

ಬೆಳಗಾವಿ/ಚಿಕ್ಕೋಡಿ : ವೇದಗಂಗಾ-ದೂಧಗಂಗಾ ನದಿ ಪ್ರವಾಹದಿಂದ ಬಾಧಿತವಾಗಿರುವ ನಿಪ್ಪಾಣಿ ತಾಲ್ಲೂಕಿನ ಬಾರವಾಡ ಗ್ರಾಮದ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಊಟ ಮತ್ತಿತರ ಸೌಕರ್ಯಗಳನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಅಂಜುಮ್ ಪರ್ವೇಜ್ ಅವರು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮಸ್ಥರು ಪ್ರತಿವರ್ಷ ಪ್ರವಾಹದಿಂದ ಬಾಧಿತಗೊಳ್ಳುತ್ತಿರುವುದರಿಂದ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಮನವಿ ಮಾಡಿಕೊಂಡರು. ಇದಲ್ಲದೇ ಕಳೆದ ಬಾರಿ ಪ್ರವಾಹದಿಂದ ಮನೆ ಕಳೆದುಕೊಂಡಿರುವವರಿಗೆ ಬಿಡುಗಡೆಯಾಗಿರುವ ಅನುದಾನದಲ್ಲಿ ಬೇರೆ ಕಡೆ ಮನೆ ಕಟ್ಟಿಕೊಳ್ಳಲು ಅವಕಾಶ ನೀಡಬೇಕು. ಆದರೆ ಜಿಪಿಎಸ್ ತಾಂತ್ರಿಕ ಕಾರಣದಿಂದ ಬೇರೆ ಕಡೆ ಮನೆ ಕಟ್ಟಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಬೇರೆ ಕಡೆ ಸುರಕ್ಷಿತ ಸ್ಥಳದಲ್ಲಿ ಮನೆ ನಿರ್ಮಾಣಕ್ಕೆ ಅವಕಾಶ ಕಲ್ಪಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು.
ಈ ಬಗ್ಗೆ ಸರಕಾರದ ಮಟ್ಟದಲ್ಲಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅಂಜುಮ್ ಪರ್ವೇಜ್ ಭರವಸೆ ನೀಡಿದರು. ಯಮಗರಣಿ ಬಳಿ ಪ್ರವಾಹ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ವ್ಯತ್ಯಯ ಆಗುವ ಬಗ್ಗೆ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಜಿಪಂ ಸಿಇಒ ಹರ್ಷಲ್ ಭೋಯರ್, ಚಿಕ್ಕೋಡಿ ಉಪ ವಿಭಾಗಾಧಿಕಾರಿ ಮಾಧವ್ ಗಿತ್ತೆ, ಬಾರವಾಡ ಗ್ರಾಮ ಪಂಚಾಯಿತಿ ಪ್ರವಾಹ ನೋಡಲ್ ಅಧಿಕಾರಿ ರಾಮಮೂರ್ತಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.