ಜ.೨೬ ರಿಂದ ರಾಜಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ

palapushpa
Published on

ಮಡಿಕೇರಿ: ನಗರದ ರಾಜಸೀಟು ಉದ್ಯಾನವನದಲ್ಲಿ ಪ್ರಸಕ್ತ ಸಾಲಿನ ಫಲಪುಷ್ಪ ಪ್ರದರ್ಶನ ಜ.೨೬ ರಿಂದ ಮೂರು ದಿನಗಳ ಕಾಲ ಆಯೋಜಿಸಲು ರಾಜಸೀಟು ಅಭಿವೃದ್ಧಿ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಯಿತು.


ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಗೆ ಭೇಟಿ ನೀಡುವ ಪ್ರತೀ ಪ್ರವಾಸಿಗರು ರಾಜಾಸೀಟಿಗೆ ಭೇಟಿ ನೀಡಲಿದ್ದಾರೆ. ಆದ್ದರಿಂದ ರಾಜಾಸೀಟು ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕಿದೆ. ಆ ನಿಟ್ಟಿನಲ್ಲಿ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸುವುದು ಮತ್ತಿತರ ಸಂಬಂಧ ವಿಶೇಷ ಗಮನಹರಿಸುವಂತೆ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಿಗೆ ಸೂಚಿಸಿದರು.


ರಾಜಾಸೀಟು ಮಾರ್ಗದ ರಸ್ತೆಯನ್ನು ಸರಿಪಡಿಸಬೇಕು. ರಾಜಾಸೀಟು ಉದ್ಯಾನವನದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಕೈಗೊಳ್ಳಲಾಗಿರುವ ನೀರು ಪೂರೈಕೆ ಮತ್ತು ಲೈಟಿಂಗ್ ಕೆಲಸವನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ರಾಜಾಸೀಟು ಉದ್ಯಾನವನದ ಫೌಂಟೇನ್‌ನ್ನು(ಕಾರಂಜಿ) ಉತ್ತಮವಾಗಿ ನಿರ್ವಹಣೆ ಮಾಡುವಂತೆ ತೋಟಗಾರಿಕೆ ಉಪ ನಿರ್ದೇಶಕರಿಗೆ ಸೂಚಿಸಿದರು.


ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಯೋಗೇಶ್ ಮಾತನಾಡಿ, ಫಲಪುಷ್ಪ ಪ್ರದರ್ಶನ ಏರ್ಪಡಿಸುವ ಸಂಬಂಧ ಕೊಡಗು ಜಿಲ್ಲೆಯ ಕಲೆ, ಸಂಸ್ಕೃತಿ, ಪರಿಸರ ಮತ್ತಿತರ ವಿಷಯಗಳ ಕುರಿತು ಹಲವು ಮಾಹಿತಿ ನೀಡಬಹುದಾಗಿದೆ ಎಂದು ಮನವಿ ಮಾಡಿದರು.


ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕಿ ಅನಿತಾ ಭಾಸ್ಕರ್, ರಾಜಾಸೀಟು ಮುಂಭಾಗದಲ್ಲಿ ರಸ್ತೆ ಬದಿ ರೈಲಿಂಗ್ಸ್ ನಿರ್ಮಾಣ ಮಾಡುವುದು ಅತ್ಯಗತ್ಯ. ರಾಜಾಸೀಟು ಬಳಿ ಕೊಡಗು ಜಿಲ್ಲೆಯ ಪ್ರವಾಸಿ ತಾಣಗಳ ಸಂಬಂಧ ಮಾಹಿತಿ ಫಲಕ ಅಳವಡಿಸುವುದು ಅಗತ್ಯ ಎಂದು ಕೋರಿದರು.


ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಮುತ್ತಪ್ಪ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಸಿದ್ದೇಗೌಡ, ಕೆಆರ್‌ಐಡಿಎಲ್ ಕಾರ್ಯಪಾಲಕ ಎಂಜಿನಿಯರ್ ಸುರೇಶ್, ಜಿ.ಪಂ.ಸಹಾಯಕ ಕಾರ್ಯದರ್ಶಿ ಜೀವನ್ ಕುಮಾರ್, ನಗರಸಭೆಯ ಪರಿಸರ ಎಂಜಿನಿಯರ್ ಸೌಮ್ಯ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಸಚಿನ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net