

ಶಿವಮೊಗ್ಗ: ಮಹಿಳೆ ಮೇಲೆ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿದ್ದಲ್ಲದೆ ಜೀವ ಬೆದರಿಕೆ ಹಾಕಿದ್ದ ಐದು ಮಂದಿಗೆ ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎರಡು ವರ್ಷ ಕಾರಾಗೃಹ ಶಿಕ್ಷೆ ಮತ್ತು ದಂಡ ವಿಧಿಸಿದೆ.
ಭದ್ರಾವತಿ ತಾಲೂಕಿನ ಹಿರಿಯೂರಿನ ಚಂದ್ರಪ್ಪ (62), ಗಂಗಮ್ಮ (57), ಸಂತೋಷ್(26), ಮಂಜುನಾಥ (24) ಮತ್ತು ಚಿಕ್ಕಮಗಳೂರು ಜಿಲ್ಲೆ ತರಿಕೆರೆ ತಾಲೂಕಿನ ಗುಡದಟ್ಟಿ ಗ್ರಾಮದ ಕವಿತಾ(34) ಶಿಕ್ಷೆಗೆ ಒಳಗಾದವರು. 2021ರ ಡಿ.21ರಂದು ಹಿರಿಯೂರು ಗ್ರಾಮದ ಮಹಿಳೆ ಮೇಲೆ ಅದೇ ಗ್ರಾಮದ ಐವರು ಗುಂಪು ಕಟ್ಟಿಕೊಂಡು ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಅಲ್ಲದೆ, ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದರು.
ಈ ಬಗ್ಗೆ ಮಹಿಳೆ ಭದ್ರಾವತಿ ಕಾಗದ ನಗರ ಠಾಣೆಗೆ ದೂರು ನೀಡಿದ್ದರು. ಆಗಿನ ತನಿಖಾಧಿಕಾರಿಯಾಗಿದ್ದ ಡಿವೈಎಸ್‌ಪಿ ಉಮೇಶ್ ಈಶ್ವರ್ ನಾಯ್ಕ್ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ಆರೋಪಿತರ ವಿರುದ್ಧ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶೆ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ಅವರು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಪ್ರತ್ಯೇಕವಾಗಿ 62 ಸಾವಿರ ರೂ. ದಂಡ ಪಾವತಿಸಬೇಕು. ತಪ್ಪಿದ್ದಲ್ಲಿ 1 ತಿಂಗಳ ಸಾದಾ ಸಜೆ ಅನುಭವಿಸುವುದು. ಎಸ್‌ಸಿ, ಎಸ್‌ಟಿ ಕಾಯ್ದೆಗೆ 2 ವರ್ಷ ಕಠಿಣ ಕಾರಾವಾಸ ಶಿಕ್ಷೆ, ಪ್ರತ್ಯೇಕವಾಗಿ 30 ಸಾವಿರ ರೂ. ದಂಡ, ತಪ್ಪಿದ್ದಲ್ಲಿ 1 ತಿಂಗಳ ಸಾದಾ ಸಜೆ ಅನುಭವಿಸತಕ್ಕದ್ದು ಹಾಗೂ ಸಂತ್ರಸ್ತೆಗೆ 2.50 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಿದ್ದಾರೆ. ಸರ್ಕಾರಿ ಅಭಿಯೋಜಕಿ ಪಿ.ರತ್ನಮ್ಮ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.