

ಮಡಿಕೇರಿ: ರಾಜ್ಯ ವಿಧಾನಸಭಾ ಚುನಾವಣೆ ಸಂಬಂಧ ಚುನಾವಣಾ ಆಯೋಗದಿಂದ ಸಿದ್ಧತೆಗಳು ನಡೆದಿದ್ದು, ಚುನಾವಣಾ ಆಯೋಗ ಹೊರಡಿಸುವ ಆದೇಶಗಳನ್ನು ಚಾಚು ತಪ್ಪದೇ ಪಾಲಿಸುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾರವರು ಸ್ಪಷ್ಟ ನಿರ್ದೇಶನ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಸಭೆಯಲ್ಲಿ ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆ ಸಂಬಂಧ ಇದುವರೆಗೆ ಕೈಗೊಳ್ಳಲಾಗಿರುವ ಕಾರ್ಯಗಳ ಬಗ್ಗೆ ಮಾಹಿತಿ ಪಡೆದು ಅವರು ಮಾತನಾಡಿದರು.
ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣಾ ಅಭಿಯಾನ ನಡೆಯುತ್ತಿದ್ದು, ೧೮ ವರ್ಷ ಮೇಲ್ಪಟ್ಟವರೆಲ್ಲರೂ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಿಕೊಳ್ಳಬೇಕು. ಪಡಿತರ ಚೀಟಿ ಪಡೆದಿರುವ ಕುಟುಂಬಗಳ ಸಂಖ್ಯೆ ಮತ್ತು ಕುಟುಂಬದವರ ವಿವರವನ್ನು ಪರಿಶೀಲಿಸಿದರೆ ನಿಖರ ಮಾಹಿತಿ ಲಭ್ಯವಾಗಲಿದೆ ಎಂದರು.
ಹಾಡಿಗಳು ಸೇರಿದಂತೆ ಎಲ್ಲಾ ಮತಗಟ್ಟೆ ವ್ಯಾಪ್ತಿಯಲ್ಲಿ ಭೇಟಿ ನೀಡಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿ, ಹೆಸರು ತೆಗೆಯುವುದು ಮತ್ತಿತರ ಕಾರ್ಯವನ್ನು ವ್ಯವಸ್ಥಿತವಾಗಿ ನಡೆಸಬೇಕು. ದಿನಾಂಕ, ಸ್ಥಳ, ಮತ್ತಿತರ ಸಂಬಂಧ ಜತನ ಮಾಡಿಕೊಳ್ಳಬೇಕು. ಅರ್ಹರೆಲ್ಲರೂ ಮತದಾನ ಮಾಡಬೇಕು ಎಂಬುದು ಚುನಾವಣಾ ಆಯೋಗದ ಆಶಯವಾಗಿದೆ. ಯುವ ಮತದಾರರ ಹೆಸರು ನೋಂದಣಿಗೆ ಹೆಚ್ಚಿನ ಗಮನಹರಿಸಬೇಕು. ಮತದಾರರ ಗುರುತಿನ ಚೀಟಿ ವಿತರಣೆಗೆ ಕ್ರಮವಹಿಸಬೇಕು. ಸಹಾಯವಾಣಿ ೧೯೫೦ ಕರೆಗಳಿಗೆ ಸ್ಪಂದಿಸಬೇಕು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸೂಚಿಸಿದರು.
ವಿಕಲಚೇತನ ಮತದಾರರಿಗೆ ಮತಗಟ್ಟೆಯಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸುವುದು. ಇವಿಎಂ ಮತ್ತು ವಿವಿಪಿಎಟಿ(ವಿವಿಪ್ಯಾಟ್) ಇರುವ ಕಡೆ ಸೂಕ್ತ ಭದ್ರತೆ ಕಲ್ಪಿಸಬೇಕು. ಕೊಡಗು ಜಿಲ್ಲೆಯ ಸಾಂಪ್ರದಾಯಿಕ ಮತಗಟ್ಟೆ ಸ್ವೀಪ್ ಮೂಲಕ ಸ್ಪರ್ಧಾ ಕಾರ್ಯಕ್ರಮ ಏರ್ಪಡಿಸುವುದು, ಸಖಿ ಮತಗಟ್ಟೆ ಸ್ಥಾಪಿಸುವುದು ಹೀಗೆ ಹಲವು ವಿಭಿನ್ನ ಕಾರ್ಯಗಳನ್ನು ನಿರ್ವಹಿಸುವಂತೆ ಸಲಹೆ ಮಾಡಿದರು.
ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಮಾತನಾಡಿ, ಜಿಲ್ಲೆಯಲ್ಲಿ ಮತಗಟ್ಟೆ ಪರಿಷ್ಕರಣೆ ಸಂಬಂಧ ಬಿಎಲ್‌ಒಗಳಿಗೆ ತರಬೇತಿ ನೀಡಿ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧ ಮನೆ ಮನೆಗೆ ಭೇಟಿ ನೀಡಿ ಸರ್ವೇ ಕಾರ್ಯ ನಡೆಸಲಾಗಿದೆ. ರಾಜಕೀಯ ಪಕ್ಷಗಳ ಮುಖಂಡರ ಜತೆ ಸಮಾಲೋಚನೆ ನಡೆಸಲಾಗಿದೆ. ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಸಂಬಂಧಿಸಿದಂತೆ ಜಾಗೃತಿ ಮೂಡಿಸಲಾಗಿದೆ. ಜಿಲ್ಲೆಯ ೨೫೦ ಹಾಡಿಗಳಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿ ಮತ್ತಿತರ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ೫,೬೧,೯೪೨ ಜನಸಂಖ್ಯೆಯಲ್ಲಿ ೪,೩೯,೦೩೯ ಜನ ಮತದಾರರಿದ್ದಾರೆ. ೧,೪೪೯ ಜನ ಸೇವಾ ಮತದಾರರಿದ್ದಾರೆ. ೫೪೨ ಪೊಲೀಂಗ್ ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತದೆ ಎಂದು ತಿಳಿಸಿದರು.
ಅಬಕಾರಿ ಇಲಾಖೆಯ ಜಿಲ್ಲಾ ಆಯುಕ್ತ ಜಗದೀಶ್ ನಾಯಕ್ ಮಾತನಾಡಿ, ಕುಟ್ಟ, ಮಾಕುಟ್ಟ, ಕರಿಕೆ ಸೇರಿದಂತೆ ಒಟ್ಟು ಎಂಟು ಕಡೆಗಳಲ್ಲಿ ಚೆಕ್ ಪೋಸ್ಟ್ ಸ್ಥಾಪಿಸಲಾಗುತ್ತದೆ. ನಾಲ್ಕು ಸಹಾಯವಾಣಿ ಕೇಂದ್ರ ತೆರೆಯಲಾಗುತ್ತದೆ. ಮೊಬೈಲ್ ಸ್ಕ್ವಾಡ್ ನಿಯೋಜಿಸಲಾಗುತ್ತದೆ. ಅಂತರರಾಜ್ಯ ಪೊಲೀಸರ ಜೊತೆ ಸಮಾಲೋಚನಾ ಸಭೆ ನಡೆಸಲಾಗುತ್ತದೆ ಎಂದು ಹೇಳಿದರು.
ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಮೇ.ಬಾಲಸುಬ್ರಮಣ್ಯಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಯಾಪ್ಟನ್ ಎಂ.ಎ.ಅಯ್ಯಪ್ಪ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ಐಟಿಡಿಪಿ ಇಲಾಖಾ ಅಧಿಕಾರಿ ಎಸ್.ಹೊನ್ನೇಗೌಡ, ನಗರಾಭಿವೃದ್ಧಿ ಶಾಖೆಯ ಯೋಜನಾ ನಿರ್ದೇಶಕ ಬಸಪ್ಪ, ತಹಶೀಲ್ದಾರ ಪಿ.ಎಸ್.ಮಹೇಶ್, ಅರ್ಚನಾ ಭಟ್, ಪ್ರಕಾಶ್, ಪ್ರಶಾಂತ್, ತಾ.ಒಂ.ಇಒಗಳಾದ ಅಪ್ಪಣ್ಣ, ಜಯಣ್ಣ, ನಗರಸಭೆ ಪೌರಾಯುಕ್ತ ವಿಜಯ, ಪ.ಪಂ.ಮುಖ್ಯಾಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಇತರರು ಇದ್ದರು.
ಕಚೇರಿ ಮತ್ತು ಹಾಡಿಗಳಿಗೆ ಭೇಟಿ
ತಹಶೀಲ್ದಾರ್ ಕಚೇರಿಗೆ ಭೇಟಿ ನೀಡಿ ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧ ಕೈಗೊಳ್ಳಲಾಗಿರುವ ಕಡತಗಳನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಪರಿಶೀಲಿಸಿದರು. ಬಳಿಕ ವಿರಾಜಪೇಟೆ ತಾಲೂಕಿನ ಗೇಟ್ ಹಾಡಿ, ಚೊಟ್ಟೆಪಾರೆ, ಪೊನ್ನಂಪೇಟೆ ತಾಲೂಕಿನ ಮಜ್ಜಿಗೆ ಹಳ್ಳ ಹಾಡಿಗಳಿಗೆ ಭೇಟಿ ನೀಡಿ ಮಾಹಿತಿ ಪಡೆದರು.