

ಬೆಳಗಾವಿ: ಕರೊನಾ ವೈರಸ್ ನಿಯಂತ್ರಿಸುವ ನಿಟ್ಟಿನಲ್ಲಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿರುವ ಅಧಿಕಾರಿಗಳು ಮುಂದೆ ಎದುರಾಗಬಹುದಾದ ಪ್ರವಾಹ ಪರಿಸ್ಥಿತಿ ನಿರ್ವಹಣೆಗೂ ಸೂಕ್ತ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಸೂಚಿಸಿದರು.
ಜಿಪಂ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಕರೊನಾ ವೈರಸ್ ನಿಯಂತ್ರಣ ಹಾಗೂ ನೆರೆಹಾವಳಿ ನಿರ್ವಹಣೆ ಸಭೆಯಲ್ಲಿ ಅವರು ಮಾತನಾಡಿ, ಪ್ರವಾಹ ಸಮಸ್ಯೆ ನಿಭಾಯಿಸಲು ರಾಜ್ಯಮಟ್ಟದಲ್ಲಿ ಉನ್ನತ ಮಟ್ಟದ ಸಮಿತಿ ರಚನೆಗೆ ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ, ನೆರೆ ಸವಾಲು ಎದುರಿಸಲು
ಸರ್ಕಾರದಿಂದ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದರು.
ದೆಹಲಿಯಿಂದ ತಬ್ಲಿಘಿಗಳು, ಅಜ್ಮೀರ್‌ನಿಂದ ಜನರು ಹಿಂದುರುಗಿದ ಬಳಿಕವೂ ಜಿಲ್ಲೆಯಲ್ಲಿ ಕರೊನಾ ನಿಯಂತ್ರಣಕ್ಕೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗಿತ್ತು. ಇದೀಗ ಮಹಾರಾಷ್ಟ್ರದಿಂದ ಅತೀ ಹೆಚ್ಚು ಜನರು ಬರುತ್ತಿರುವುದರಿಂದ ಇನ್ನೂ ಹೆಚ್ಚಿನ ಮುನ್ನೆಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.
ಬಳ್ಳಾರಿ ನಾಲಾ ಸ್ವಚ್ಛಗೊಳಿಸಿ: ಬಳ್ಳಾರಿ ನಾಲಾದಿಂದ ಕಳೆದ ಬಾರಿ ದೊಡ್ಡ ಅನಾಹುತವಾಗಿದ್ದು, ನಾಲಾ ಸ್ವಚ್ಛತೆಗೆ ಪಾಲಿಕೆಯ ಆಯುಕ್ತರು ಕ್ರಮ ಕೈಗೊಳ್ಳಬೇಕು. ನಾಲಾ ಅತಿಕ್ರಮಣ ತೆರವುಗೊಳಿಸಲು ಸರ್ವೇ ಕಾರ್ಯ ಮುಂದುವರಿಸಿ. ಮುಂದಿನ ದಿನಗಳಲ್ಲಿ ಖುದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತೇನೆ ಎಂದು ಸಚಿವ ಜಾರಕಿಹೊಳಿ ತಿಳಿಸಿದರು.
ಕೆಲಸ ನೀಡಿ: ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಮಾತನಾಡಿ, ಕರೊನಾ ಹಿನ್ನೆಲೆಯಲ್ಲಿ ಕೆಲಸವಿಲ್ಲದೆ ತೊಂದರೆಗೆ ಸಿಲುಕಿರುವ ಕಾರ್ಮಿಕರಿಗೆ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದರು. ಶಾಸಕ ಸತೀಶ ಜಾರಕಿಹೊಳಿ ಮಾತನಾಡಿ, ಕ್ವಾರಂಟೈನ್ ಇರುವವರನ್ನು ವರದಿ ಬರುವ ಮೊದಲೇ ಕಳುಹಿಸಿದ್ದರಿಂದ ಕೆಲವು ಭಾಗಗಳಲ್ಲಿ ಸೋಂಕು ಹರಡಿದೆ. ಇದೀಗ ತಪಾಸಣೆ ಕಡಿಮೆಗೊಳಿಸಿದರೆ ಸೋಂಕು ಮತ್ತಷ್ಟು ಹರಡುವ ಸಾಧ್ಯತೆಯಿದೆ ಎಂದರು.
ದೇಗುಲ ಆರಂಭ ಬೇಡ: ಶಾಸಕ ಡಿ.ಎಂ. ಐಹೊಳೆ ಮಾತನಾಡಿ, ರಾಯಬಾಗ ತಾಲೂಕಿನ ಚಿಂಚಲಿ ಮಾಯಕ್ಕ ದೇವಸ್ಥಾನವನ್ನು ಸದ್ಯಕ್ಕೆ ಆರಂಭಿಸಬಾರದು ಎಂದು ಮನವಿ ಮಾಡಿದರು. ಶಾಸಕ ಮಹಾಂತೇಶ ದೊಡಗೌಡರ ಮಾತನಾಡಿ, ತರಕಾರಿ ಮತ್ತು ತೋಟಗಾರಿಕೆ ಬೆಳೆಗಾರರಿಗೆ ಆಗಿರುವ ಹಾನಿ ಭರಿಸಲು ಅಗತ್ಯ ಕ್ರಮ ವಹಿಸಬೇಕು ಎಂದರು. ಶಾಸಕ ಗಣೇಶ ಹುಕ್ಕೇರಿ ಮಾತನಾಡಿ, ಚಿಕ್ಕೋಡಿಯಲ್ಲೂ ಪ್ರತ್ಯೇಕವಾದ ವ್ಯವಸ್ಥೆ ಆರಂಭಿಸುವ ಅಗತ್ಯವಿದೆ ಎಂದು ತಿಳಿಸಿದರು.
