

ಅಂಕೋಲಾ: ಕೇಂದ್ರ ಸರ್ಕಾರ ಕ್ವಿಂಟಾಲ್ ಕೊಬ್ಬರಿಗೆ 20 ಸಾವಿರ ರೂ. ಕನಿಷ್ಠ ಬೆಂಬಲ ಬೆಲೆ ಮತ್ತು ರಾಜ್ಯ ಸರ್ಕಾರ 5000 ರೂ. ಪೋ›ತ್ಸಾಹಧನ ನೀಡಬೇಕು ಹಾಗೂ ತೆಂಗು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಒತ್ತಾಯಿಸಿ ಅ. 3ರಂದು ರಾಜ್ಯ ತೆಂಗು ಬೆಳೆಗಾರರ ಹೋರಾಟ ಸಮಿತಿ, ಸಂಯುಕ್ತ ಹೋರಾಟ ಕರ್ನಾಟಕ ಮತ್ತು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಸಮಿತಿ ನೇತೃತ್ವದಲ್ಲಿ ರಾಜ ಭವನ ಚಲೋ ಸಂಘಟಿಸಲಾಗಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಶಾಂತಾರಾಮ ನಾಯಕ ತಿಳಿಸಿದ್ದಾರೆ.
ತೆಂಗು ಬೆಳೆಗಾರರು ಅತ್ಯಂತ ಅಸಹಾಯಕ ಸ್ಥಿತಿಯಲ್ಲಿ ಬದುಕು ನಡೆಸುತ್ತಿದ್ದಾರೆ. ಕೊಬ್ಬರಿ ದರ ತೀವ್ರ ಕುಸಿದು ರೈತರಿಗೆ ದೊಡ್ಡ ಹೊಡೆತ ಕೊಟ್ಟಿದೆ. ಕೇಂದ್ರ ಸರ್ಕಾರದ ರೈತ ವಿರೋಧಿ ಆಮದು ಮತ್ತು ರಫ್ತು ನೀತಿಯಿಂದ ತಾಳೆ ಎಣ್ಣೆ, ಸೋಯಾ ಎಣ್ಣೆಯನ್ನು ಯಥೇಚ್ಛವಾಗಿ ಆಮದು ಮಾಡಿಕೊಳ್ಳಲಾಗುತ್ತಿದೆ. ಇದರಿಂದ ಭಾರತದಲ್ಲಿ ತೆಂಗಿನ ಉತ್ಪನ್ನಗಳಿಗೆ ಬೇಡಿಕೆ ಇಳಿಮುಖವಾಗಿ ಕೊಬ್ಬರಿ ಬೆಲೆ ತೀವ್ರವಾಗಿ ಕುಸಿದಿದೆ ಎಂದಿದ್ದಾರೆ.
ಅ. 3ರಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಸಾವಿರಾರು ರೈತರು ಚಳವಳಿಯಲ್ಲಿ ಭಾಗವಹಿಸಲಿದ್ದು, ಕೇಂದ್ರ ಸರ್ಕಾರಕ್ಕೆ ನಮ್ಮ ಹಕ್ಕೋತ್ತಾಯಗಳನ್ನು ತಿಳಿಸಲಾಗುವುದು ಎಂದು ಶಾಂತಾರಾಮ ನಾಯಕ ತಿಳಿಸಿದರು.