

ಬೆಂಗಳೂರು:ರಾಜ್ಯದಲ್ಲಿ ಮುಂಗಾರು ಮುಗಿದ ಬೆನ್ನಲ್ಲೇ ಹಿಂಗಾರು ಮಳೆಯ ಆರ್ಭಟ ಜೋರಾಗಿದೆ. ದಕ್ಷಿಣ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 5 ದಿನ ಬಿರುಸಾಗಿ ವರ್ಷಧಾರೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ.
ಚಾಮರಾಜನಗರದ ಹರದನಹಳ್ಳಿ, ಚಿಕ್ಕಬಳ್ಳಾಪುರ, ಕಲಬುರಗಿ,ಶಿವಮೊಗ್ಗದ ಆಗುಂಬೆ, ಬೆಂಗಳೂರು ಸೇರಿ ರಾಜ್ಯದಲ್ಲಿ ಕೆಲ ಭಾಗಗಳಲ್ಲಿ ಗುರುವಾರ ಮಳೆಯಾಗಿದೆ. ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗದಲ್ಲಿ ಮುಂದಿನ 5 ದಿನ ಹಾಗೂ ಹಾಸನ, ಕೊಡಗು, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಅ.5ರಿಂದ ಮತ್ತು ಮೈಸೂರಿನಲ್ಲಿ ಅ.6ರಿಂದ ಮುಂದಿನ 3 ದಿನ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಇಲಾಖೆ ಯೆಲ್ಲೋ ಅರ್ಲಟ್ ನೀಡಿದೆ.
ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ವಿಜಯಪುರದಲ್ಲಿ ಮುಂದಿನ 24 ಗಂಟೆ ಯೆಲ್ಲೋ ಅರ್ಲಟ್ ಇರಲಿದೆ. ಬೀದರ್, ಬಾಗಲಕೋಟೆ, ಹಾವೇರಿ, ಕಲಬುರಗಿ, ರಾಯಚೂರು ಮತ್ತು ಯಾದಗಿರಿಯಲ್ಲಿ ಮುಂದಿನ 4 ದಿನ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ. ಕರಾವಳಿ ವ್ಯಾಪ್ತಿಯ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.
ಈ ಬಾರಿ ಹಿಂಗಾರು ಆಶಾದಾಯಕವಾಗಿದ್ದು, ವಾಡಿಕೆಯಷ್ಟೇ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಅಂದಾಜಿಸಿದೆ. ಅದರಂತೆ, ಅ.1ರಿಂದ ಶುರುವಾಗಿರುವ ಹಿಂಗಾರು ರಾಜ್ಯಾದ್ಯಂತ ಸುರಿಯುತ್ತಿದೆ. ದಕ್ಷಿಣ ಕರ್ನಾಟಕದಲ್ಲಿ ಮುಂದಿನ ಐದಾರು ದಿನ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ತಜ್ಞ ಶ್ರೀನಿವಾಸರೆಡ್ಡಿ ಮಾಹಿತಿ ನೀಡಿದರು.