

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಮುಂದಿನ 2 ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದ್ದು, ಈ ಹಿನ್ನೆಲೆಯಲ್ಲಿ ವರ್ಷದ ಮೊದಲ ಮಳೆ ಸಿಂಚನ ಆಗುವ ಸಂಭವ ಇದೆ.ಸೋಮವಾರ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಕಾಣಿಸಿಕೊಂಡಿತ್ತು.
ಬೆಂಗಳೂರು ನಗರ, ಬೆಂ.ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಚಾಮರಾಜನಗರದಲ್ಲಿ ಜ.14ರಂದು ಹಾಗೂ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗದಲ್ಲಿ ಜ.15ರಂದು ಸಾಧಾರಣ ಪ್ರಮಾಣದಲ್ಲಿ ಮಳೆಯಾಗಲಿದೆ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದ್ದು, ಕನಿಷ್ಠ ಮತ್ತು ಗರಿಷ್ಠ ತಾಪಮಾನದಲ್ಲಿ ವಾಡಿಕೆಯಂತೆ ಉಷ್ಣಾಂಶ ದಾಖಲಾಗಲಿದೆ. ಬೀದರ್, ಕಲಬುರಗಿ, ರಾಯಚೂರು ಸೇರಿ ಕೆಲ ಜಿಲ್ಲೆಗಳಲ್ಲಿ ಮುಂಜಾನೆ ದಟ್ಟ ಮಂಜು ಕವಿದ ವಾತಾವರಣ ಇರಲಿದೆ.
ದಕ್ಷಿಣ ಕರ್ನಾಟಕ ವ್ಯಾಪ್ತಿಯ ಜಿಲ್ಲೆಗಳಲ್ಲೂ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಉಷ್ಣಾಂಶದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಒಂದೆರೆಡು ಜಿಲ್ಲೆಗಳಲ್ಲಿ ಮಾತ್ರ ಕನಿಷ್ಠ ತಾಪಮಾನದಲ್ಲಿ 1-2 ಡಿ.ಸೆ.ಉಷ್ಣಾಂಶ ಕುಸಿತವಾಗಬಹುದು ಎಂದು ಇಲಾಖೆ ಮಾಹಿತಿ ನೀಡಿದೆ.