ಪರಿಹಾರ ನೀಡಿ: ಶಾಸಕ ಅನಿಲ ಬೆನಕೆ ಮಾತನಾಡಿ, ಅಂತಾರಾಜ್ಯ ಪ್ರಯಾಣಿಕರ ಸಂಚಾರ, ಮದುವೆ ಸಮಾರಂಭಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು ಎಂದು ಒತ್ತಾಯಿಸಿದರು. ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಮಹೇಶ ಕುಮಠಳ್ಳಿ ಮಾತನಾಡಿ, ಕಳೆದ ವರ್ಷ ಪ್ರವಾಹದಲ್ಲಿ ಮನೆ ಕಳೆದುಕೊಂಡ ಕೆಲವರಿಗೆ ತಾಂತ್ರಿಕ ಕಾರಣಕ್ಕೆ ಪರಿಹಾರದ ಮೊತ್ತ ತಲುಪಿಲ್ಲ. ಈ ಬಗ್ಗೆ ಮರು ಸಮೀಕ್ಷೆ ನಡೆಸಿ ತಕ್ಷಣವೇ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ಸೀರೆ ಖರೀದಿಸಿ: ಶಾಸಕ ಅಭಯ ಪಾಟೀಲ ಮಾತನಾಡಿ, ನೇಕಾರರಿಗೆ ಕಿಟ್ ಹಂಚಿಕೆ ಬಗ್ಗೆ ಉಂಟಾಗಿರುವ ಗೊಂದಲ ಸರಿಪಡಿಸಬೇಕಿದೆ. ಈಗಾಗಲೇ ವಿದ್ಯುತ್ ಮಗ್ಗಗಳಲ್ಲಿ ಕೆಲಸ ಮಾಡುವ ಎಲ್ಲರಿಗೂ ಪರಿಹಾರ ನೀಡುವಂತೆ ಸರ್ಕಾರದ ಗಮನ ಸೆಳೆಯಲಾಗಿದೆ. ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಪೊಲೀಸ್ ಸಿಬ್ಬಂದಿ ಮತ್ತಿತರರಿಗೆ ಹಂಚಿಕೆ ಮಾಡಲು ನೇಕಾರರಿಂದ ಸರ್ಕಾರವೇ ನೇರವಾಗಿ ಸೀರೆಗಳನ್ನು ಖರೀದಿಸಬೇಕು ಎಂದು ಸಲಹೆ ನೀಡಿದರು.
ಇದೇ ವೇಳೆ ನರೇಗಾ ಯೋಜನೆಯ ಪ್ರಚಾರ ಸಾಮಗ್ರಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಬಿಡುಗಡೆಗೊಳಿಸಿದರು. ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ, ಜಿಪಂ ಅಧ್ಯಕ್ಷೆ ಆಶಾ ಐಹೊಳೆ, ಉಪಾಧ್ಯಕ್ಷ ಅರುಣ ಕಟಾಂಬಳೆ, ಪೊಲೀಸ್ ಆಯುಕ್ತ ಬಿ.ಎಸ್. ಲೋಕೇಶಕುಮಾರ್, ಜಿಪಂ ಸಿಇಒ ಡಾ. ಕೆ.ವಿ. ರಾಜೇಂದ್ರ, ಕರೊನಾ ವಿಶೇಷ ನಿಯಂತ್ರಣಾಧಿಕಾರಿ ರಾಜೇಂದ್ರ ಚೋಳನ್ ಇದ್ದರು.
ಜಿಲ್ಲಾಧಿಕಾರಿ ಎಸ್.ಬಿ. ಬೊಮ್ಮನಹಳ್ಳಿ ಮಾತನಾಡಿ, ಕರೊನಾ ವೈರಸ್ ನಿಯಂತ್ರಣಕ್ಕಾಗಿ ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 48 ಕಂಟೇನ್ಮೆಂಟ್ ಜೋನ್ ಘೋಷಿಸಲಾಗಿದೆ. ಇದರಲ್ಲಿ 9 ಡಿನೋಟಿಫೈ ಮಾಡಲಾಗಿದೆ. ಕಂಟೇನ್ಮೆಂಟ್ ಜೋನ್‌ಗಳಲ್ಲಿ ಮನೆಬಾಗಿಲಿಗೆ ಅಗತ್ಯ ವಸ್ತು ಪೂರೈಸಲು ಕ್ರಮಕೈಗೊಳ್ಳಲಾಗಿದೆ. ಗೋವಾ, ಮಹಾರಾಷ್ಟ್ರ ರಾಜ್ಯಗಳಿಂದ ಬೆಳಗಾವಿ ಜಿಲ್ಲೆಯ ಮೂಲಕ 45 ಸಾವಿರ ಜನರು ಪ್ರಯಾಣ ಹಾಗೂ 7 ಸಾವಿರ ವಾಹನಗಳು ಸಂಚರಿಸಿವೆ. ಸರ್ಕಾರದ ಹೊಸ ಮಾರ್ಗಸೂಚಿ ಪ್ರಕಾರ ಕ್ವಾರಂಟೈನ್ ಮಾಡಲಾಗುತ್ತಿದೆ ಎಂದರು.
ಕರೊನಾ ವೈರಸ್ ಶಂಕಿತರ ತಪಾಸಣೆಗೆ ಪಿಪಿಇ ಕಿಟ್ ಹಾಗೂ ಔಷಧ ಸಾಮಗ್ರಿ ಕೊರತೆಯಿಲ್ಲ. 9 ತಾಲೂಕು ಆಸ್ಪತ್ರೆಗಳಲ್ಲೂ ತುರ್ತು ಚಿಕಿತ್ಸೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.| ಡಾ. ಎಸ್.ವಿ. ಮುನ್ಯಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