

ಹುನಗುಂದ: ಪುನರ್ವಸತಿ ಕೇಂದ್ರಗಳಿಗೆ ಮೂಲ ಸೌಕರ್ಯ ಕಲ್ಪಿಸುವುದು ನನ್ನ ಮೊದಲ ಆದ್ಯತೆ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.
ಜಲಸಂಪನ್ಮೂಲ ಇಲಾಖೆ, ಕೃಷ್ಣಾ ಮೇಲ್ದಂಡೆ ಯೋಜನೆ, ಪುನರ್ವಸತಿ ಮತ್ತು ಪುನರ್ನಿರ್ಮಾಣ ಇಲಾಖೆ ವತಿಯಿಂದ ಅಂದಾಜು 67.40 ಲಕ್ಷ ರೂ. ವೆಚ್ಚದಲ್ಲಿ ತಾಲೂಕಿನ ವರಗೋಡದಿನ್ನಿ ಪುನರ್ವಸತಿ ಕೇಂದ್ರದಲ್ಲಿ ಬಸ್ ಶೆಲ್ಟರ್ ಹಾಗೂ ಶಾಲಾ ಕಂಪೌಂಡ್ ನಿರ್ಮಾಣ ಕಾಮಗಾರಿಗೆ ಶನಿವಾರ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಪ್ರತಿ ವರ್ಷ ಮಳೆಗಾಲದಲ್ಲಿ ನದಿ ತೀರದ ಪ್ರದೇಶಗಳಲ್ಲಿ ಜನರು ಅತಿವೃಷ್ಟಿಯಿಂದ ತೊಂದರೆ ಅನುಭವಿಸುತ್ತಿದ್ದರು. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಾಲೂಕಿನ 10 ಪುನರ್ವಸತಿ ಕೇಂದ್ರಗಳಲ್ಲಿ ರಸ್ತೆ, ಚರಂಡಿ, ವಿದ್ಯುತ್, ಕುಡಿಯುವ ನೀರು ಸೇರಿ ವಿವಿಧ ಮೂಲ ಸೌಕರ್ಯ ಕಲ್ಪಿಸಲು ಅನುದಾನ ನೀಡಿದ್ದಾರೆ. ಸಂತ್ರಸ್ತರಿಗೆ ಹಕ್ಕುಪತ್ರಗಳನ್ನು ತಿಂಗಳೊಳಗೆ ನೀಡಲಾಗುವುದು ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಗಾಧರ ದೊಡ್ಡಮನಿ ಮಾತನಾಡಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಪುನರ್ವಸತಿ ಕೇಂದ್ರಗಳಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಆಗಿರಲಿಲ್ಲ. ವಿಜಯಾನಂದ ಕಾಶಪ್ಪನವರ ಅವಧಿಯಲ್ಲಿ ಪುನರ್ವಸತಿ ಕೇಂದ್ರಗಳ ಅಭಿವೃದ್ಧಿ ಕಾಮಗಾರಿಗಳು ನಿರಂತರವಾಗಿ ಆಗುತ್ತಿವೆ ಎಂದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಂಗಣ್ಣ ಬಾಗೇವಾಡಿ, ಗ್ರಾಪಂ ಅಧ್ಯಕ್ಷರು ಮತ್ತು ಸದಸ್ಯರು, ಪಿಕೆಪಿಎಸ್ ಅಧ್ಯಕ್ಷರು, ನಿರ್ದೇಶಕರು ಮತ್ತಿತರರಿದ್ದರು.