು ಗುಣಗಾನ ಮಾಡಿದ್ದಾರೆ. ಇಂತಹ ಉತ್ತಮ ಆಡಳಿತ ನೀಡುತ್ತಿರುವ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದು. ಕೂಡಲೇ ಅವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದರು. ಸ್ಥಳಕ್ಕೆ ಆಗಮಿಸಿದ ಡಿಸಿಪಿ ಮುತ್ತುರಾಜ್ ಪ್ರಕರಣ ದಾಖಲಿಸುವ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂತೆಗೆದುಕೊಳ್ಳಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net