ಶಿವಮೊಗ್ಗ ಜಿಲ್ಲೆಗೆ ಐದು ಹಾಸ್ಟೆಲ್ ಮಂಜೂರು

madhu bangarappa inuaguration hostel
ಬೊಮ್ಮನಕಟ್ಟೆಯಲ್ಲಿ ಇಂದಿರಾಗಾಂಧಿ ನರ್ಸಿಂಗ್ ಮಹಿಳಾ ಹಾಸ್ಟೆಲ್‌ನ ಕಟ್ಟಡವನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಉದ್ಘಾಟಿಸಿದರು. ಎಸ್.ಎನ್.ಚನ್ನಬಸಪ್ಪ, ಬಲ್ಕಿಷ್ ಬಾನು, ಎಸ್.ರವಿಕುಮಾರ್, ಆರ್.ಪ್ರಸನ್ನಕುಮಾರ್ ಇದ್ದರು.
Published on

ಶಿವಮೊಗ್ಗ: ಜಿಲ್ಲೆಗೆ ಐದು ಹೊಸ ವಿದ್ಯಾರ್ಥಿ ವಸತಿ ನಿಲಯಗಳನ್ನು ಮಂಜೂರು ಮಾಡಲಾಗಿದೆ. ವಿದ್ಯಾರ್ಥಿಗಳು ಈ ನಿಲಯಗಳ ಪ್ರಯೋಜನ ಪಡೆಯಬೇಕು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಬೊಮ್ಮನಕಟ್ಟೆಯಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಇಂದಿರಾಗಾಂಧಿ ನರ್ಸಿಂಗ್ ಮಹಿಳಾ ಹಾಸ್ಟೆಲ್‌ನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಶಿವಮೊಗ್ಗ, ಸೊರಬ, ಸಾಗರ, ಶಿರಾಳಕೊಪ್ಪ, ತೀರ್ಥಹಳ್ಳಿಯಲ್ಲಿ ಹಾಸ್ಟೆಲ್ ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ. 24 ಕೋಟಿ ರೂ. ಮೊತ್ತದಲ್ಲಿ ಎರಡು ಮೆಟ್ರಿಕ್ ವಿದ್ಯಾಲಯ ಪ್ರಾರಂಭಿಸಲು ಉದ್ದೇಶಿಸಲಾಗಿದೆ ಎಂದರು.

ಅಂದಾಜು 5 ಕೋಟಿ ರೂ. ವೆಚ್ಚದಲ್ಲಿ ಕರ್ನಾಟಕ ಹೌಸಿಂಗ್ ಬೋರ್ಡ್ ನಿರ್ವಹಣೆಯಲ್ಲಿ ಹಾಸ್ಟೆಲ್ ಕಟ್ಟಡದ ಕಾಮಗಾರಿ ಮುಕ್ತಾಯಗೊಂಡಿದೆ. ಪ್ರಸ್ತುತ 100 ಹಾಸಿಗೆ ವಸತಿ ನಿಲಯ ಇದಾಗಿದ್ದು, ಇದನ್ನು ಮೇಲ್ದರ್ಜೆಗೆ ಏರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಜಿಲ್ಲೆಯ ಬಿಸಿಎಂ ಇಲಾಖೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಫಲಿತಾಂಶ ಶೇ.93ರಷ್ಟಿದೆ. ಇದು ಉತ್ತಮ ಬೆಳವಣಿಗೆಯಾಗಿದೆ. ಜಿಲ್ಲೆಯಲ್ಲಿ 137 ವಿದ್ಯಾರ್ಥಿ ನಿಲಯಗಳಿದ್ದು, ಅದರಲ್ಲಿ 14,106 ವಿದ್ಯಾರ್ಥಿಗಳು ವಾಸ್ತವ್ಯ ಹೂಡಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ವಿದ್ಯಾರ್ಥಿ ನಿಲಯಗಳನ್ನು ಸರ್ಕಾರದಿಂದ ಮಂಜೂರು ಮಾಡಿಸಲಾಗುವುದು ಎಂದರು.

ಶಾಸಕ ಎಸ್.ಎನ್.ಚನ್ನಬಸಪ್ಪ ಮಾತನಾಡಿ, ನರ್ಸಿಂಗ್ ವಿದ್ಯಾರ್ಥಿಗಳು ಈ ವಸತಿ ನಿಲಯವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಎಂಎಲ್‌ಸಿಗಳಾದ ಬಲ್ಕಿಷ್ ಬಾನು, ಡಾ. ಧನಂಜಯ ಸರ್ಜಿ, ಭೋವಿ ಅಭಿವೃದ್ಧಿ ನಿಗಮ ಅಧ್ಯಕ್ಷ ಎಸ್.ರವಿಕುಮಾರ್, ಸೂಡಾ ಅಧ್ಯಕ್ಷ ಎಚ್.ಎಸ್.ಸುಂದರೇಶ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಸಿ.ಎಸ್.ಚಂದ್ರಭೂಪಾಲ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಕೆ.ಆರ್.ಶೋಭಾ, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎಸ್.ಪವಿತ್ರಾ ನಂದರಾಜು, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್.ಪ್ರಸನ್ನಕುಮಾರ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net