ಒಂದೇ ಕುಟುಂಬದ ಐವರಿಂದ ಆತ್ಮಹತ್ಯೆ ಯತ್ನ; ಇಬ್ಬರು ಮಹಿಳೆಯರ ಸ್ಥಿತಿ ಚಿಂತಾಜನಕ

Suicide
ಆತ್ಮಹತ್ಯೆಗೆ ಯತ್ನಿಸಿ ಅಸ್ವಸ್ಥಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿರುವುದು.
Published on

ಕೋಲಾರ: ರಾಜ್ಯದಲ್ಲಿ ಕಳೆದೆರಡು ತಿಂಗಳಿನಿಂದ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿದ್ದು, ಒಂದೇ ಕುಟುಂಬದ ಒಂದಕ್ಕಿಂತ ಹೆಚ್ಚು ಮಂದಿ ಒಟ್ಟಿಗೇ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳು ಕೂಡ ಹೆಚ್ಚಾಗಿವೆ. ಅಂಥದ್ದೇ ಒಂದು ಆತ್ಮಹತ್ಯೆ ಯತ್ನ ಒಂದೇ ಕುಟುಂಬದ ಐವರಿಂದ ನಡೆದಿದೆ.

ಕೋಲಾರ ನಗರದ ಕಾರಂಜಿಕಟ್ಟೆ ಬಡಾವಣೆಯಲ್ಲಿ ಈ ಸಾಮೂಹಿಕ ಆತ್ಮಹತ್ಯೆ ಯತ್ನ ನಡೆದಿದೆ. ಒಂದೇ ಕುಟುಂಬದ ಐವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ ಮಾಡಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರೆಲ್ಲರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದರೂ ಇಬ್ಬರು ಮಹಿಳೆಯರ ಸ್ಥಿತಿ ಚಿಂತಾಜನಕವಾಗಿದೆ.

ಮುನಿಯಪ್ಪ (70), ಅವರ ಪತ್ನಿ ನಾರಾಯಣಮ್ಮ (45), ಬಾಬು (45), ಪುಷ್ಪ (35) ಹಾಗೂ ಗಂಗೋತ್ರಿ (18) ಆತ್ಮಹತ್ಯೆಗೆ ಯತ್ನಿಸಿರುವ ಕುಟುಂಬ ಸದಸ್ಯರು. ಇವರನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಆರ್​.ಎಲ್​. ಜಾಲಪ್ಪ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಆತ್ಮಹತ್ಯೆ ಯತ್ನಕ್ಕೆ ನಿಖರ ಕಾರಣವೇನು ಎಂಬುದು ಇನ್ನೂ ಖಚಿತಪಟ್ಟಿಲ್ಲ. ಆದರೆ ಮಗು ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಹೆದರಿದ ಈ ಕುಟುಂಬದವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದೂ ಹೇಳಲಾಗುತ್ತಿದೆ. ಪೊಲೀಸರ ವಿಚಾರಣೆಯಿಂದ ಭಯಗೊಂಡು ಸಾಯಲು ನಿರ್ಧರಿಸಿದ್ದರು ಎಂದು ಮೂಲಗಳು ತಿಳಿಸಿವೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net