

ಬೆಂಗಳೂರು: ಬಿಬಿಎಂಪಿಯ ಪೂರ್ವ ವಲಯದಲ್ಲಿ ವಿವಿಧ ಭಾಗಗಳಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಹಾಗೂ ಅನಧಿಕೃತವಾಗಿ ಅಳವಡಿಸಿದ್ದ ಫ್ಲೆಕ್ಸ್, ಬ್ಯಾನರ್‌ಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಮಂಗಳವಾರ ಕೈಗೊಳ್ಳಲಾಯಿತು.
ವಲಯದ ಆಯುಕ್ತೆ ಆರ್.ಸ್ನೇಹಲ್ ಅವರ ನಿರ್ದೇಶನದಂತೆ ಸಿ.ವಿ.ರಾಮನ್‌ನಗರ ಪ್ರದೇಶದ ವಿವಿಧೆಡೆ ಕಾರ್ಯಾಚರಣೆ ನಡೆಸಲಾಯಿತು. ಮೇಲಿಂದ ಮೇಲೆ ಸೂಚನೆ ನೀಡಿದರೂ, ಪಾದಚಾರಿಗಳು ಹಾಗೂ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುತ್ತಿದ್ದ ಕಾರಣ ಅಂಗಡಿ-ಮುಂಗಟ್ಟುಗಳು ಹಾಗೂ ಪಾದಚಾರಿ ಮಾರ್ಗದಲ್ಲಿನ ಅನಧಿಕೃತ ಒತ್ತುವರಿ ಭಾಗವನ್ನು ತೆರವುಗೊಳಿಸಿ ನಾಗರಿಕರ ಓಡಾಟಕ್ಕೆ ಅನುವು ಮಾಡಿಕೊಡಲಾಯಿತು ಎಂದು ವಲಯದ ಅಧಿಕಾರಿಗಳು ತಿಳಿಸಿದ್ದಾರೆ.
ಫ್ಲೆಕ್ಸ್ ಗಳ ತೆರವು:
ಸಿ.ವಿ. ರಾಮನ್‌ನಗರ ವ್ಯಾಪ್ತಿಯ ವಾರ್ಡ್ ಸಂಖ್ಯೆ 109, ಹಳೇ ವಾರ್ಡ್ ಸಂಖ್ಯೆ 50ರ ಕಸ್ತೂರಿನಗರದ 2ನೇ ಮುಖ್ಯರಸ್ತೆಯಲ್ಲಿ ಪಾದಚಾರಿ ರಸ್ತೆಗಳ ಮೇಲಿದ್ದ ತಳ್ಳುಗಾಡಿಗಳನ್ನು ತೆರವುಗೊಳಿಸಲಾಯಿತು. ಇದೇ ಪ್ರದೇಶದ ವಿವಿಧೆಡೆ ಅನಧಿಕೃತವಾಗಿ ಅಳವಡಿಸಿದ್ದ ಬ್ಯಾನರ್‌ಗಳನ್ನು ಕೂಡ ಸಿಬ್ಬಂದಿಗಳು ತೆರವುಗೊಳಿಸಿದ್ದಾರೆ.
ಕಾರ್ಯಾಚರಣೆ ವೇಳೆ ಪೂರ್ವ ವಲಯದ ಸಹಾಯಕ ಕಾರ್ಯಪಾಲಕ ಅಭಿಯಂತರರು, ಸಹಾಯಕ ಅಭಿಯಂತರರು, ಆರೋಗ್ಯ ಪರಿವೀಕ್ಷಕರು ಸೇರಿದಂತೆ ಇನ್ನಿತರ ಅಧಿಕಾರಿಗಳಿದ್ದರು.