ನ.16ಕ್ಕೆ ಎಫ್‌ಎಂಸಿ ಕಾಲೇಜು ಹಳೇ ವಿದ್ಯಾರ್ಥಿ ಸಂಘದ ಮಹಾಸಭೆ

FMC
Published on

ಮಡಿಕೇರಿ:

ಮಡಿಕೇರಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಹಳೇ ವಿದ್ಯಾರ್ಥಿಗಳ ಸಂಘದ ವಾರ್ಷಿಕ ಮಹಾಸಭೆ ಮತ್ತು ಸಂತೋಷ ಕೂಟ ಮುಂದಿನ ತಿಂಗಳ 16ರಂದು ಕಾಲೇಜು ಸಭಾಂಗಣದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಬೊಳ್ಳಜಿರ ಅಯ್ಯಪ್ಪ ತಿಳಿಸಿದ್ದಾರೆ. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಮಂಗಳೂರು ವಿಶ್ವವಿದ್ಯಾಲಯ ಕುಲಪತಿ ಪ್ರೊ. ಪಿ.ಎಲ್. ಧರ್ಮ, ಕೊಡಗು ವಿಶ್ವವಿದ್ಯಾನಿಯ ಕುಲಪತಿ ಪ್ರೊ.ಅಶೋಕ ಎಸ್.ಆಲೂರ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಪ್ರಾಂಶುಪಾಲ ಮೇ. ಪ್ರೊ.ಬಿ. ರಾಘವ ಪಾಲ್ಗೊಳ್ಳಲಿದ್ದಾರೆ ಎಂದು ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಶಿಕ್ಷಣ ಸಂಸ್ಥೆ ದೇವಾಲಯವಿದ್ದಂತೆ, ಪ್ರತಿಯೊಬ್ಬರಿಗೆ ತಾವು ಓದಿದ ಶಿಕ್ಷಣ ಸಂಸ್ಥೆಯ ಮೇಲೆ ಅಭಿಮಾನವಿರಬೇಕು. ವಿದ್ಯಾರ್ಥಿಗಳು ದೇಶದ ಮುಂದಿನ ಭವಿಷ್ಯವಾಗಿದ್ದು, ಉತ್ತಮ ಶಿಕ್ಷಣ, ಅವಕಾಶ ಮತ್ತು ಮಾರ್ಗದರ್ಶನ ದೊರೆತಾಗ ಯುವ ಸಮೂಹದಿಂದ ದೇಶದ ಪ್ರಗತಿಗೆ ಕೊಡುಗೆ ನೀಡಲು ಸಾಧ್ಯವಾಗುತ್ತದೆ.

ಆದ್ದರಿಂದ ಕಾರ್ಯಪ್ಪ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಸದಸ್ಯತ್ವ ಪಡೆಯುವ ಮೂಲಕ ಕಾಲೇಜು ಅಭಿವೃದ್ಧಿ ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಕೈಜೋಡಿಸುವಂತೆ ಮನವಿ ಮಾಡಿದರು.

ಕಾರ್ಯದರ್ಶಿ ಚಂದನ್ ನಂದರಬೆಟ್ಟು ಮಾತನಾಡಿ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು, ಪ್ರಾಧ್ಯಾಪಕರು, ಶೈಕ್ಷಣಿಕ, ಕ್ರೀಡೆ ಹಾಗೂ ಎನ್‌ಸಿಸಿಯಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಲಾಗುವುದು ಎಂದು ಮಾಹಿತಿ ನೀಡಿದರು.

ಕಾಲೇಜು ಪ್ರಾಂಶುಪಾಲ ಪ್ರೊ. ಮೇಜರ್ ಬಿ.ರಾಘವ ಅವರು ಮಾತನಾಡಿ, 75 ಸಂವತ್ಸರವನ್ನು ಪೂರೈಸಿರುವ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಅಭಿವೃದ್ಧಿಗೆ ಕೊಡಗಿನ ಸಾಕಷ್ಟು ವಿದ್ಯಾರ್ಥಿಗಳು ಶ್ರಮಿಸಿದ್ದಾರೆ. ಹಳೇ ವಿದ್ಯಾರ್ಥಿ ಸಂಘ ಪ್ರತಿಯೊಂದು ವಿಚಾರದಲ್ಲಿ ಆಸಕ್ತಿ ವಹಿಸಿ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆ ನೀಡುತ್ತಿದೆ ಎಂದರು.

ಸಂಘದ ಉಪಾಧ್ಯಕ್ಷ ಬೊಟ್ಟಂಗಡ ಗಣಪತಿ ಮಾತನಾಡಿ, ಹಳೇ ವಿದ್ಯಾರ್ಥಿ ಸಂಘ ಅನೇಕ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನದ ಕುರಿತು ಕಾರ್ಯಾಗಾರ ನಡೆಸಿದೆ. ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ನೀಡುವುದು ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ದೊಡ್ಡ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಕೈಜೋಡಿಸಿದರೆ ಅಭಿವೃದ್ಧಿ ಕಾರ್ಯಗಳು ಸುಲಲಿತವಾಗಿ ನಡೆಯಲಿದೆ ಎಂದು ಹೇಳಿದರು.

ಸಂಘದ ನಿರ್ದೇಶಕರಾದ ಜಗದೀಶ್ ಸಬ್ಬಂಡ್ರ ಹಾಗೂ ಎಸ್.ಆರ್. ವತ್ಸಲ ಸುದ್ದಿಗೋಷ್ಠಿಯಲ್ಲಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net